Karnataka CM: ಒಕ್ಕಲಿಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ, ಆದಿಚುಂಚನಗಿರಿಯ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರ ಆಗ್ರಹ
May 14, 2023 07:44 PM IST
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
- ಡಿಕೆ ಶಿವಕುಮಾರ್ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಬೇಕೆಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ.
ಬೆಂಗಳೂರು: ಪಕ್ಷ ಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹ ಪಡಿಸಿದ್ದಾರೆ
ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ, ಚುನಾವಣೆಗಳಲ್ಲಿ ಕಾಂಗ್ರೆಸ್ ಬಹುಮತ ಪಡೆದಾಗ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುವ ಸಂಪ್ರದಾಯ ಇದೆ. ಅದನ್ನು ಈಗಲೂ ಪಾಲಿಸುವಂತೆ ಆಗಲಿ. ಆ ಸಂಪ್ರದಾಯ ಮುರಿಯಬಾರದು ಎಂದು ನಿರ್ಮಲಾನಂದನಾಥ ಸ್ವಾಮೀಜಿ ಮನವಿ ಮಾಡಿದರು.
ಹಲವು ವರ್ಷಗಳ ನಂತರ ಕಾಂಗ್ರೆಸ್‌ಗೆ ಭರ್ಜರಿ ಗೆಲುವು ಸಿಕ್ಕಿದೆ. ಸಂಕಷ್ಟದಲ್ಲಿದ್ದಾಗ ಶ್ರಮ ಹಾಕಿ ಪಕ್ಷವನ್ನು ಡಿಕೆಶಿ ಸಂಘಟಿಸಿದ್ದಾರೆ ಎಂದರು.
ಶಿವಕುಮಾರ್ ಅವರು ಅತ್ಯಂತ ಬದ್ಧತೆ ಹಾಗೂ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಅಧಿಕಾರ ಸಿಕ್ಕರೆ ಒಳ್ಳೆಯ ಆಡಳಿತ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಈ ಹಿಂದೆ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದರು. ಅವರೂ ಉತ್ತಮ ಆಡಳಿತ ಕೊಟ್ಟಿದ್ದಾರೆ. ಈಗ ಶಿವಕುಮಾರ್‌ಗೆ ಅವಕಾಶ ಸಿಗಲಿ ಎಂದು ನಂಜಾವಧೂತ ಸ್ವಾಮೀಜಿ ಹೇಳಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಇದೀಗ ಆರಂಭವಾಗುವ ಶಾಸಕಾಂಗ ಸಭೆಯಲ್ಲಿ ಈ ಕುರಿತು ತೀರ್ಮಾನವಾಗುವ ನಿರೀಕ್ಷೆಯಿತ್ತು. ಆದರೆ, ಕೆಲವು ಮೂಲಗಳ ಪ್ರಕಾರ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡುವ ಸಾಧ್ಯತೆಯಿದೆ.
ಪಕ್ಷದ ಅಧ್ಯಕ್ಷರು ಮತ್ತು ಹೊಸದಾಗಿ ಆಯ್ಕೆಯಾದ ಶಾಸಕರು ಸೇರಿದಂತೆ ಕರ್ನಾಟಕ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದ್ದಾರೆ. ಇತ್ತ ಇಬ್ಬರೂ ನಾಯಕರ ಬೆಂಬಲಿಗರು ತಮ್ಮ ತಮ್ಮ ನಾಯಕರೇ ಕರ್ನಾಟಕದ "ಮುಂದಿನ ಸಿಎಂ" ಎಂದು ಉಲ್ಲೇಖಿಸುವ ಪೋಸ್ಟರ್‌ಗಳನ್ನು ಹಾಕಿಕೊಂಡಿದ್ದಾರೆ.
ಇಂದು ಬೆಳಗ್ಗೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ ಡಿಕೆಶಿ, ಕರಿಬಸವ ಸ್ವಾಮೀಜಿಯ ಆಶೀರ್ವಾದ ಪಡೆದು ವಿಶೇಷ ಪೂಜೆ ನೆರವೇರಿಸಿದ್ದಾರೆ. ಬಳಿಕ ತುಮಕೂರು ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರು ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ ನಾಗರಾಜು ಅವರನ್ನು 1,22,392 ಮತಗಳಿಂದ ಸೋಲಿಸಿದರೆ, ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರನ್ನು ಸೋಲಿಸಿದ್ದಾರೆ.