logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Protest: ತೆರಿಗೆ, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಆರೋಪ, ನಾಳೆ ದೆಹಲಿಯಲ್ಲಿ ಕರ್ನಾಟಕದಿಂದ ಪ್ರತಿಭಟನೆ

Karnataka Protest: ತೆರಿಗೆ, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಆರೋಪ, ನಾಳೆ ದೆಹಲಿಯಲ್ಲಿ ಕರ್ನಾಟಕದಿಂದ ಪ್ರತಿಭಟನೆ

Umesha Bhatta P H HT Kannada

Feb 06, 2024 08:30 AM IST

ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿದರು.

    • ಕೇಂದ್ರ ಸರ್ಕಾರ ಅನುದಾನ ಹಂಚಿಕೆ, ತೆರಿಗೆ ವಿಚಾರದಲ್ಲಿ ಕರ್ನಾಟಕ ನ್ಯಾಯ ಒದಗಿಸುತ್ತಿಲ್ಲ ಎಂದು ದೆಹಲಿಯಲ್ಲಿ ಕರ್ನಾಟಕದ ಸಚಿವರು, ಕಾಂಗ್ರೆಸ್‌ ನ ಶಾಸಕರು ಬುಧವಾರ ಪ್ರತಿಭಟನೆ ನಡೆಸಲಿದ್ದಾರೆ. 
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ ನಡೆಸಿದರು.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನ ಬಹುತೇಕ ನಾಯಕರು, ಸಚಿವರು, ಶಾಸಕರು ಫೆ.7ರ ಬುಧವಾರ ದೆಹಲಿಯಲ್ಲಿ ಇರಲಿದ್ದಾರೆ. ಅದೂ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ತೆರಿಗೆ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆ ಮೂಲಕ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಹಾಗೂ ಕೇಂದ್ರ ಸರ್ಕಾರವನ್ನು ಗಮನ ಸೆಳೆಯಲು ಪ್ರತಿಭಟನೆಯನ್ನು ರೂಪಿಸಲಾಗಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು: ಕೊನೆಗೂ ತೆರಿಗೆ ಕಟ್ಟಲು ಒಪ್ಪಿಕೊಂಡ ಮಂತ್ರಿ ಮಾಲ್; ಬೀಗ ತೆಗೆಯುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಆತ್ಮಹತ್ಯೆಯ ನಾಟಕವಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಜಿಮ್ ತರಬೇತುದಾರ; ಮನೆಯಲ್ಲೇ ಬಿಬಿಎ ವಿದ್ಯಾರ್ಥಿನಿ ಶಂಕಾಸ್ಪದ ಸಾವು

ಹುಬ್ಬಳ್ಳಿ ಅಂಜಲಿ ಕೊಲೆ ಪ್ರಕರಣ; ದಾವಣಗೆರೆ ಮಾಯಕೊಂಡ ಬಳಿ ರೈಲ್ವೆ ಪೊಲೀಸರಿಗೆ ಸೆರೆ ಸಿಕ್ಕ ಆರೋಪಿ ಗಿರೀಶ್‌

ಬೆಂಗಳೂರು: ಹೆಚ್ಚು ಹಣ ವಸೂಲಿ ಮಾಡಲು ಮುಂದಾದ ಓಲಾ ಕ್ಯಾಬ್‌ ಚಾಲಕ, ಹೊಸ ವಂಚನಾ ಕ್ರಮ ಪತ್ತೆ ಹಚ್ಚಿದ ಮಹಿಳೆ

ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನದ ಮೂಲಕ ಕೇಂದ್ರ ಮತ್ತು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸೇರಿ ಜನರ ಸೇವೆಯನ್ನು ಮಾಡಲು ಒಪ್ಪಿಕೊಂಡಿದ್ದೇವೆ. ಕೇಂದ್ರ ಸರ್ಕಾರದ ತೆರಿಗೆ ಹಣವೆಂದರೆ ರಾಜ್ಯಗಳಿಂದ ಬರುವ ತೆರಿಗೆ ಹಣ , ಸೆಸ್, ಪೆಟ್ರೋಲ್ ಡೀಸೆಲ್, ಸರ್ಚಾರ್ಜ್. ಇವುಗಳಿಂದ ಸಂಗ್ರಹ ವಾಗುವ ಹಣವನ್ನು ಕೇಂದ್ರ ಮತ್ತು ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಹಣಕಾಸು ಆಯೋಗ ರಚನೆಯಾಗಿದೆ. ಸಂವಿಧಾನದ 7 ನೇ ಪರಿಚ್ಛೇಧ ಅದನ್ನು ಸ್ವತಂತ್ರ ಸಂಸ್ಥೆಯಾಗಿಸಿದೆ. ಇಲ್ಲಿಯವರೆಗೆ 15 ಹಣಕಾಸು ಆಯೋಗಗಳು ಆಗಿವೆ. ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗಿದ್ದು, ಅಧ್ಯಕ್ಷರ ನೇಮಕವಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯದ ತೆರಿಗೆಯ ಪಾಲು ಶೇ 4.71 ಇದ್ದದ್ದು, 15 ನೇ ಹಣಕಾಸು ಆಯೋಗದಲ್ಲಿ ಶೇ.3.64 ಗೆ ಇಳಿಕೆಯಾಯಿತು. ಅದರಿಂದ 4 ವರ್ಷಗಳಲ್ಲಿ 45,000 ಕೋಟಿ ರೂ. ರಾಜ್ಯಕ್ಕೆ ಕಡಿತ ಆಯಿತು. ಇದು ಕೇವಲ ನಗದು ಹಂಚಿಕೆಯೊಂದರಲ್ಲೇ ಆಗಿರುವ ಅನ್ಯಾಯ. ಅಂದಾಜಿನ ಪ್ರಕಾರ ಈ ವರ್ಷ ನಮ್ಮ ರಾಜ್ಯಕ್ಕೆ ನಗದು ಹಂಚಿಕೆಯಲ್ಲಿ 62098 ಕೋಟಿ ರೂ.ಗಳು ಕರ್ನಾಟಕಕ್ಕೆ ಕಡಿಮೆಯಾಗಲಿದೆ ಎಂದು ಅಂಕಿ ಅಂಶ ಸಮೇತ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ವಿವರಿಸಿದರು.

ರಾಜ್ಯದ ಜನತೆ ನಮಗೆ ಕೊಟ್ಟ ಅವಕಾಶಕ್ಕೆ ನ್ಯಾಯ ಒದಗಿಸಬೇಕಾದುದ್ದು ನಮ್ಮ ಕರ್ತವ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ನ್ಯಾಯ ಒದಗಿಸಿಕೊಡಲಿದೆ ಎಂದು ಇಲ್ಲಿಯವರೆಗೂ ತಾಳ್ಮೆ ಯಿಂದ ಕಾಯುತ್ತಿದ್ದೆವು. ಕಳೆದ ಸಾಲಿನ ಬಜೆಟ್ ನಲ್ಲಿ ಹೇಳಿದಂತೆ ನಡೆದುಕೊಳ್ಳುತ್ತಾರೆ ಎಂದು ಕಾದಿದ್ದೆವು. ಆದರೆ ಇದುವರೆಗೂ ಅನ್ಯಾಯ ಸರಿಪಡಿಸಿಲ್ಲ. ಇದರ ವಿರುದ್ಧ ಧ್ವನಿ ಎತ್ತಲೇಬೇಕಾಗಿದೆ. ಹೋರಾಟಕ್ಕೆ ಜೊತೆ ನೀಡಲು ಇಡೀ ಸರ್ಕಾರ ಪಕ್ಷ ಭೇದ ಮರೆತು ಆಹ್ವಾನ ನೀಡಿದ್ದೇವೆ. ಕನ್ನಡಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕಿದೆ. ಕೇಂದ್ರದ ಕಿವಿಯನ್ನು ತೆರೆಸಲು ಹೋರಾಡುತ್ತಿದ್ದೇವೆ ಎಂದರು.

ರಾಜ್ಯಕ್ಕೆ 73,593 ಕೋಟಿ ರೂ.ಗಳು ತೆರಿಗೆ ಪಾಲು ಕಡಿಮೆ

ಮೋದಿ ಅವರು ಪ್ರಧಾನಿ ಆದ ಬಳಿಕ 2020-21 ರಿಂದ 2025-26 ರವೆಗಿನ ಅವಧಿಗೆ ರಚನೆಯಾದ 15 ನೇ ಹಣಕಾಸು ಆಯೋಗದ ತೆರಿಗೆ ಪಾಲು ಹಂಚಿಕೆಯಲ್ಲಿ 62,098 ಕೋಟಿ ರೂ.ಗಳಷ್ಟು ರಾಜ್ಯಕ್ಕೆ ನಷ್ಟವಾಗಿದೆ . ಅಂತೆಯೇ 2020-21 ಹಾಗೂ 2021-22 ನೇ ಸಾಲಿಗೆ ವಿಶೇಷ ಅನುದಾನ ಕೊಡದೆ ರಾಜ್ಯಕ್ಕೆ 11,495 ಕೋಟಿ ರೂ.ಗಳು ನಷ್ಟವಾಗಿದೆ. ಒಟ್ಟಾರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲಿನಲ್ಲಿ 73,593 ಕೋಟಿ ರೂ.ಗಳು ಕಡಿಮೆಯಾಯಿತು. 16 ನೇ ಹಣಕಾಸು ಆಯೋಗದ ಮುಂದೆ ಸೆಸ್ ಹಾಗೂ ಸರ್ ಚಾರ್ಜ್ ನಲ್ಲೂ ಪಾಲು ಕೊಡಲೇಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

GST ಜಾರಿಗೆ ಬಂದಾಗ ಇದು ಅವೈಜ್ಞಾನಿಕ ಎಂದು ನಾವು ಸಾರಿ ಸಾರಿ ಹೇಳಿದೆವು. ಆಗ ರಾಜ್ಯದ ತೆರಿಗೆ ಬೆಳವಣಿಗೆ ದರ ಶೇ15 ಇತ್ತು. ಇದರಿಂದ ತೆರಿಗೆ, ಕೇಂದ್ರದ ಅನುದಾನವೂ ಹೆಚ್ಚಾಗತ್ತೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅದನ್ನೂ ಪರಿಹಾರ ರೂಪದಲ್ಲಿ ರಾಜ್ಯಕ್ಕೆ ತುಂಬಿ ಕೊಡುವುದಾಗಿ ಕೇಂದ್ರ ಹೇಳಿತ್ತು.‌ ಈ ಪರಿಹಾರ ಜೂನ್ 2022 ಕ್ಕೆ ನಿಲ್ಲಿಸಿದ್ದಾರೆ. ಈಗ ಪರಿಹಾರ ಕೊಡ್ತಾ ಇಲ್ಲ. 5 ವರ್ಷಗಳ ಕಾಲ ಮಾತ್ರ ಪರಿಹಾರ ಕೊಟ್ಟರು. ಪರಿಹಾರ ಮುಂದುವರೆಸಿ ಎಂದು ಕೇಳಿದೆವು. ಇವತ್ತಿನವರೆಗೂ ಮುಂದುವರೆಸುವ ಬಗ್ಗೆ ತೀರ್ಮಾನವನ್ನೇ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರ್ಮಲಾ ಸೀತಾರಾಮನ್ ರಿಂದ ರಾಜ್ಯಕ್ಕೆ ಲಾಭವೇ ಇಲ್ಲ

ಯಡಿಯೂರಪ್ಪ, ಬೊಮ್ಮಾಯಿ ಅವರು ಪ್ರಧಾನಿಗಳ ಮುಂದೆ ಬಾಯಿ ಬಿಡುವುದಿಲ್ಲ. ವಿರೋಧಪಕ್ಷದ ನಾಯಕ ಆರ್.ಅಶೋಕ್ ಗೆ ಈ ವಿಷಯಗಳೆಲ್ಲಾ ಅರ್ಥವೇ ಆಗಲ್ಲ. ಪ್ರಹ್ಲಾದ್ ಜೋಷಿ ಮತ್ತು ಶೋಭಾ ಕರಂದ್ಲಾಜೆ ರಾಜ್ಯದಿಂದ ಕೇಂದ್ರ ಮಂತ್ರಿಗಳಾಗಿದ್ದಾರೆ. 27 ಜನ ಸಂಸದರು ಸಂಸತ್ತಿನಲ್ಲಿ ಮಾತೇ ಆಡಿಲ್ಲ. ಜನ ಇವರನ್ನು ಆಯ್ಕೆ ಮಾಡಿ ಕಳುಹಿಸಿದರೆ ಕಣ್ಣುಮುಚ್ಚಿ ಕುಳಿತಿದ್ದಾರೆ. ಇವರು ರಾಜ್ಯದ ಪರವಾಗಿ ಪಾರ್ಲಿಮೆಂಟಲ್ಲಿ ಬಾಯಿಯನ್ನೇ ಬಿಡುತ್ತಿಲ್ಲ. 11 ಸಾವಿರ ಕೋಟಿ ಕೇಂದ್ರ ಹಣಕಾಸು ಸಚಿವರಿಂದಲೇ ತಿರಸ್ಕಾರವಾಗಿದೆ. ರಾಜ್ಯದಿಂದ ಆಯ್ಕೆ ಆದ ನಿರ್ಮಲಾ ಸೀತಾರಾಮನ್ ರಿಂದಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯ ಆಗಿದೆ ಎಂದು ಬೇಸರಿಸಿದರು.

ರಾಜ್ಯಕ್ಕೆ ನಿರಂತರ ಅನ್ಯಾಯ

ಮಹದಾಯಿ ಯೋಜನೆಯ ಪರಿಸರ ತೀರುವಳಿ ಇಂದಿನವರೆಗೆ ಆಗಿಲ್ಲ. ಯೋಜನೆ ಪ್ರಾರಂಭಿಸಲು ತೀರುವಳಿ ಕೊಡಿ ಎಂದರೆ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿಲ್ಲ. ಇಂದಿನವರೆಗೆ ಗೆಜೆಟ್ ನೋಟಿಫಿಕೇಶನ್ ಮಾಡಿಕೊಟ್ಟಿಲ್ಲ. ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೇಕೆದಾಟು ಇವತ್ತಿನವರೆಗೂ ಅನುಮತಿ ಕೊಟ್ಟಿಲ್ಲ. 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದೆ. 123 ತೀವ್ರ ಬರಗಾಲ ಪೀಡಿತವಾಗಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ಭದ್ರಾ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿ ಈವರಗೆ ಒಂದು ರೂ. ಕೂಡ ಬಿಡುಗಡೆ ಮಾಡಿಲ್ಲ. ಬರಗಾಲ ಪರಿಹಾರದ ಹಣವೂ ಇಲ್ಲ. 150 ಮಾನವ ದಿನಗಳಿಗೆ ಕೂಲಿ ಕೊಡಲು ಕೂಡ ಅನುಮತಿ ನೀಡಿಲ್ಲ ಎಂದು ಟೀಕಿಸಿದರು.

ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಶಾಸಕರು, ಮೇಲ್ಮನೆ ಶಾಸಕರು ಭಾಗವಹಿಸುತ್ತಿದ್ದಾರೆ. ಬಿಜೆಪಿ ಶಾಸಕರು, ಸಂಸದರು, ನಾಯಕರಿಗೂ ನಾವು ಪ್ರತಿಭಟನೆಗೆ ಕರೆ ಕೊಡುತ್ತಿದ್ದೇವೆ. ನಾವು ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ. ನೀವೂ ರಾಜ್ಯದ ಜನರ ಧ್ವನಿಯಾಗಿ, ರಾಜ್ಯದ ಜನರ ಪರವಾಗಿ ನಿಲ್ಲಿ ಎಂದು ಬಿಜೆಪಿ ಯವರಿಗೆ ಕರೆ ಕೊಡುತ್ತೇವೆ. ಪ್ರತಿಭಟಿಸದಿದ್ದರೆ ಕನ್ನಡಿಗರಿಗೆ ದ್ರೋಹ ಉಂಟಾಗಲಿದೆ ಎನ್ನುವುದು ಸಿದ್ದರಾಮಯ್ಯ ಅವರ ಅಭಿಪ್ರಾಯ.

ವಿಭಾಗ

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ