Karnataka Weather: ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಇನ್ನು 5 ದಿನ ಭಾರೀ ಮಳೆ; ಮಲೆನಾಡು, ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆ
Jul 22, 2023 07:55 AM IST
ಕರ್ನಾಟಕದಲ್ಲಿ ಭಾರೀ ಮಳೆ (ಪ್ರಾತಿನಿಧಿಕ ಚಿತ್ರ)
- Karnataka Rain News: ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಗ್ರಾಮಗಳು ಸಂಪರ್ಕ ಕಳೆದುಕೊಳ್ಳುವ ಭೀತಿಯಲ್ಲಿದೆ. ಖಾನಾಪುರ ತಾಲೂಕಿನಲ್ಲಿ ಇಂದು (ಜುಲೈ 22, ಶನಿವಾರ) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದೆ. ರಾಜ್ಯದ ಕರಾವಳಿ, ಮಲೆನಾಡು ಮಾತ್ರವಲ್ಲದೇ ಉತ್ತರ ಕರ್ನಾಟಕ ಭಾಗದಲ್ಲೂ ಭಾರೀ ಮಳೆಯಾಗುತ್ತಿದೆ.
ಜೂನ್ ಹಾಗೂ ಜುಲೈ ಮೊದಲಾರ್ಧದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಮಳೆಯಾಗಿರದೆ ರೈತರು ಚಿಂತೆಗೀಡಾಗಿದ್ದರು, ಆದರೆ ಇದೀಗ ಕಳೆದ 5-6 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಳ್ಳ-ಕೊಳ್ಳಗಳಲ್ಲಿ ಈಜಾಡಬಾರದು, ನದಿ ದಂಡೆಗೆ ಜಾನುವಾರುಗಳನ್ನು ಬಿಡಬಾರದು, ಅಪಾಯವಿರುವ ಸೇತುವೆ ಮೇಲೆ ಸಂಚರಿಸಬಾರದು, ನದಿ ದಂಡೆಯ ಬಳಿ ಇರುವ ಧಾರ್ಮಿಕ ಸ್ಥಳಗಳಿಗೆ ಪೂಜೆ ಸಲ್ಲಿಸಲು ಹೋಗಬಾರದು, ನದಿ-ಹಳ್ಳ ಸೇರಿದಂತೆ ನೀರು ತುಂಬಿದ ಜಾಗಗಳನ್ನು ಸೆಲ್ಫಿ ಸ್ಪಾಟ್ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚಿಸಿದ್ದಾರೆ.
ಉತ್ತರ ಒಳನಾಡು ಪ್ರದೇಶಗಳಾದ ಬೆಳಗಾವಿ, ಧಾರವಾಡ ಹಾಗೂ ಬೀದರ್ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಗ್ರಾಮಗಳು ಸಂಪರ್ಕ ಕಳೆದುಕೊಳ್ಳುವ ಭೀತಿಯಲ್ಲಿದೆ. ಖಾನಾಪುರ ತಾಲೂಕಿನಲ್ಲಿ ಇಂದು (ಜುಲೈ 22, ಶನಿವಾರ) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಒಳನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮಲೆನಾಡು ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಬಿರುಗಾಳಿಯು ಗಂಟೆಗೆ 40 ರಿಂದ 45 ಕಿಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ನೈರುತ್ಯ ಮುಂಗಾರು ಇನ್ನಷ್ಟು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುತ್ತದೆ. ಹೀಗಾಗಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 20 ರಿಂದ 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.