ವಾಲ್ಮೀಕಿ ನಿಗಮದ ಅಧಿಕಾರಿ ಆತ್ಯಹತ್ಯೆ ಪ್ರಕರಣ; ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು
May 28, 2024 09:13 PM IST
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಯಹತ್ಯೆ ಪ್ರಕರಣದಲ್ಲಿ ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
- ವಾಲ್ಮೀಕಿ ನಿಗಮದ ಪ್ರಾಥಮಿಕ ಖಾತೆಯಿಂದ ಕೋಟಿ ಕೋಟಿ ಹಣವನ್ನು ಬೇರೆಡೆಗೆ ವರ್ಗಾಯಿಸಲು ಸಮಾನಾಂತರ ಬ್ಯಾಂಕ್ ಖಾತೆಯನ್ನು ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದರು ಎಂದು ಮೃತ ಚಂದ್ರಶೇಖರನ್ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಡಿಸಿ) ಲೆಕ್ಕಪತ್ರ ಅಧೀಕ್ಷಕ ಚಂದ್ರಶೇಖರನ್ ಪಿ (48) ಅವರು ತಮ್ಮ ಹುಟ್ಟೂರು ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾನುವಾರ (ಮೇ 26) ನಡೆದಿದೆ. ಘಟನೆ ಸಂಬಂಧ ಇಂದು (ಮೇ 28, ಮಂಗಳವಾರ) ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು, ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರನ್ ಪಿ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಆರು ಪುಟಗಳ ಟಿಪ್ಪಣಿಯನ್ನು ಬರೆದಿಟ್ಟು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಸಂಬಂಧ ಡೆತ್ ನೋಟ್ ಆಧರಿಸಿ ಮೂವರು ಅಧಿಕಾರಿಗಳು ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದೇವೆ. ಭಾರತೀಯ ದಂಡ ಸಂಹಿತೆಯ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಈ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ.
ನಿಮಗದಲ್ಲಿ ಸುಮಾರು 87 ಕೋಟಿ ರೂ.ಗಳ ದುರುಪಯೋಗವಾಗಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಾಥಮಿಕ ಖಾತೆಯಿಂದ ಕೋಟಿ ಕೋಟಿ ಹಣವನ್ನು ಬೇರೆಡೆಗೆ ವರ್ಗಾಯಿಸಲು ಸಮಾನಾಂತರ ಬ್ಯಾಂಕ್ ಖಾತೆಯನ್ನು ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸುತ್ತಿದ್ದರು ಎಂದು ಮೃತ ಅಧಿಕಾರಿ ಪತ್ರದಲ್ಲಿ ಆರೋಪಿಸಿದ್ದಾರೆ. ಆರೋಪಿತ ಸರ್ಕಾರಿ ಅಧಿಕಾರಿಗಳು ಪ್ರಸ್ತುತ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. ಹೆಚ್ಚಿನ ತನಿಖೆಗಾಗಿ ಮೃತ ಲೆಕ್ಕಾಧಿಕಾರಿಯ ಆತ್ಮಹತ್ಯೆ ಪತ್ರ ಮತ್ತು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನ ಬಿಡೋದಿಲ್ಲ; ಸಚಿವ ಬಿ ನಾಗೇಂದ್ರ
ಕೆಎಂವಿಎಸ್‌ಟಿಡಿಸಿ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ ಪದ್ಮನಾಭ, ದುರ್ಗಣ್ಣ ಮತ್ತು ಸುಚಿಸ್ಮಿತಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ತಿಳಿಸಿದ್ದಾರೆ. "ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಮತ್ತು ಅವರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ, ನಾವು ಅವರನ್ನು ಬಿಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಆರೋಪಿತ ಅಧಿಕಾರಿಗಳನ್ನು ಅಮಾನತುಗೊಳಿಸುತ್ತೇವೆ. ಸಾರ್ವಜನಿಕ ಹಣ ಸೋರಿಕೆಯಾಗಲು ನಾವು ಬಿಡುವುದಿಲ್ಲ" ಎಂದು ಸಚಿವರು ತಿಳಿಸಿದ್ದಾರೆ.
ವಾರಾಂತ್ಯದ ಶುಕ್ರವಾರ ಬೆಂಗಳೂರಿನಿಂದ ತಮ್ಮ ಊರಿಗೆ ಮರಳಿದ್ದಾರೆ. ಭಾನುವಾರ (ಮೇ 26) ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ದಿನ ಸಂಜೆ ಪತ್ನಿ ಕವಿತಾ ಮತ್ತು ಮಗ ಭದ್ರಾವತಿಯಿಂದ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸ್ ಬಂದಾಗ ಘಟನೆ ಬೆಳಕಿಗೆ ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗದ ಅಧೀಕ್ಷಕರ ಆತ್ಮಹತ್ಯೆ ಪ್ರಕರಣ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯುತ್ತಿದೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಚಿವ ನಾಗೇಂದ್ರ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ದಲಿತರು ಮತ್ತು ಬುಡಕಟ್ಟು ಸಮುದಾಯಗಳಿಗಾಗಿ ಕೆಲಸ ಮಾಡುವ ಸೋಗಿನಲ್ಲಿ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. "ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಬಿ.ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಅಧಿಕಾರಿಯ ಸಾವಿನ ಬಗ್ಗೆ ಪಾರದರ್ಶಕ ತನಿಖೆ ನಡೆಸಬೇಕೆಂದು ಎಂದು ಒತ್ತಾಯಿಸಿದ್ದಾರೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)