Free bus travel for women: ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ, ಯಾವುದೇ ಷರತ್ತು ಅನ್ವಯ ಆಗಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
May 30, 2023 04:19 PM IST
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
- Congress Guarantee: ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯದ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕಾಗಿ ಯಾವುದೇ ಷರತ್ತು ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ತಾನು ನೀಡಿದ ಗ್ಯಾರಂಟಿಯನ್ನು ಕಾಂಗ್ರೆಸ್ ಜಾರಿ ಮಾಡಲು ಮುಂದಾಗಿದೆ. ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ (Free bus travel for women) ಭರವಸೆಯನ್ನು ಈಡೇರಿಸಲು ಗ್ರೀನ್ ಸಿಗ್ನಲ್ ನೀಡಿದೆ.
ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Transport Minister Ramalinga Reddy), ರಾಜ್ಯದ ಎಲ್ಲ ಮಹಿಳೆಯರಿಗೂ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕಾಗಿ ಯಾವುದೇ ಷರತ್ತು ಅನ್ವಯ ಆಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ನಾಲ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಾದ (ಆರ್‌ಟಿಸಿ) ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ ಅಧಿಕಾರಿಗಳನ್ನು ಸಚಿವ ರಾಮಲಿಂಗಾರೆಡ್ಡಿ ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ವರದಿಯನ್ನು ಪಡೆದು ಮೇ 31 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು. ಜೂನ್ 1 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಹೀಗಾಗಿ ಗ್ಯಾರಂಟಿ ಯಾವಾಗಿನಿಂದ ಜಾರಿಯಾಗಲಿದೆ ಎಂಬುದು ಜೂನ್ 1 ರಂದು ಗೊತ್ತಾಗಲಿದೆ. ರಾಜ್ಯದ ಸುಮಾರು 3.5 ಕೋಟಿ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದ ಸಚಿವರಿಗೆ ಷರತ್ತುಗಳ ಬಗ್ಗೆ ಕೇಳಿದಾಗ ಬಿಪಿಎಲ್, ಎಪಿಎಲ್ ಅಂತ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಲ್ಲ. ರಾಜ್ಯದ ಎಲ್ಲ ಮಹಿಳೆಯರೂ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸ್ಪಷ್ಟಪಡಿಸಿದರು.
ಗೃಹಲಕ್ಷ್ಮಿ ಯೋಜನೆಯ ಹಣ ಅತ್ತೆಗೆ
ಕಾಂಗ್ರೆಸ್ ನೀಡಿದ ಮತ್ತೊಂದು ಗ್ಯಾರಂಟಿ ಎಂದರೆ ಅದು ಗೃಹಲಕ್ಷ್ಮಿ ಯೋಜನೆ. ಈ ಯೋಜನೆಯಡಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ಈ ಹಣ ಅತ್ತೆಗೆ ಸಿಗಲಿದೆಯಾ, ಸೊಸೆಗೆ ಸಿಗಲಿದೆಯಾ ಎಂಬುದು ಕುತೂಹಲವಾಗಿ ಉಳಿದಿತ್ತು. ಈ ಗೊಂದಲಕ್ಕೆ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರೆ ಎಳೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಅತ್ತೆಗೆ ಸಿಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ನ 5 ಗ್ಯಾರಂಟಿಗಳಿವು
1. ಗೃಹಲಕ್ಷ್ಮಿ ಯೋಜನೆ - ಮನೆ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂ
2. ಗೃಹ ಜ್ಯೋತಿ ಯೋಜನೆ - ತಿಮನೆಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್)
3. ಅನ್ನಭಾಗ್ಯ- ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ
4. ಯುವನಿಧಿ -ಪದವೀಧರರಿಗೆ 3000 ರೂ ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ)
5 .ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ