Minority Education: ಅಲ್ಪಸಂಖ್ಯಾತರ ಶಿಕ್ಷಣ, ಸ್ವಯಂ-ಉದ್ಯೋಗ, ಪುಣ್ಯಕ್ಷೇತ್ರ ಅಭಿವೃದ್ಧಿಗೆ ಅನುದಾನ ಘೋಷಿಸಿದ ಸಿದ್ದರಾಮಯ್ಯ; ಇಲ್ಲಿದೆ ವಿವರ
Jul 07, 2023 06:04 PM IST
ಮುಸ್ಲಿಂ ವಿದ್ಯಾರ್ಥಿಗಳು (ಸಂಗ್ರಹ ಚಿತ್ರ)
- Karnataka Budget 2023: ಕರ್ನಾಟಕದಲ್ಲಿ ಒಟ್ಟು 126 ಶಾದಿ ಮಹಲ್ ಮತ್ತು ಸಮುದಾಯ ಭವನ ನಿರ್ಮಾಣವನ್ನು ಪೂರ್ಣಗೊಳಿಸಲು 54 ಕೋಟಿ ರೂಪಾಯಿ, ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡುತ್ತಿರುವ ತಸ್ತಿಕ್ ಮೊತ್ತವನ್ನು 60 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ
ಬೆಂಗಳೂರು: ಅಲ್ಪಸಂಖ್ಯಾತರ ಶಿಕ್ಷಣ, ಸ್ವಯಂ ಉದ್ಯೋಗ, ಆಸ್ತಿ ರಕ್ಷಣೆ, ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಅನುದಾನ ಮೀಸಲಿಟ್ಟಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ (ಒಂದರಿಂದ ಎಂಟನೇ ತರಗತಿ) 60 ಕೋಟಿ ರೂಪಾಯಿ ಅನುದಾನ ರಾಜ್ಯದ ಅರವತ್ತೆರಡು ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಹನ್ನೆರಡನೇ ತರಗತಿ ತನಕ ಇಂಟಿಗ್ರೇಟೆಡ್ ಶಾಲೆಗಳಾಗಿ ಉನ್ನತೀಕರಣ: 30 ಕೋಟಿ ರೂಪಾಯಿ, ಐವತ್ತು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿ ದ್ವಿಗುಣಗೊಳಿಸಲು 23 ಕೋಟಿ ರೂಪಾಯಿ ಘೋಷಿಸಲಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆದ ಎಂಜಿನಿಯರಿಂಗ್, ವೈದ್ಯಕೀಯ ಮುಂತಾದ ಇಪ್ಪತ್ತೆಂಟು ವೃತ್ತಿಪರ ಕೋರ್ಸ್ ವ್ಯಾಸಂಗಕ್ಕೆ ವಾರ್ಷಿಕ ಶೇಕಡಾ 2ರ ಬಡ್ಡಿ ದರದಲ್ಲಿ ಒಂದು ಲಕ್ಷದ ತನಕ ಸಾಲ ನೀಡಲು 75 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಇಂಗ್ಲಿಷ್, ಕನ್ನಡ ಜ್ಞಾನ ಹೆಚ್ಚಿಸಲು ಎಲ್ಲ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆಗೆ 5 ಕೋಟಿ ರೂಪಾಯಿ ಒದಗಿಸಲು ನಿರ್ಧರಿಸಲಾಗಿದೆ.
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ ತರಬೇತಿಗಾಗಿ 4 ಕೋಟಿ ರೂಪಾಯಿ, ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಇತರ ಪ್ರವೇಶ ಪರೀಕ್ಷೆ ತಯಾರಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿ ಕೊಡಿಸಲು 8 ಕೋಟಿ ರೂಪಾಯಿ ಅನುದಾನ ಒದಗಿಸಲಾಗಿದೆ.
ಬೆಂಗಳೂರಿನ ಹಜ್ ಭವನದಲ್ಲಿ ಅಲ್ಪಸಂಖ್ಯಾತ ಯುವ ಜನರಿಗೆ ಹತ್ತು ತಿಂಗಳ ವಸತಿ ಸಹಿತ ಐಎಎಸ್/ಕೆಎಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿಷ್ಠಿತ ಸಂಸ್ಥೆಗಳಿಂದ ತರಬೇತಿ ಒದಗಿಸಲು ನಿರ್ಧರಿಸಲಾಗಿದೆ. ವಿಶ್ವದ ಟಾಪ್ 250 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಇರುವ ವಿದೇಶಿ ವಿವಿ ಗಳಲ್ಲಿ ವ್ಯಾಸಂಗ ಮಾಡುವುದಕ್ಕೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂಪಾಯಿ ಸಾಲ ಸೌಲಭ್ಯ ಒದಗಿಸಲು ನಿರ್ಧರಿಸಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಹತ್ತು ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕ್‌ನಿಂದ ಪಡೆಯುವ ಸಾಲಕ್ಕೆ ಶೇಕಡಾ 20ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂಪಾಯಿ ಸಹಾಯ ಧನ ಒದಗಿಸಲು ಯೋಜನೆ ರೂಪಿಸಲಾಗಿದೆ. ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರದ ದ್ವಿಚಕ್ರ ವಾಹನ ಖರೀದಿಸಲು ಪಡೆಯುವ ಸಾಲಕ್ಕೆ ಶೇ 50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ತನಕ ಸಹಾಯಧನ ಒದಗಿಸುವಾಗಿ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 126 ಶಾದಿ ಮಹಲ್ ಮತ್ತು ಸಮುದಾಯ ಭವನ ನಿರ್ಮಾಣವನ್ನು ಪೂರ್ಣಗೊಳಿಸಲು 54 ಕೋಟಿ ರೂಪಾಯಿ, ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ನೀಡುತ್ತಿರುವ ತಸ್ತಿಕ್ ಮೊತ್ತವನ್ನು 60 ಸಾವಿರ ರೂಪಾಯಿಗೆ ಏರಿಕೆ ಮಾಡಲಾಗಿದೆ. ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಯಡಿ ವಿವಿಧ ಯೋಜನೆಗಳಿಗೆ 360 ಕೋಟಿ ರೂಪಾಯಿ ಮೀಸಲಿಡಲಾಗಿದೆ.
ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ರೂಪಾಯಿ, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ರೂಪಾಯಿ, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿ 50 ಕೋಟಿ ರೂಪಾಯಿ, ಮೈಸೂರು, ಕಲಬುರಗಿ, ಹುಬ್ಬಳ್ಳಿ ಗುರುದ್ವಾರಗಳ ಅಭಿವೃದ್ಧಿಗೆ 5 ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ.