logo
ಕನ್ನಡ ಸುದ್ದಿ  /  ಕರ್ನಾಟಕ  /  Budget Session2024:ಕೇಂದ್ರದಿಂದ ರಾಜ್ಯದ ಪಾಲಿನ ಹಣ ಕೊಡಿಸಿ, ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ; ಬಿಜೆಪಿಗೆ ಸಿದ್ದರಾಮಯ್ಯ ಸವಾಲು

Budget Session2024:ಕೇಂದ್ರದಿಂದ ರಾಜ್ಯದ ಪಾಲಿನ ಹಣ ಕೊಡಿಸಿ, ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ; ಬಿಜೆಪಿಗೆ ಸಿದ್ದರಾಮಯ್ಯ ಸವಾಲು

Umesha Bhatta P H HT Kannada

Feb 21, 2024 04:10 PM IST

google News

ಸದನದಲ್ಲಿ ಸಿದ್ದರಾಮಯ್ಯ

    • Cm Siddaramaiah ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್‌ನಲ್ಲಿ ಉತ್ತರಿಸಿ ಪ್ರಧಾನಿ ಮೋದಿ ಅವರ ನೀತಿಗಳ ವಿರುದ್ದ ಟೀಕಾ ಪ್ರಹಾರ ನಡೆಸಿದರು.
ಸದನದಲ್ಲಿ ಸಿದ್ದರಾಮಯ್ಯ
ಸದನದಲ್ಲಿ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು. ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದರು.

ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ. ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.

ಒಕ್ಕೂಟ ವ್ಯವಸ್ಥೆ ಮೋದಿ ಧಕ್ಕೆ

ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

ರಾಜ್ಯದಿಂದ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದರು.

ಸಿಎಂ ಆಗಿದ್ದಾಗ ಮೋದಿ ಹೇಳಿದ್ದೇನು

ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ನಡೆದಿದ್ದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಖ್ಯಮಂತ್ರಿ ಆಗಿದ್ದ ಮೋದಿಯವರು, ಯುಪಿಎ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಬೆದರಿಕೆ ಎಂದು ಹೇಳಿದ್ದ ಮಾತನ್ನು ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ಮೋದಿ ಅವರು ಪ್ರಧಾನ ಮಂತ್ರಿ ಆಗಿದ್ದಾಗ, ರಾಜ್ಯಗಳು ಕೇಂದ್ರದ ಮುಂದೆ ಭಿಕ್ಷುಕರಲ್ಲ. ಗುಜರಾತ್ ರಾಜ್ಯದಿಂದ ಸಂಗ್ರಹ ಆಗುವ ತೆರಿಗೆಯಲ್ಲಿ ಶೇ50 ರಷ್ಟು ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಗುಜರಾತ್ ರಾಜ್ಯದ ತೆರಿಗೆಯನ್ನು ನಾವು ಕೇಂದ್ರಕ್ಕೆ ಕೊಡುವುದಿಲ್ಲ ಎನ್ನುವ ಮಾತನ್ನೂ ಮೋದಿ ಅವರು ಆಡಿದ್ದರು. ಆದರೆ ಈಗ ಅದೇ ಮೋದಿ ಅವರು ಪ್ರಧಾನಿ ಆಗಿರುವಾಗ ಕರ್ನಾಟಕ ರಾಜ್ಯಕ್ಕೆ ವಾಪಾಸ್ ಕೊಡುತ್ತಿರುವುದು ಶೇ 12-13 ರಷ್ಟು ಮಾತ್ರ. ಮೋದಿ ಅವರು ಆಗೊಂದು ಮಾತು ಈಗೊಂದು ರೀತಿ ಮಾತನಾಡಿದ್ದಾರೆ. ಇದನ್ನು ಪ್ರಸ್ತಾಪಿಸಿದರೆ ನಿಮಗೇಕೆ ಸಿಟ್ಟು ಎಂದು ಮುಖ್ಯಮಂತ್ರಿಗಳು ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು.

ಬಜೆಟ್ ಗಾತ್ರ ದೊಡ್ಡದಾದರೂ, ನಮಗೆ ಬರುತ್ತಿರುವ ಪಾಲು ಕಡಿಮೆಯಾಗುತ್ತಿದೆ. ಪ್ರಧಾನಿ ಅವರು ರಾಷ್ಟ್ರಪತಿಗಳ ಭಾಷಣದ ಚರ್ಚೆಗೆ ಉತ್ತರಿಸುತ್ತಾ ರಾಜ್ಯದ ತೆರಿಗೆ ಪ್ರತಿಭಟನೆಯನ್ನು ಗುರಿಯಾಗಿಸಿಕೊಂಡು ‘ದೇಶದ ಐಕ್ಯತೆಗೆ ಅಪಾಯವೊಡ್ಡುತ್ತದೆ’ ಎಂದಿದ್ದರು. ಅದೇ ಪ್ರಧಾನಿ ಮಂತ್ರಿಗಳು ಗುಜರಾತಿನ ಸಿಎಂ ಆಗಿದ್ದಾಗ 2012 ರಲ್ಲಿ ಗುಜರಾತಿಗೆ ಬರುತ್ತಿರುವ ಆರ್ಥಿಕ ಪಾಲನ್ನು ವಿರೋಧಿಸಿದ್ದರು. ಗುಜರಾತ್ ರಾಜ್ಯ ’ನಾವು ಭಿಕ್ಷುಕ ರಾಜ್ಯವೇ, ನಾವು ಭಿಕ್ಷುಕರೆ, ನಾವು ಕೇಂದ್ರದ ಕರುಣೆಯ ಮೇಲೆ ಬದುಕಬೇಕೆ’ ಎಂದಿದ್ದರು. ಅಂದಿನ ಕೇಂದ್ರಕ್ಕೆ ‘ಗುಜರಾತಿನಿಂದ ತೆರಿಗೆ ತೆಗೆದುಕೊಳ್ಳಬೇಡಿ, ಅದನ್ನು ನಾವೇ ಬಳಸಿಕೊಳ್ಳುತ್ತೇವೆ’ಎಂದು ಮೋದಿ ಅವರು ಅಂದಿದ್ದರು. ಇದು ಸಂವಿಧಾನ, ಒಕ್ಕೂಟ ವ್ಯವಸ್ಥೆಗೆ ವಿರೋಧವಲ್ಲವೇ ಎಂದು ಅಂದಿನ ಮೋದಿಯವರ ಮಾತನ್ನೇ ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಬಿಜೆಪಿ ಸಭಾತ್ಯಾಗ

ಮುಖ್ಯಮಂತ್ರಿಗಳು ಕೇಂದ್ರದಿಂದ ರಾಜ್ಯಕ್ಕೆ, ರಾಜ್ಯದ ಪಾಲು ನೀಡಿಕೆಯಲ್ಲಿ ಆಗುತ್ತಿರುವ ಅನ್ಯಾಯವನ್ನು ವಿವರಿಸುತ್ತಿದ್ದರು. ಬರಗಾಲ ಬಂದಾಗಲೂ ರಾಜ್ಯಕ್ಕೆ ಒಂದೇ ಒಂದು ರೂಪಾಯಿ ಕೊಡದ ಕೇಂದ್ರದ ಧೋರಣೆಯನ್ನು ವಿವರಿಸುತ್ತಿದ್ದಾಗ ಬಿಜೆಪಿ ಸದಸ್ಯರು ತಮ್ಮ ತಕರಾರುಗಳನ್ನು ಸಭೆಯ ಮುಂದಿಟ್ಡು ಸಭಾ ತ್ಯಾಗ ಮಾಡಿದರು.

ಈ ವೇಳೆ ಆಡಳಿತ ಪಕ್ಷದ ಕಾಂಗ್ರೆಸ್ ಸದಸ್ಯರು ನಮ್ಮ ತೆರಿಗೆ ನಮ್ಮ ಹಕ್ಕು ರಾಜ್ಯದ ತೆರಿಗೆ ರಾಜ್ಯದ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಿದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ