Kalaburagi: ವೈರಲ್ ಆಗುತ್ತಿರುವ ನಕಲಿ ಪತ್ರದ ಕುರಿತು ತನಿಖೆ ನಡೆಸಲು ಕಲಬುರಗಿ ಎಸ್ಪಿಗೆ ಆಳಂದ ಶಾಸಕ ಬಿಆರ್ ಪಾಟೀಲ್ ದೂರು
Jul 28, 2023 11:46 AM IST
ನಕಲಿ ಪತ್ರದ ಕುರಿತು ತನಿಖೆ ನಡೆಸಲು ಕಲಬುರಗಿ ಎಸ್ಪಿಗೆ ಬಿಆರ್ ಪಾಟೀಲ್ ದೂರು
- BR Patil viral letter: ಹಳೆ ಲೆಟರ್ ಹೆಡ್‌ನ್ನು ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ, ನನ್ನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ದ್ವೇಷ ಹುಟ್ಟಿಸಿ, ಅದರ ರಾಜಕೀಯ ಲಾಭ ಪಡೆಯಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ.
ಕಲಬುರಗಿ: ತಮ್ಮ ಹೆಸರಿನ ಹಳೆ ಲೆಟರ್ ಹೆಡ್‌ನ್ನು ಉಪಯೋಗಿಸಿ ಇಲ್ಲಸಲ್ಲದ ವಿಷಯವನ್ನು ಪ್ರಸ್ತಾಪ ಮಾಡಿ, ನನ್ನ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ನಡುವೆ ದ್ವೇಷ ಹುಟ್ಟಿಸಿ, ಅದರ ರಾಜಕೀಯ ಲಾಭ ಪಡೆಯಲು ಕೆಲವರು ಹುನ್ನಾರ ನಡೆಸಿದ್ದಾರೆ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಆರೋಪಿಸಿದ್ದಾರೆ.
ಈ ಸುಳ್ಳು ಸುದ್ದಿಯನ್ನು ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದು ತನಿಖೆಯಾಗಬೇಕು. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಬಯಲಿಗೆ ತರಬೇಕು. ಅಂತವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಬಿ.ಆರ್.ಪಾಟೀಲ್ ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರಿಗೆ ಮಂಗಳವಾರ ಸಂಜೆ ಲಿಖಿತ ದೂರು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗೆ ಬರೆಯಲಾಗಿದೆ ಎಂಬ ಪತ್ರ ನಕಲಿ ಎಂದು ಬಿ.ಆರ್. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಕಲಬುರಗಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನನ್ನ ಹಳೆಯ ಲೆಟರ್ ಹೆಡ್ ಬಳಸಿ ಪತ್ರ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.‘
ಈ ಹಿಂದೆ ಶಾಸಕನಾಗಿದ್ದಾಗ ಬರೆದಿದ್ದ ಲೆಟರ್‌ಹೆಟ್ ಬಳಸಿ ಈಗ ವೈರಲ್ ಮಾಡಿದ್ದಾರೆ. ವೈರಲ್ ಮಾಡಲಾಗಿರುವ ಪತ್ರದಲ್ಲಿ ಶಾಂತಿನಗರದ ಮನೆಯ ವಿಳಾಸವಿದೆ. ಹೊಸ ಲೆಟರ್ ಹೆಟ್‌ನಲ್ಲಿ ಅಕ್ಕಮಹಾದೇವಿ ಕಾಲೋನಿ ನಿವಾಸದ ವಿಳಾಸವಿದೆ. ನನ್ನ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಧ್ಯೆ ಭಿನ್ನಾಭಿಪ್ರಾಯ ಮೂಡಿಸಲು ನಕಲಿ ಪತ್ರ ಸೃಷ್ಟಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಲೆಟರ್ ಹೆಟ್ ನಕಲಿ. ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ನಾವು ಸಿಎಂಗೆ ಪತ್ರ ಬರೆದಿರುವುದು ನಿಜ. ಪ್ರಿಯಾಂಕ್ ಖರ್ಗೆ ಅವರ ತಂದೆಗೆ ನೀಡುವಷ್ಟು ಗೌರವ ನನಗೂ ನೀಡುತ್ತಾರೆ ಎಂದು ಪಾಟೀಲ್ ತಿಳಿಸಿದ್ದಾರೆ.
ಬಿಜೆಪಿಯವರೇ ಮಾಡಿಸಿರಬಹುದು
ನಕಲಿ ಪತ್ರವನ್ನು ಬಿಜೆಪಿಯವರೇ ವೈರಲ್ ಮಾಡಿಸಿರಬಹುದು ಎಂದು ಅವರು ಆರೋಪಿಸಿದ್ದಾರೆ. ಈ ವಿಚಾರವಾಗಿ ಎಸ್ಪಿಗೆ ದೂರು ನೀಡಿದ್ದೇನೆ. ಉಸ್ತುವಾರಿ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ಶಾಸಕರ ಸಹಿಯುಳ್ಳ ಪತ್ರವನ್ನು ಬಿ.ಆರ್ .ಪಾಟೀಲ್ ಮುಖ್ಯಮಂತ್ರಿಗೆ ಬರೆದಿದ್ದಾರೆ ಎನ್ನಲಾಗಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
ಬಿ.ಆರ್. ಪಾಟೀಲ್ ಪತ್ರದಲ್ಲಿ ಏನಿದೆ ?
ಜಿಲ್ಲಾ ಉಸ್ತುವಾರಿ ಸಚಿವರ ಅಸಹಕಾರ ಹಾಗೂ ಇಲಾಖೆಗೆ ಸಂಬಂಧಿಸಿದ ಅನುದಾನ ಬಿಡುಗಡೆಯ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿತ್ತು. ಜನರ ವಿಶ್ವಾಸ, ಭರವಸೆ ಹಾಗೂ ಅವರ ಪ್ರೀತಿಯಿಂದ ನಾವು ಶಾಸಕರಾಗಿ ಆಯ್ಕೆಯಾಗಿದ್ದೇವೆ. ಆದರೆ, ನಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ವಿವಿಧ ಇಲಾಖೆಗೆ ಸಂಬಂಧಿಸಿದ 20ಕ್ಕೂ ಹೆಚ್ಚು ಸಚಿವರಿಗೆ ನಮ್ಮ ಕ್ಷೇತ್ರಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರೂ ಸ್ಪಂದಿಸುತ್ತಿಲ್ಲ. ಇದರಿಂದ ಜನರ ಆಶೋತ್ತರ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲ. ಅಲ್ಲದೇ ಅನುದಾನ ಬಿಡುಗಡೆ ಮಾಡುವುದಕ್ಕೂ ಸಚಿವರು ಮೂರನೇ ವ್ಯಕ್ತಿ ಮೂಲಕ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ. ಸ್ಥಳೀಯ ಶಾಸಕರು ನಾವು ಆಗಿದ್ದರೂ ಅನುದಾನಕ್ಕಾಗಿ ಮೂರನೇ ವ್ಯಕ್ತಿಯ ಮೊರೆ ಹೋಗಬೇಕಾಗಿರುವುದು ಅತ್ಯಂತ ಬೇಸರ ವಿಷಯ ಎಂದು ಬಿ.ಆರ್. ಪಾಟೀಲ್ ಪತ್ರದಲ್ಲಿ ಉಲ್ಲೇಖಿಸಿದ್ದರು.
ಇದಲ್ಲದೆ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ, ಸ್ವಜನಪಕ್ಷಪಾತ ಮಾಡುತ್ತಿದ್ದಾರೆ. ನಮ್ಮ ಯಾವುದೇ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ. ಇದರಿಂದಾಗಿ ಯಾವ ಅಧಿಕಾರಿಯೂ ನಮ್ಮ ಕೆಲಸಗಳನ್ನು ಮಾಡಿ ಕೊಡುತ್ತಿಲ್ಲ, ನಮ್ಮ ಮಾತಿಗೆ ಬೆಲೆಯೂ ನೀಡುತ್ತಿಲ್ಲ. ಆದ್ದರಿಂದ ತಾವು ತಕ್ಷಣವೇ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂಬುದು ನಮ್ಮ ಕೋರಿಕೆ. ನಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ತಾವು ನಡೆದುಕೊಳ್ಳುತ್ತೀರೆಂದು ಭಾವಿಸಿದ್ದೇವೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದರು.
ವರದಿ: ಎಸ್.ಬಿ.ರೆಡ್ಡಿ, ಕಲಬುರಗಿ