logo
ಕನ್ನಡ ಸುದ್ದಿ  /  ಕರ್ನಾಟಕ  /  ಗೋಪಾಲ ಜೋಶಿ ವಂಚನೆ; ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ, ಇದೇ 28ಕ್ಕೆ ವಿಚಾರಣೆ ಮುಂದೂಡಿಕೆ

ಗೋಪಾಲ ಜೋಶಿ ವಂಚನೆ; ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ, ಇದೇ 28ಕ್ಕೆ ವಿಚಾರಣೆ ಮುಂದೂಡಿಕೆ

Prasanna Kumar P N HT Kannada

Oct 25, 2024 09:38 PM IST

google News

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ

    • Gopal Joshi Fraud Case: ಗೋಪಾಲ ಜೋಶಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ದಾಖಲೆಗಳನ್ನು ಸಲ್ಲಿಸಲು ಸರ್ಕಾರಕ್ಕೆ ಸೂಚಿರುವ ಹೈಕೋರ್ಟ್, ಇದೇ 28ಕ್ಕೆ ವಿಚಾರಣೆ ಮುಂದೂಡಿಕೆ ನೀಡಿದೆ. (ವರದಿ-ಎಚ್.ಮಾರುತಿ)
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ (PTI)

ಬೆಂಗಳೂರು: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹಣ ವಸೂಲಿ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಪ್ರಾಸಿಕ್ಯೂಷನ್‌ಗೆ ಆದೇಶ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಿಜಯಪುರ ಜಿಲ್ಲೆಯ ನಾಗಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ಗೋಪಾಲ ಜೋಶಿ ಸಧ್ಯ ಬಂಧನದಲ್ಲಿದ್ದಾರೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಗೋಪಾಲ ಜೋಶಿ ಮತ್ತಿತರರು ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಕೋರಿ ಅರ್ಜಿದಾರರ ಪರ ಹಿರಿಯ ವಕೀಲ ಡಿಆರ್ ರವಿಶಂಕರ್ ಅವರು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಮೆಮೊ ಸಲ್ಲಿಸಿದರು. ಈ ಪ್ರಕರಣ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ (ಪಿಎಂಎಲ್‌ಎ) ಆರೋಪಕ್ಕೆ ಸಂಬಂಧಿಸಿದ್ದಾಗಿದೆ. ಕಳೆದ ಮಾರ್ಚ್, ಏಪ್ರಿಲ್, ಮೇ ಹಾಗೂ ಆಗಸ್ಟ್‌ನಲ್ಲಿ ಈ ಬೆಳವಣಿಗೆಗಳು ನಡೆದಿವೆ ಎಂದು ಆಪಾದಿಸಲಾಗಿದೆ. ಆದರೆ ಇದೇ 17ರಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಗೋಪಾಲ ಜೋಶಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಇವರಲ್ಲಿ ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಮತ್ತಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ರವಿಶಂಕರ್ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. ಆರೋಪಿಗಳ ಪರ ವಕೀಲರ ಹೇಳಿಕೆಗೆ ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್ ಬಿಎನ್ ಜಗದೀಶ್, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವ ಮಾತುಕತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿಯಲ್ಲೇ ನಡೆದಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಅಕ್ಟೋಬರ್ 28ಕ್ಕೆ ವಿಚಾರಣೆ

ಆಗ ನ್ಯಾಯಮೂರ್ತಿಗಳು ಈ ಪ್ರಕರಣದ ವಿಚಾರಣೆಯನ್ನು ಇದೇ 28 ಕ್ಕೆ ಮುಂದೂಡಿ, ಅಂದು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸುವಂತೆ ಪ್ರಾಸಿಕ್ಯೂಷನ್‌ಗೆ ಸೂಚನೆ ನೀಡಿದರು. ಗೋಪಾಲ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಅವರನ್ನು ನ್ಯಾಯಾಲಯ 10 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದರೆ, ಅಥಣಿಯ ಎಂಜಿನಿಯರ್ ಸೋಮಶೇಖರ್ ನಾಯಕ್ ಹಾಗೂ ಬಸವೇಶ್ವರ ನಗರದ ನಿವಾಸಿ ವಿಜಯಕುಮಾರಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಾನಂದ್ ಚವ್ಹಾಣ್ ಸುನೀತಾ ಚವ್ಹಾಣ್ ದೂರಿನನ್ವಯ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ