logo
ಕನ್ನಡ ಸುದ್ದಿ  /  ಕರ್ನಾಟಕ  /  ದಲಿತರ ಬಗ್ಗೆ ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

ದಲಿತರ ಬಗ್ಗೆ ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ; ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

Prasanna Kumar P N HT Kannada

Sep 27, 2024 07:38 PM IST

google News

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

    • Siddaramaiah-Narendra Modi: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು ದಲಿತರ ಬಗ್ಗೆ ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೆ ತನ್ನಿ ಎಂದು ಸವಾಲ್ ಹಾಕಿದ್ದಾರೆ.
ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್
ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸವಾಲ್

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರ ಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್​ಸಿಎಸ್‌ಪಿ/ಟಿಎಸ್​ಪಿ) ಕಾಯ್ದೆಯನ್ನು ಜಾರಿಗೆ ತನ್ನಿ. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಗೆ ತಿರುಗೇಟು ನೀಡಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ 10 ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ಮೋದಿ ಅವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಕೊಟ್ಟಿದ್ದೆಷ್ಟು?

ಪ್ರಸಕ್ತ ಸಾಲಿನ ನಮ್ಮ ಸರ್ಕಾರದ ಬಜೆಟ್ ಗಾತ್ರ 3,71,383 ಕೋಟಿ ರೂಪಾಯಿ. ಅದರಲ್ಲಿ 39,121 ಕೋಟಿ ರೂಪಾಯಿಯನ್ನು ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗೆ ಮೀಸಲು ಇಟ್ಟಿದ್ದೇವೆ. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬಜೆಟ್ 48.21 ಲಕ್ಷ ಕೋಟಿ ರೂಪಾಯಿ ಆಗಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ದಿಗಾಗಿ ನೀಡಿರುವ ಅನುದಾನ 2,90,401 ಕೋಟಿ ಮಾತ್ರ. ಪ್ರಧಾನಿ ನರೇಂದ್ರ ಮೋದಿ ಅವರೇ, ಇದು ನಿಮ್ಮ ಸರ್ಕಾರದ ದಲಿತ ಕಾಳಜಿ ಎಂದು ತಮ್ಮ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಗಿಂತ ಮೊದಲು ರಾಜ್ಯದಲ್ಲಿ ದಲಿತ ಸಮುದಾಯದ ಕಲ್ಯಾಣಕ್ಕಾಗಿಯೇ ಜಾರಿಯಲ್ಲಿದ್ದ ವಿಶೇಷ ಘಟಕ ಯೋಜನೆಯನ್ವಯ 2013-14ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ 8,616 ಕೋಟಿ ರೂಪಾಯಿಯಾಗಿದ್ದರೆ, ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಯಾದ ವರ್ಷ (2014-2015)ರ ಸಾಲಿನಲ್ಲಿ ನೀಡಲಾಗಿದ್ದ ಅನುದಾನ 15,894 ಕೋಟಿ ರೂಪಾಯಿ. ಈ ಮೊತ್ತ ಈಗ ಹೆಚ್ಚು ಕಡಿಮೆ 40,000 ಕೋಟಿ ರೂಪಾಯಿಗೆ ತಲುಪಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇರುವ ದಲಿತರ ಬಗೆಗಿನ ಕಾಳಜಿ ಎಂದು ಹೇಳಿದ್ದಾರೆ.

ಇಷ್ಟು ಮಾತ್ರವಲ್ಲ, ನಮ್ಮ ಸರ್ಕಾರ ನ್ಯಾ. ಹೆಚ್ಎನ್ ನಾಗಮೋಹನ್ ದಾಸ್ ಸಮಿತಿ ಶಿಫಾರಸಿನ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇಕಡಾ 15 ರಿಂದ 17ಕ್ಕೆ ಮತ್ತು ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇಕಡಾ 3ರಿಂದ 7ಕ್ಕೆ ಹೆಚ್ಚಿಸಿದೆ. ಒಂದು ಕೋಟಿ ರೂಪಾಯಿವರೆಗಿನ ಸರ್ಕಾರಿ ಗುತ್ತಿಗೆಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಗುತ್ತಿಗೆದಾರರಿಗೆ ಶೇಕಡಾ 24.1ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ ಸಿದ್ದರಾಮಯ್ಯ.

ಗುತ್ತಿಗೆ ಆಧಾರದ ನೇಮಕಾತಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ಅನ್ವಯಿಸಲು ನಿರ್ಧರಿಸಲಾಗಿದೆ. ಎಸ್‌ಸಿ/ಎಸ್‌ಟಿ ಕುಟುಂಬಗಳಿಗೆ ಸರ್ಕಾರ ಮಂಜೂರು ಮಾಡಿದ ಜಮೀನುಗಳ ಅನಧಿಕೃತ ಪರಭಾರೆಯನ್ನು ತಡೆಯಲು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಹಂಚಿಕೆಯಾಗುವ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ಸಹಾಯಧನ ನೀಡಲಾಗುತ್ತಿದೆ. ಇವೆಲ್ಲವೂ ಅನುಷ್ಠಾನಕ್ಕೆ ಬಂದಿರುವುದು ಕರ್ನಾಟಕದಲ್ಲಿ ಮಾತ್ರ ಎಂದು ಹೇಳಿದ್ದಾರೆ.

2014ರಲ್ಲೇ ನುಡಿದಂತೆ ನಡೆದಿದ್ದೆವು

ಕರ್ನಾಟಕದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತರಲು ದೊಡ್ಡ ಮಟ್ಟದ ಜನಾಂದೋಲಗಳೇನು ನಡೆದಿರಲಿಲ್ಲ. ರಾಜ್ಯದ ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದ ಮೇಲಿನ ಪ್ರಾಮಾಣಿಕ ಕಾಳಜಿಯ ಕಾರಣಕ್ಕಾಗಿ ಸ್ವಯಂ ಇಚ್ಛೆಯಿಂದ 2013ರ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ಅಧಿಕಾರಕ್ಕೆ ಬಂದ ನಂತರ 2014-15ರಲ್ಲಿ ಕಾಯ್ದೆಯನ್ನು ಅನುಷ್ಠಾನಕ್ಕೆ ತಂದು ನಾವು ನುಡಿದಂತೆ ನಡೆದಿದ್ದೆವು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಲ್ಲಿ ಕರ್ನಾಟಕ ಇಡೀ ದೇಶಕ್ಕೆ ಮಾದರಿಯಾಗಿದೆ. ನರೇಂದ್ರ ಮೋದಿ ಅವರೇ, ಈಗಲೂ ಕಾಲ ಮಿಂಚಿಲ್ಲ, ರಾಷ್ಟ್ರಮಟ್ಟದಲ್ಲಿ ಎಸ್‌ಸಿ‌ಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ನಿಮ್ಮ ದಲಿತ ಕಾಳಜಿಯನ್ನು ಸಾಬೀತುಪಡಿಸಿ ಎಂದು ಸವಾಲ್ ಹಾಕಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ