Prajwal Revanna: ಸಂಸದ ಸ್ಥಾನದಿಂದ ಅನರ್ಹಗೊಂಡ ಪ್ರಜ್ವಲ್ ರೇವಣ್ಣ, ಕರ್ನಾಟಕ ಹೈಕೋರ್ಟ್‌ನಲ್ಲಿ ಜೆಡಿಎಸ್ ಯುವ ನಾಯಕನಿಗೆ ಹಿನ್ನಡೆ
Sep 01, 2023 10:03 PM IST
ಸಂಸದ ಸ್ಥಾನದಿಂದ ಅನರ್ಹಗೊಂಡ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ. ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಕ್ಕೆ ಕೋರ್ಟ್ ತೀರ್ಪು
Prajwal Revanna: ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಕಳೆದುಕೊಂಡರು. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದನ್ನು ಆಕ್ಷೇಪಿಸಿ ಸಲ್ಲಿಕೆಯಾದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಈ ತೀರ್ಪು ನೀಡಿದೆ.
ಬೆಂಗಳೂರು: ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ(Prajwal Revanna) ಅವರು ಸಂಸದ ಸ್ಥಾನದಿಂದ ಅನರ್ಹರಾಗಿದ್ದಾರೆ. ಕರ್ನಾಟಕ ಹೈಕೋರ್ಟ್ (Karnataka High Court) ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ನೀಡಿದೆ.
ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಈ ತೀರ್ಪು ನೀಡಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ನೀಡಿದ್ದ ಅಫಿಡವಿಟ್‌ನಲ್ಲಿ ಆಸ್ತಿವಿವರವನ್ನು ಸರಿಯಾಗಿ ದಾಖಲಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.
ವಕೀಲ ದೇವರಾಜೇಗೌಡ ಈ ಕುರಿತು ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು, ಪ್ರಜ್ವಲ್ ರೇವಣ್ಣ ಸಂಸದರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿದ್ದರು. ಇದರಂತೆ ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ತೀರ್ಪು ನೀಡಿದೆ.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವಾಗ ಪ್ರಜ್ವಲ್ ರೇವಣ್ಣ ನೀಡಿದ್ದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಿದ್ದರು. ಹೀಗಾಗಿ ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಎ.ಮಂಜು (ಅರಕಲಗೂಡು ಮಂಜು) ಅವರು ಅರ್ಜಿ ಸಲ್ಲಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎ.ಮಂಜು ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆದರೆ, ಎ.ಮಂಜು ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು.
ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪವೇನು
ಪ್ರಜ್ವಲ್ ರೇವಣ್ಣ ಅವರು 2019ರ ಲೋಕಾಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವಾಗ ನೀಡಿದ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬುದು ಅವರ ವಿರುದ್ಧದ ನೇರ ಆರೋಪ.
ಚುನಾವಣಾ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ 2019ರ ಲೋಕಸಭಾ ಚುನಾವಣೆಗೆ ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎ ಮಂಜು ಮತ್ತು ವಕೀಲ ದೇವರಾಜೇಗೌಡ ಹೈ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಎ. ಮಂಜು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಸರ್ಕಾರಿ ಜಮೀನು ಖರೀದಿಸಿದ್ದಾರೆ. ಆದಾಯ ತೆರಿಗೆ ವಂಚಿಸಿದ್ದಾರೆ. ಬೇನಾಮಿ ಆಸ್ತಿ ಗಳಿಸಿದ್ದಾರೆ. ಹೊಳೆನರಸೀಪುರದಲ್ಲಿರುವ ಚೆನ್ನಾಂಬಿಕ ಕನ್ವೆನ್ಶನ್ ಸೆಂಟರ್ ಕಟ್ಟಡ ಕನಿಷ್ಠ 5 ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಆದರೆ ಅದರ ಮೌಲ್ಯವನ್ನು 14 ಲಕ್ಷ ರೂಪಾಯಿ ಎಂದು ತೋರಿಸಲಾಗಿದೆ. ಬೆಂಗಳೂರಿನ ಮಿನರ್ವ ಸರ್ಕಲ್‌ನಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯ ಖಾತೆಯಲ್ಲಿ 48 ಲಕ್ಷ ರೂಪಾಯಿ ಹೊಂದಿದ್ದರೂ ಕೇವಲ 5 ಲಕ್ಷ ರೂಪಾಯಿ ಇದೆ ಎಂದು ಪ್ರಜ್ವಲ್ ರೇವಣ್ಣ ತೋರಿಸಿದ್ದರು ಎಂದು ವಕೀಲ ದೇವರಾಜೇ ಗೌಡ ಆರೋಪಿ ತಕರಾರು ಅರ್ಜಿ ಸಲ್ಲಿಸಿದ್ದರು.