logo
ಕನ್ನಡ ಸುದ್ದಿ  /  ಕರ್ನಾಟಕ  /  Bengaluru News: ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಸೈಲೆಂಟ್ ಬಸ್‌, ಬಿಎಂಟಿಸಿಯಲ್ಲೀಗ ಎಲೆಕ್ಟ್ರಿಕ್ ಬಸ್‌ಗಳದ್ದೇ ಕಾರುಬಾರು

Bengaluru News: ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಸೈಲೆಂಟ್ ಬಸ್‌, ಬಿಎಂಟಿಸಿಯಲ್ಲೀಗ ಎಲೆಕ್ಟ್ರಿಕ್ ಬಸ್‌ಗಳದ್ದೇ ಕಾರುಬಾರು

HT Kannada Desk HT Kannada

Dec 26, 2023 02:12 PM IST

google News

ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಸ್‌ ನಲ್ಲಿ ಪ್ರಯಾಣಿಸಿದರು.

    • BMTC: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ದಿನದಿಂದ ದಿನಕ್ಕೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ಹೊಸ ಬಸ್‌ಗಳನ್ನು ಲೋಕಾರ್ಪಣೆ ಮಾಡಿದರು.
ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಸ್‌ ನಲ್ಲಿ ಪ್ರಯಾಣಿಸಿದರು.
ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಶಿವಕುಮಾರ್‌, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬಸ್‌ ನಲ್ಲಿ ಪ್ರಯಾಣಿಸಿದರು.

ಬೆಂಗಳೂರು: ನಗರದ ಜೀವನಾಡಿಯಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (BMTC) 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಡಿ 26) ಹಸ್ತಾಂತರಿಸಿದರು.

ಕಾರ್ಯಕ್ರಮದ ನಂತರ ಮುಖ್ಯಮಂತ್ರಿಯೊಂದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್‌ ಏರಿ ಒಂದು ರೌಂಡ್ ಹೋಗಿ ಬಂದರು.

ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, 'ಮುಂದಿನ ವರ್ಷ ಏಪ್ರಿಲ್ ವೇಳೆಗೆ 1,400 ಹೊಸ ಎಲೆಕ್ಟ್ರಿಕ್ ಬಸ್‌ಗಳು ಬಿಎಂಟಿಸಿಗೆ ಸೇರ್ಪಡೆಯಾಗಲಿವೆ' ಎಂದರು.

ಹೊಸ ವರ್ಷದ ಸಂದರ್ಭದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 100 ವಿದ್ಯುತ್ ಚಾಲಿತ ಬಸ್ ಗಳನ್ನುಸೇರಿಸಲಾಗಿದ್ದು, ಹಂತ ಹಂತವಾಗಿ ಇವುಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದು ಸಿಎಂ ಹೇಳಿದರು.

ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಸಿ.ಎಂ ಪ್ರಶ್ನಿಸಿದರು.

ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ. ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.

ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ ಎಂದು ಹೇಳಿದರು.

ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದು ತಿರುಗೇಟು ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ,ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕ್ರೀಡಾ ಸಚಿವ ನಾಗೇಂದ್ರ, , ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ , ಅಪರ ಮುಖ್ಯ ಆಯುಕ್ತರಾದ ಶಾಲಿನಿ ರಜನೀಶ್‌, ಬಿಎಂಟಿಸಿ ಎಂಡಿ ಜಿ.ಸತ್ಯವತಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ