ಕರಾವಳಿಯಲ್ಲಿ ಮುಂದುವರಿದ ಭಾರಿ ಮಳೆ; ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
Jul 26, 2023 09:47 PM IST
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ಜು.27ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. (ಸಾಂಕೇತಿಕ ಚಿತ್ರ)
Coastal Karnataka: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ಜಿಲ್ಲಾಡಳಿತಗಳು ಎರಡೂ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿವೆ.
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಜು.27) ಕೂಡ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಜು.27ರಂದು ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜುಲೈ 27 ರಂದು ರಜೆಯನ್ನು ಘೋಷಿಸಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು ಎಂದು ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು / ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಎಂದು ವಿಪತ್ತು ನಿರ್ವಹಣಾ ಕೇಂದ್ರ ಸೂಚಿಸಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ಅಥವಾ 0824 2442590 ಸಂಖ್ಯೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಪಿಯು ಕಾಲೇಜು ತನಕ ಜು.27ರಂದು ರಜೆ
ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಜು.25ರ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.27 ರಂದು ಉಡುಪಿ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಕಾಲೇಜುಗಳಲ್ಲಿ ಪಾಠ ಪ್ರಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯ ಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
- ವಿದ್ಯಾರ್ಥಿಗಳ ಹಾಜರಾತಿಯನ್ನು ಕಾಯ ಮಾಡುವಂತಿಲ್ಲ. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುವುವ ಬಗ್ಗೆ ಗಮನವಹಿಸುವುದು.
- ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
- ದುರ್ಬಲ /ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
- ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ, ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
- ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳ ನೀರು ಇರುವ ತಗ್ಗು ಪ್ರದೇಶ, ಕರ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ, ಪ್ರಾಕೃತಿಕ ವಿಕೋಪ ವಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು ಎಂದು ವಿಪತ್ತು ನಿರ್ವಹಣಾ ಕೇಂದ್ರ ಸೂಚಿಸಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ದೂರವಾಣಿ ಸಂಖ್ಯೆ 1077 ಅಥವಾ 0820 2574802ಕ್ಕೆ ಕರೆಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.