Capt Brijesh Chowta: ಭೂಸೇನೆಯ ಕ್ಯಾಪ್ಟನ್ ಆಗಿದ್ದ ಬ್ರಿಜೇಶ್ ಚೌಟ ಈಗ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ
Mar 13, 2024 10:07 PM IST
ಕ್ಯಾಪ್ಟನ್ ಬ್ರಿಜೇಶ್ ಚೌಟ, ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ
ಲೋಕಸಭಾ ಚುನಾವಣೆ 2024ಕ್ಕೆ ಬಿಜೆಪಿ ಸಜ್ಜಾಗುತ್ತಿದ್ದು, ಎರಡನೇ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದರಲ್ಲಿ ದಕ್ಷಿಣ ಕನ್ನಡದ ಅಭ್ಯರ್ಥಿಯಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಕಣಕ್ಕೆ ಇಳಿಸಿದೆ. ಯಾರು ಈ ಕ್ಯಾಪ್ಟನ್ ಬ್ರಿಜೇಶ್ ಚೌಟ.. (ವರದಿ - ಹರೀಶ್ ಮಾಂಬಾಡಿ, ಮಂಗಳೂರು)
ಮಂಗಳೂರು: ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂನಿವೃತ್ತಿ ಪಡೆದುಕೊಂಡಿದ್ದ ಕ್ಯಾ. ಬ್ರಿಜೇಶ್ ಚೌಟ ಈಗ ಬಿಜೆಪಿ ಭದ್ರಕೋಟೆ ಎಂದೇ ಹೇಳಲಾಗುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ. ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಅಭ್ಯರ್ಥಿಯಾಗಿ ಆಯ್ದುಕೊಂಡದ್ದು ವಿಶೇಷ. ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕಳೆದ ಬಾರಿಯೇ ಚೌಟ ಟಿಕೆಟ್ ರೇಸ್‌ನಲ್ಲಿದ್ದರು. ಆದರೆ ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ಟಿಕೆಟ್ ನೀಡಲಾಗಿತ್ತು. ಈ ಬಾರಿ ಕಾರ್ಯಕರ್ತರ ಪ್ರಬಲ ಪ್ರತಿರೋಧ ನಳಿನ್ ಕುಮಾರ್‌ಗೆ ಇದೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಇದೇ ವೇಳೆ ಕಲ್ಲಡ್ಕದ ಸಾಕಷ್ಟು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಆರೆಸ್ಸೆಸ್ ಹಿರಿಯರ ಆಶೀರ್ವಾದವನ್ನೂ ಚೌಟ ಪಡೆದಿದ್ದರು.
ಸಾಕಷ್ಟು ಕಾರ್ಯಕ್ರಮಗಳಲ್ಲಿ ಕ್ಷೇತ್ರದಾದ್ಯಂತ ಸಂಚರಿಸುತ್ತ ಚೌಟ ಈ ಬಾರಿ ಟಿಕೆಟ್‌ಗಾಗಿ ಸದ್ದಿಲ್ಲದೆ ಪ್ರಯತ್ನ ನಡೆಸಿದ್ದರು. ನಳಿನ್ ವಿರೋಧಿ ಅಲೆ, ನಳಿನ್ ನಿಂತರೆ ಅರುಣ್ ಕುಮಾರ್ ಪುತ್ತಿಲರ ಬಂಡಾಯದಂಥ ಸನ್ನಿವೇಶ, ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ಚೌಟರಿಗೆ ಮಣೆ ಹಾಕಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಎನ್‌ಸಿಸಿ ಅತ್ಯುತ್ತಮ ಕೆಡೆಟ್
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ತೊಡಗಿಕೊಂಡಿದ್ದು ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು.
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಬಿಜೆಪಿಯಲ್ಲಿ ಹಂತಹಂತವಾಗಿ ಮೇಲಕ್ಕೇರಿದ ಕ್ಯಾಪ್ಟನ್
ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು. 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು.
2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿರುತ್ತಾರೆ.
ಸಮರ್ಥನ್ ಫೌಂಡೇಶನ್ ಮೂಲಕ ಮುಂಚೂಣಿಯಲ್ಲಿ
ಪಕ್ಷದ ಚಟುವಟಿಕೆ ಜೊತೆಗೆ ಸಮರ್ಥನ್ ಫೌಂಡೇಶನ್ ಮೂಲಕ ಮಂಗಳೂರಿನಲ್ಲಿ ಸಾಮಾಜಿಕ ಸೇವಾ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಫೌಂಡೇಶನ್ ಮೂಲಕ ತಮ್ಮದೇ ಸ್ನೇಹಿತರನ್ನು ಕಟ್ಟಿಕೊಂಡು ಸದ್ದಿಲ್ಲದೆ ಸೇವಾ ಚಟುವಟಿಕೆಯನ್ನು ನಡೆಸಿದ್ದರು.
ಇದಲ್ಲದೆ, ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾತ್ರ ಇರುತ್ತಿದ್ದ ಲಿಟ್ ಫೆಸ್ಟ್ ಎನ್ನುವ ರಾಷ್ಟ್ರ ಮಟ್ಟದ ಸಾಹಿತ್ಯ ಕೂಟವನ್ನು ಮಂಗಳೂರಿನಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಸಂಘಟಿಸಿದ್ದರು. ರಾಷ್ಟ್ರೀಯ ಮಟ್ಟದ ವಾಗ್ಮಿಗಳು, ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ಜೊತೆಗೂಡಿಸಿ ಸಂವಾದ, ಧನಾತ್ಮಕ ಸಾಹಿತ್ಯ ಚಟುವಟಿಕೆಗೆ ವೇದಿಕೆ ಒದಗಿಸಿದ್ದಲ್ಲದೆ, 2019ರಿಂದ ಪ್ರತಿ ವರ್ಷ ಲಿಟ್ ಫೆಸ್ಟ್ ಸಂಘಟಿಸುತ್ತಿದ್ದಾರೆ, ಆಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಯುವ ಸಾಹಿತ್ಯ ಪ್ರಿಯರಿಗೆ ರಾಷ್ಟ್ರ ಮಟ್ಟದ ದಿಗ್ಗಜರ ಜೊತೆಗೆ ಸಂವಾದಕ್ಕೆ ವೇದಿಕೆ ಸೃಷ್ಟಿಸಿದ್ದರು.
ಕಂಬಳ ನಿಷೇಧ ವಿರುದ್ಧ ಹೋರಾಟದಲ್ಲಿ
2015ರಲ್ಲಿ ಕರಾವಳಿಯ ಜನಪದ ಕ್ರೀಡೆ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟ ಸಂಘಟಿಸಿದವರಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಬ್ಬರು. ಕಂಬಳಕ್ಕೆ ಒಂದು ಹಂತದ ಜಯ ಸಿಕ್ಕ ಬೆನ್ನಲ್ಲೇ ಮಂಗಳೂರು ನಗರದಲ್ಲಿಯೇ ಕಂಬಳ ಆಯೋಜಿಸಬೇಕೆಂದು ನಿಶ್ಚಯಿಸಿ, ಯುವ ಸ್ನೇಹಿತರ ಬಳಗವನ್ನು ಕಟ್ಟಿಕೊಂಡು ಸತತ ಏಳು ವರ್ಷಗಳಿಂದ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಂಬಳ ಆಯೋಜಿಸುತ್ತಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿರುವ ಬ್ರಿಜೇಶ್ ಚೌಟ ಬಂಟ ಸಮುದಾಯದ ಪ್ರಮುಖ ಗುತ್ತಿನ ಮನೆಗೆ ಸೇರಿದವರು. ಅವಿವಾಹಿತರು.
(ವರದಿ - ಹರೀಶ್ ಮಾಂಬಾಡಿ, ಮಂಗಳೂರು)
(This copy first appeared in Hindustan Times Kannada website. To read more on Lok Sabha Elections, Political developments, Lok Sabha Constituency profiles, Political Analysis in Kannada please visit kannada.hindustantimes.com)