ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಬಾ: ಪ್ರಜ್ವಲ್ ರೇವಣ್ಣಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕೊನೆಯ ಎಚ್ಚರಿಕೆ
May 23, 2024 05:26 PM IST
ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಬಾ ಎಂದು ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರರುವ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಕೊನೆಯ ಎಚ್ಚರಿಕೆ ನೀಡಿದ್ದಾರೆ.
- ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪಿಯಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ಮೊಮ್ಮಗನನ್ನು ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಬೆಂಗಳೂರು: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೊ ಮಾಡಿದ ಆರೋಪ ಪ್ರಕರಣಗಳಲ್ಲಿ ಸಂಬಂಧ ವಿದೇಶಕ್ಕೆ ತೆರಳಿದ ಬಳಿಕ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಮತ್ತಷ್ಟು ಸಂಕಷ್ಟ ಶುರುವಾಗಿದ್ದು, ಅತಿ ಶೀಘ್ರದಲ್ಲೇ ಅವರು ಬಳಸಿರುವ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ವಿದೇಶಾಂಗ ಸಚಿವಾಲಯ ರದ್ದು ಮಾಡುವ ಸಾಧ್ಯತೆ ಇದೆ. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದು ಮಾಡುವ ಪ್ರಕ್ರಿಯೆ ಪರಿಶೀಲನೆಯಲ್ಲಿದೆ ಎಂದು ವಿದೇಶಾಂಗ ಸಚಿವಾಲಯದ ಮಾಹಿತಿ ಬೆನ್ನಲ್ಲೇ ಜೆಡಿಎಸ್ ವರಿಷ್ಟ ಹಾಗೂ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು (Former PM HD Deve Gowda) ಪ್ರಜ್ವಲ್ಗೆ ಕೊನೆಯ ಎಚ್ಚರಿಕೆಯನ್ನು ನೀಡಿದ್ದಾರೆ.
ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್.ಡಿ ದೇವೇಗೌಡರು ತಾಕೀತು ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು. ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಬಾ ಎಂದು ತಾಕೀತು ಮಾಡಿರುವುದಲ್ಲದೆ ಇದು ನನ್ನ ಕೊನೆಯ ಎಚ್ಚರಿಕೆ ಎಂದು ತಿಳಿಸಿದ್ದಾರೆ.
ಮೇ 18 ರಂದು ನಾನು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಹೇಳಿದ್ದಾರೆ.
ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ.
ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.
ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನಿಗೆ ಒಪ್ಪಿಸಿದ್ದೇನೆ.
ನನ್ನ ಬಗ್ಗೆ ಗೌರವವಿದ್ದಲ್ಲಿ ಪ್ರಜ್ವಲ್ ಕೂಡಲೇ ವಾಪಸ್ ಬರಬೇಕು-ಹೆಚ್ಡಿಡಿ
ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ, ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.
ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ, ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)