logo
ಕನ್ನಡ ಸುದ್ದಿ  /  ಕ್ರಿಕೆಟ್  /  ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್ ಶರ್ಮಾ ನಾಯಕ, ಕೊಹ್ಲಿ ಕಂಬ್ಯಾಕ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ; ರೋಹಿತ್ ಶರ್ಮಾ ನಾಯಕ, ಕೊಹ್ಲಿ ಕಂಬ್ಯಾಕ್

Jayaraj HT Kannada

Jan 07, 2024 07:47 PM IST

google News

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್‌ ಕೊಹ್ಲಿ

    • India Squad for AFG series: ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿದ್ದಾರೆ.
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್‌ ಕೊಹ್ಲಿ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್‌ ಕೊಹ್ಲಿ (ANI )

ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಭಾನುವಾರ (ಜನವರಿ 7) ಪ್ರಕಟಿಸಿದೆ. 2022ರ ವಿಶ್ವಕಪ್‌ ಬಳಿಕ ಟಿ20 ಪಂದ್ಯಗಳಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಚುಟುಕು ಸ್ವರೂಪಕ್ಕೆ ಮರಳಿದ್ದಾರೆ. ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್‌ ಮತ್ತು ವಿರಾಟ್‌ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ನಿರಂತರವಾಗಿ ಆಡುತ್ತಿದ್ದರು. ಆದರೆ, ಟಿ20 ತಂಡದಲ್ಲಿ ಹಲವು ತಿಂಗಳುಗಳಿಂದ ಆಡಿರಲಿಲ್ಲ. ಈ ವರ್ಷದ ಜೂನ್‌ ತಿಂಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ಯುಎಸ್ಎಯಲ್ಲಿ ಟಿ20 ವಿಶ್ವಕಪ್‌ ನಡೆಯಲಿರುವ ಹಿನ್ನೆಲೆಯಲ್ಲಿ ಚುಟುಕು ಸ್ವರೂಪದ ತಂಡಕ್ಕೆ ಇಬ್ಬರೂ ಮರಳಿದ್ದಾರೆ.

ಚುಟುಕು ಸ್ವರೂಪಕ್ಕೆ ಇವರಿಬ್ಬರನ್ನು ಆಯ್ಕೆ ಮಾಡುವ ಕುರಿತು ಸಾಕಷ್ಟು ಊಹಾಪೋಹಗಳು ಇದ್ದವು. ಈ ನಡುವೆ ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಇಬ್ಬರೂ ಗಾಯದಿಂದಾಗಿ ಆಯ್ಕೆಗೆ ಲಭ್ಯರಿಲ್ಲ. ಹೀಗಾಗಿ ರೋಹಿತ್ ಮತ್ತು ಕೊಹ್ಲಿಯನ್ನು ತಂಡದಲ್ಲಿ ಹಿರಿಯ ಬ್ಯಾಟರ್‌ಗಳಾಗಿ ಬಿಸಿಸಿಐ ತಂಡಕ್ಕೆ ವಾಪಸ್ ಕರೆಸಿಕೊಂಡಿದೆ.

ಇದನ್ನೂ ಓದಿ | ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಏಕೆ 2024ರ ಟಿ20 ವಿಶ್ವಕಪ್ ಆಡಬೇಕು; ಇಲ್ಲಿವೆ ಮೂರು ಕಾರಣಗಳು

ಸಂಜು ಸ್ಯಾಮ್ಸನ್‌ ಆಯ್ಕೆ

ಆರಂಭಿಕರಾದ ಶುಭ್ಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಆದರೆ ಇಶಾನ್ ಕಿಶನ್ ಅವರನ್ನು ತಂಡದಿಂದ ಹೊರಗಿಡಲಾಗಿದೆ. ಸಂಜು ಸ್ಯಾಮ್ಸನ್ ತಮ್ಮ ಸ್ಥಾನಕ್ಕೆ ಮರಳಿದ್ದು, ಕಳೆದ ತಿಂಗಳು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ್ದ ವಿಕೆಟ್‌ ಕೀಪರ್ ಹಾಗೂ ಬ್ಯಾಟರ್ ಚುಟುಕು ಸ್ವರೂಪದಲ್ಲೂ ಅಬ್ಬರಿಸುವ ನಿರೀಕ್ಷೆ ಇದೆ. ಮತ್ತೋರ್ವ ವಿಕೆಟ್ ಕೀಪರ್ ಆಗಿ ಜಿತೇಶ್ ಶರ್ಮಾ ಕೂಡ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.

ಬೌಲರ್‌ಗಳ ಪೈಕಿ ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್ ಮತ್ತು ರವಿ ಬಿಷ್ಣೋಯ್ ಅವರಿಗೆ ಸ್ಥಾನ ನೀಡಲಾಗಿದೆ. ಆಲ್‌ರೌಂಡರ್‌ ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡಲಾಗಿದೆ. ಅರ್ಷದೀಪ್ ಸಿಂಗ್, ಅವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ವೇಗಿಗಳಾಗಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಜನವರಿ 11 ರಿಂದ ಸರಣಿ

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯು ಜನವರಿ 11 ರಿಂದ ಪ್ರಾರಂಭವಾಗಲಿದೆ. ಮೊದಲ ಟಿ20 ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಎರಡನೇ ಪಂದ್ಯವು ಜನವರಿ 14ರಂದು ಇಂದೋರ್‌ಲ್ಲಿ ಮತ್ತು ಅಂತಿಮ ಪಂದ್ಯವು 17ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ | ಭಾರತ ವಿರುದ್ಧದ ಟಿ20 ಸರಣಿಗೆ ಅಫ್ಘಾನಿಸ್ತಾನ ತಂಡ ಪ್ರಕಟ; ರಶೀದ್ ಆಡುವುದು ಅನುಮಾನ

ಜೂನ್‌ ತಿಂಗಳಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್‌ಗೂ ಮುನ್ನ ಇದು ಭಾರತ ತಂಡದ ಕೊನೆಯ ಟಿ20 ಸರಣಿಯಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ, ಆಯ್ಕೆದಾರರು ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲು ನಿರ್ಧರಿಸಿದ್ದಾರೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭ್ಮನ್‌ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ