HD Revanna: ಹೆಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ಸಮನ್ಸ್, ಮಧ್ಯಂತರ ತಡೆ ಕೋರಿದ ಪ್ರಜ್ವಲ್ ರೇವಣ್ಣ; ಇಕ್ಕಟ್ಟಿಗೆ ಸಿಲುಕಿದ ಅಪ್ಪ, ಮಗ
Sep 05, 2023 06:58 PM IST
ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಕರ್ನಾಟಕ ಹೈಕೋರ್ಟ್, ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ
ಚುನಾವಣಾ ಅಕ್ರಮ ಸಂಬಂಧ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಈ ನಡುವೆ, ಇಂಥದ್ದೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೋರ್ಟ್ ಅನರ್ಹಗೊಳಿಸಿತ್ತು. ಇದರ ವಿರುದ್ಧ ಅವರು ಮಧ್ಯಂತರ ತಡೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು: ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಜಿಲ್ಲೆ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಎಚ್.ಡಿ. ರೇವಣ್ಣ ಅವರು ಅಕ್ರಮಗಳನ್ನು ನಡೆಸುವ ಮೂಲಕ ಆಯ್ಕೆಯಾಗಿದ್ದಾರೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಲಾದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ರೇವಣ್ಣ ಅವರ ಬೆಂಬಲಿಗರು ಕ್ಷೇತ್ರದ ಅಣ್ಣೆಹಳ್ಳಿ ಗ್ರಾಮದಲ್ಲಿ ಮತದಾರರಿಗೆ 2 ಸಾವಿರ ನಗದು ಮತ್ತು ತಲಾ 2 ಕೋಳಿ ಹಂಚುವ ಮೂಲಕ ಮತದರಾರನ್ನು ಓಲೈಸಿದ್ದಾರೆ ಎಂಬ ಆರೋಪವೂ ಸೇರಿದಂತೆ ವಿವಿಧ ಅಕ್ರಮ ನಡೆಸಿ ಗೆದ್ದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಲಾದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಒಂದು ವೇಳೆ ಚುನಾವಣಾ ಅಕ್ರಮ ನಡೆದಿರುವುದು ಸಾಬೀತಾದರೆ ರೇವಣ್ಣ ಅವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆಗಳಿವೆ.
ಹೆಚ್.ಡಿ. ರೇವಣ್ಣ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಹೈಕೋರ್ಟ್ ವಕೀಲ ಜಿ. ದೇವರಾಜೇ ಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ.
ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಪೀಠವು ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿತ್ತು. ಆದರೆ, ಪ್ರತಿವಾದಿ ರೇವಣ್ಣ ಸಮನ್ಸ್ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿಗಳ ಮೂಲಕ ಮತ್ತೊಂದು ಬಾರಿ ಸಮನ್ಸ್ ಜಾರಿಗೊಳಿಸಲು ಆದೇಶಿಸಲಾಗಿದ್ದು, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಲಾಗಿದೆ.
ರೇವಣ್ಣ ಅವರ ವಿರುದ್ಧದ ಚುನಾವಣಾ ಅಕ್ರಮ ಕೇಸ್ ಯಾವುದು
ಶಾಂತಿಗ್ರಾಮದ ಬಳಿ ಮತದಾರರಿಗೆ ನಗದು ಹಣ ಮತ್ತು ಕೋಳಿಗಳನ್ನು ನೀಡುವ ಮೂಲಕ ಆಮಿಷವೊಡ್ಡುತ್ತಿದ್ದುದನ್ನು ತಡೆಯಲು ಹೋದಾಗ ರೇವಣ್ಣ ಅವರ ಬೆಂಬಲಿಗರು ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಮಿಥುನ್, ಮೋಹನ್, ಮಂಜು ಮತ್ತು ಶಂಕರ್ ಸೇರಿದಂತೆ ಸುಮಾರು 30 ಮಂದಿ ವಿರುದ್ಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ಮಧ್ಯಂತರ ಅರ್ಜಿ
ಹಾಸನ ಲೋಕಸಭಾ ಕ್ಷೇತ್ರದಿಂದ ತಮ್ಮ ಆಯ್ಕೆಯನ್ನು ಅಸಿಂಧುಗೊಳಿಸಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಕರ್ನಾಟಕ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಈ ಅರ್ಜಿಯನ್ನು ಇನ್ನಷ್ಟೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕಿದೆ.
ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ವಿವರಗಳನ್ನು ಮರೆಮಾಚಿದ್ದ ಮತ್ತು ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿಯ ಅಂದಿನ ಪರಾಜಿತ ಅಭ್ಯರ್ಥಿ ಎ.ಮಂಜು ಹಾಗೂ ಜಿ.ದೇವರಾಜೇಗೌಡ 2019ರಲ್ಲಿ ಹೈಕೋರ್ಟ್‌ಗೆ ಪ್ರತ್ಯೇಕ ಚುನಾವಣಾ ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿತ್ತು.
ಒಟ್ಟಿನಲ್ಲಿ ಅಪ್ಪ ಮತ್ತು ಮಗ ಇಬ್ಬರೂ ಇಕ್ಕಟ್ಟಿನಲ್ಲಿ ಸಿಲುಕಿರುವುದಂತೂ ನಿಜ. ಪ್ರಜ್ವಲ್ ರೇವಣ್ಣ ಅವಧಿ ಮುಂದಿನ ವರ್ಷ ಮೇ ತಿಂಗಳಲ್ಲಿ ಮುಗಿಯುತ್ತದೆ. ರೇವಣ್ಣ ಅವರು ವಿಧಾನಸಭೆಗೆ ಆಯ್ಕೆಯಾಗಿ ಇನ್ನೂ ನಾಲ್ಕು ತಿಂಗಳಾಗಿಲ್ಲ. ಒಂದು ವೇಳೆ ಇವರು ಅನರ್ಹಗೊಂಡರೆ ಆರು ವರ್ಷ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ರೇವಣ್ಣ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ವರದಿ - ಎಚ್.ಮಾರುತಿ, ಬೆಂಗಳೂರು