logo
ಕನ್ನಡ ಸುದ್ದಿ  /  ಕರ್ನಾಟಕ  /  Kannada Boards: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ, ಫೆಬ್ರವರಿಯೇ ಅಂತಿಮ ಗಡುವು

Kannada Boards: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ, ಫೆಬ್ರವರಿಯೇ ಅಂತಿಮ ಗಡುವು

HT Kannada Desk HT Kannada

Dec 28, 2023 04:40 PM IST

google News

ಕನ್ನಡ ಫಲಕಗಳ ಅನುಷ್ಠಾನ ಕುರಿತು ಬೆಂಗಳೂರಿನಲ್ಲಿ ಸಿಎಂ ಸಭೆ ನಡೆಸಿದರು.

    • CM meeting on Kannada ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದಲ್ಲಿ ವಾಣಿಜ್ಯ ಫಲಕಗಳಲ್ಲಿ ಕನ್ನಡ ಬಳಕೆ ಕುರಿತು ಸಭೆ ನಡೆಸಿ ಸ್ಪಷ್ಟ ಸೂಚನೆ ನೀಡಿದರು.
ಕನ್ನಡ ಫಲಕಗಳ ಅನುಷ್ಠಾನ ಕುರಿತು ಬೆಂಗಳೂರಿನಲ್ಲಿ ಸಿಎಂ ಸಭೆ ನಡೆಸಿದರು.
ಕನ್ನಡ ಫಲಕಗಳ ಅನುಷ್ಠಾನ ಕುರಿತು ಬೆಂಗಳೂರಿನಲ್ಲಿ ಸಿಎಂ ಸಭೆ ನಡೆಸಿದರು.

ಬೆಂಗಳೂರು: ಕರ್ನಾಟಕದಲ್ಲಿ ಎಲ್ಲಾ ವಾಣಿಜ್ಯದಾರರು ನಾಮಫಲಕಗಳನ್ನು ಕನ್ನಡದಲ್ಲಿಯೇ ಅಳವಡಿಸಬೇಕು. ಶೇ. 60ರಷ್ಟು ಕನ್ನಡ ಕಡ್ಡಾಯವಾಗಿ ಇರಲೇಬೇಕು. ಈ ಸಂಬಂಧ ಕಾಯಿದೆಯ ಅಧಿಸೂಚನೆ ಸದ್ಯವೇ ಹೊರ ಬೀಳಲಿದೆ.

ಬೆಂಗಳೂರು ಸಹಿತ ಕರ್ನಾಟಕದ ಹಲವೆಡೆ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಹಿನ್ನೆಲೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆಯನ್ನು ನಡೆಸಿದ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಎಲ್ಲ ವಾಣಿಜ್ಯ ವಹಿವಾಟದಾರರು ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಫೆಬ್ರವರಿ ಅಂತ್ಯದ ಗಡುವಿನೊಳಗೇ ಅಳವಡಿಸಬೇಕು.ಈ ಸಂಬಂಧ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಸಿಎಂ ಹೇಳಿದ ಪ್ರಮುಖ ವಿಷಯಗಳು

  1. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ನ್ಯಾಸಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ.
  2. ಇದಕ್ಕೂ ಮೊದಲು 2018 ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರುವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು.
  3. ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರತಕ್ಕದ್ದು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ.
  4. ಈ ಕಾಯ್ದೆ ಇಡೀ ರಾಜ್ಯಕ್ಕೆ ಅನ್ವಯಿಸುತ್ತದೆ.
  5. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದು ಸ್ಪಷ್ಟ.
  6. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ನ್ನು ಜಾರಿಗೊಳಿಸಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು.
  7. ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ, ಆಡಳಿತ ಭಾಷೆ. ಇದರಲ್ಲಿ ಯಾವುದೇ ರಾಜಿ ಇಲ್ಲ.
  8. ಎಲ್ಲ ಖಾಸಗಿ ಸಂಸ್ಥೆಯವರು ತಮ್ಮ ನಾಮಫಲಕವನ್ನು ಶೇ. 60:40ರ ಅನುಪಾತದಲ್ಲಿ ನಿಗದಿತ ಗಡುವಿನೊಳಗೇ ಅಳವಡಿಸಬೇಕು. ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ.

ಇದನ್ನೂ ಓದಿರಿ: ಮಗಳನ್ನು ನೋಡುವ ತವಕದಿಂದ ಕಸದ ಗಾಡಿಯಲ್ಲಿ ಅಪಾರ್ಟ್‌ಮೆಂಟ್‌ ಪ್ರವೇಶಿಸಿದ ಅಪ್ಪ, ಕೊನೆಗೂ ಹತ್ತಿದ್ದು ಕೋರ್ಟ್‌ ಮೆಟ್ಟಿಲು; ಏನಿದು ಘಟನೆ?

ಸಭೆಯಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ನಸೀರ್ ಅಹಮದ್ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಅತೀಕ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ