Forest News: ವಯನಾಡು ದುರಂತ, ಕರ್ನಾಟಕದ ಅಕ್ರಮ ಹೋಂಸ್ಟೇ, ರೆಸಾರ್ಟ್ ಮೇಲೆ ಕಣ್ಣು, ಪಶ್ಚಿಮ ಘಟ್ಟ ವ್ಯಾಪ್ತಿಯ 69 ಎಕರೆ ಒತ್ತುವರಿ ತೆರವು
Aug 06, 2024 07:45 AM IST
ಕರ್ನಾಟಕದಲ್ಲಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ.
- Forest Encroachments ಕರ್ನಾಟಕದಲ್ಲಿ ಆಗುತ್ತಿರುವ ಅರಣ್ಯ ಒತ್ತುವರಿ( Karnataka Forest Encroachments) , ಅಕ್ರಮ ರೆಸಾರ್ಟ್, ಹೋಂಸ್ಟೇ( Illegala Resorts, Home Stays) ತೆರವಿಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ ನೀಡಿದ ನಂತರ ತೆರವು ಶುರುವಾಗಿದೆ.
ಬೆಂಗಳೂರು: ಕರ್ನಾಟಕದ 10 ಜಿಲ್ಲೆಗಳ ವ್ಯಾಪ್ತಿಯ ಪಶ್ಚಿಮಘಟ್ಟ ಮತ್ತು ಇತರ ಘಟ್ಟ ಪ್ರದೇಶಗಳಲ್ಲಿನ ಒತ್ತುವರಿಯನ್ನು ತತ್ ಕ್ಷಣದಿಂದಲೇ ತೆರವು ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ 24 ಗಂಟೆಯಲ್ಲಿ ನೂತನ ಕಾರ್ಯಪಡೆ 31 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದೆ. ಅರಣ್ಯದ ಬಳಿ ಅಕ್ರಮವಾಗಿ ನಿರ್ಮಿಸಿರುವ ರೆಸಾರ್ಟ್, ಹೋಂಸ್ಟೇಗಳ ವಿರುದ್ದವೂ ಕ್ರಮ ಆಗಲಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಹೋಬಳಿಯ ಮಾಗುಂಡಿ ಸರ್ವೆ ನಂ. 29ರಲ್ಲಿ 17 ಎಕರೆ 17 ಗುಂಟೆ, ಹಲಸೂರು ಸರ್ವೆ ನಂ. 55ರಲ್ಲಿ 13 ಎಕರೆ 38 ಗುಂಟೆ ಹಾಗೂ ತನುಡಿ ಸರ್ವೆ ನಂ. 9, 21, 22,23, 72ಮತ್ತು 97ರಲ್ಲಿ ಒಟ್ಟು 36 ಎಕರೆ ಸೇರಿ ಒಟ್ಟು 69 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿಸಲಾಗುತ್ತಿದೆ.
ಪಶ್ಚಿಮಘಟ್ಟ ಮತ್ತು ಅರಣ್ಯ ಒತ್ತುವರಿ ತೆರವು ಕಾರ್ಯಪಡೆಯ ಅಧ್ಯಕ್ಷರಾಗಿರುವ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರ ಆದೇಶದಂತೆ ಈ ಕ್ರಮ ಜರುಗಿಸಲಾಗಿದೆ.
ಈಗಾಗಲೇ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅರಣ್ಯ ಒತ್ತುವರಿ ಗುರುತಿಸಲಾಗಿದೆ. ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ. ವಿಶೇಷವಾಗಿ ಪಶ್ಚಿಮ ಘಟ್ಟಗಳನ್ನು ಬಾಧಿಸುತ್ತಿರುವ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುವುದು. ಇದು ಮುಂದುವರೆಯಲಿದೆ ಎನ್ನುವುದು ಅಧಿಕಾರಿಗಳ ವಿವರಣೆ.
ಸಚಿವರ ಸೂಚನೆ
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ ಎನ್ನುತ್ತವೆ ಅರಣ್ಯ ಇಲಾಖೆ ಮೂಲಗಳು.