logo
ಕನ್ನಡ ಸುದ್ದಿ  /  ಕರ್ನಾಟಕ  /  Live: ಕರ್ನಾಟಕದಲ್ಲಿ ಬಿಜೆಪಿ Vs ಕಾಂಗ್ರೆಸ್ ಜಿದ್ದಾಜಿದ್ದಿ ಪೈಪೋಟಿ; ಬಿಜೆಪಿ 16, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆ

LIVE: ಕರ್ನಾಟಕದಲ್ಲಿ ಬಿಜೆಪಿ vs ಕಾಂಗ್ರೆಸ್ ಜಿದ್ದಾಜಿದ್ದಿ ಪೈಪೋಟಿ; ಬಿಜೆಪಿ 16, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆ

Rakshitha Sowmya HT Kannada

Jun 04, 2024 02:19 PM IST

google News

ಕರ್ನಾಟಕದಲ್ಲಿ ಬಿಜೆಪಿ vs ಕಾಂಗ್ರೆಸ್ ಜಿದ್ದಾಜಿದ್ದಿ ಪೈಪೋಟಿ; ಬಿಜೆಪಿ 16, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆ

  • Karnataka Election Results 2024 Live Updates: ಲೋಕಸಭಾ ಚುನಾವಣೆಯ ಮತ ಎಣಿಕೆ ಕರ್ನಾಟಕದಲ್ಲಿ ಭರದಿಂದ ಸಾಗಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿತ್ತು. ಬೆಂಗಳೂರು ಗ್ರಾಮಾಂತರದಲ್ಲಿ ಡಿಕೆ ಸುರೇಶ್ vs ಸಿಎನ್ ಮಂಜುನಾಥ್ ನಡುವೆ ಗೆಲುವು ತೂಗುಯ್ಯಾಲೆಯಾಡುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ vs ಕಾಂಗ್ರೆಸ್ ಜಿದ್ದಾಜಿದ್ದಿ ಪೈಪೋಟಿ; ಬಿಜೆಪಿ 16, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆ
ಕರ್ನಾಟಕದಲ್ಲಿ ಬಿಜೆಪಿ vs ಕಾಂಗ್ರೆಸ್ ಜಿದ್ದಾಜಿದ್ದಿ ಪೈಪೋಟಿ; ಬಿಜೆಪಿ 16, ಕಾಂಗ್ರೆಸ್ 10 ಕ್ಷೇತ್ರಗಳಲ್ಲಿ ಮುನ್ನಡೆ (PC: Manjunath Kotagunasi)

Karnataka Election Results 2024 Live Updates: ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟಗಳಿಗೆ ಗೆಲುವು ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲು ಅತ್ಯಂತ ನಿರ್ಣಾಯಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಮತಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಎಕ್ಸಿಟ್‌ ಪೋಲ್‌ ವರದಿ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ಕ್ಕೂ ಹೆಚ್ಚು ಸ್ಥಾನ ಗಳಿಸಬಹುದೇ? ಹಲವು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ ಜಾರಿ ಮಾಡಿರುವ ಕಾಂಗ್ರೆಸ್‌ಗೆ ಈ ಬಾರಿ ಹೆಚ್ಚು ಸ್ಥಾನಗಳು ದೊರೆಯಲಿದೆಯೇ? ಹಾಸನ ಪೆನ್‌ಡ್ರೈವ್‌ ಪ್ರಕರಣದಿಂದ ಸುದ್ದಿಯಲ್ಲಿರುವ ಪ್ರಜ್ವಲ್‌ ರೇವಣ್ಣ ಗೆಲುವು ಪಡೆಯಲಿದ್ದಾರೆಯೇ? ಬೆಂಗಳೂರು ವಿಧಾನಸಭಾ ಕ್ಷೇತ್ರಗಳಲ್ಲಿ ಏನಾಗಲಿದೆ? ಬಾಗಲಕೋಟೆ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಳಗಾವಿ, ಬಳ್ಳಾರಿ, ಬೀದರ್‌, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕೋಡಿ, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗುಲ್ಬರ್ಗ,ಹಾಸನ, ಹಾವೇರಿ, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಉಡುಪಿ ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮತಎಣಿಕೆ, ಹಿನ್ನಡೆ ಮುನ್ನಡೆ, ಗೆಲುವು ಪಡೆದ ಅಭ್ಯರ್ಥಿಗಳು ಸೇರಿದಂತೆ ಕ್ಷಣಕ್ಷಣದ ವಿವರವನ್ನು ಈ ಲೈವ್‌ ಅಪ್‌ಡೇಟ್ಸ್‌ನಲ್ಲಿ ನೀಡಲಾಗಿದೆ. ತಾಜಾ ಮಾಹಿತಿ ಪಡೆಯಲು ಈ ಪುಟವನ್ನು ರಿಫ್ರೆಶ್‌ ಮಾಡುತ್ತಿರಿ.‌

02:20 PM

ಮೊದಲ ಪ್ರಯತ್ನದಲ್ಲೇ ಯದುವೀರ್‌ ಒಡೆಯರ್‌ಗೆ ಒಲಿದ ವಿಜಯಲಕ್ಷ್ಮೀ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆಲುವು ಸಾಧಿಸಿದ್ದಾರೆ. ಯದುವೀರ್ ಗೆಲ್ಲುತ್ತಿದ್ದಂತೆ ಕೇಸರಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಮೈಸೂರಿನ ಅಗ್ರಹಾರದ 101 ಗಣಪತಿ ದೇವಸ್ಥಾನದ ಬಳಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದಾರೆ.

01:55 PM

ದಾವಣಗೆರೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

ದಾವಣಗೆರೆಯಲ್ಲಿ ಈ ಬಾರಿ ತ್ರಿಕೋನ ಪೈಪೋಟಿ ನಡೆದಿದ್ದು, ಕಾಂಗ್ರೆಸ್‌, ಬಿಜೆಪಿ ಹಾಗೂ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್‌ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಗೆಲುವು ಸಾಧಿಸಿದ್ದಾರೆ.

01:50 PM

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಡಿಕೆ ಸುರೇಶ್ ವಿರುದ್ದ ಬಿಜೆಪಿಯ ಡಾ ಮಂಜುನಾಥ್‌ ಗೆಲುವು

ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜನಾಥ್ , ಭಾರಿ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಕಾಂಗ್ರೆಸ್‌ಗೆ ಶಾಕ್‌ ನೀಡಿದೆ.

01:25 PM

ಹುಬ್ಬಳ್ಳಿಯಲ್ಲಿ ಬಿಜೆಪಿ ಅಭಿಮಾನಿ ಹೃದಯಾಘಾತದಿಂದ ಸಾವು

ಲೋಕಸಭಾ ಚುನಾವಣೆಯಲ್ಲಿ ಸಂಪೂರ್ಣ ಫಲಿತಾಂಶ ಪ್ರಕಟವಾಗುವ ಮುನ್ನವೇ, ಎನ್‌ಡಿಎ 300 ಗಡಿ ದಾಟಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಶಿವಪ್ರಕಾಶ್ ಹಿರೇಮಠ ಎಂಬಾತ ಬಿಜೆಪಿಯ ಕಟ್ಟಾ ಅಭಿಮಾನಿಯಾಗಿದ್ದರು. ಟಿವಿ ನೋಡುತ್ತಲೇ ಬಿಜೆಪಿ ಮೈತ್ರಿಕೂಟ 300ರ ಗಡಿ ದಾಟುತ್ತಿಲ್ಲ ಎಂಬ ಬೇಸರದಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

01:15 PM

ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಗೆಲುವು, ಗೀತಾ ಶಿವರಾಜ್‌ಕುಮಾರ್‌ಗೆ ಸೋಲು

ಶಿವಮೊಗ್ಗದಲ್ಲಿ ಬಿಜೆಪಿಯ ಬಿವೈ ರಾಘವೇಂದ್ರ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್‌ ವಿರುದ್ಧ ಭಾರೀ ಅಂತರದಲ್ಲಿ ಗೆದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್‌.ಈಶ್ವರಪ್ಪ ಕೂಡಾ ಸೋಲುಂಡಿದ್ದಾರೆ.

01:05 PM

ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪ್ರಜ್ವಲ್‌ರೇವಣ್ಣ ಮಾಜಿ ಕಾರು ಚಾಲಕ

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಹಿನ್ನೆಲೆ ಹೊಳೆನರಸೀಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ‌ ಸಿಡಿಸಿ ಸಂಭ್ರಮಿಸಿದ್ದಾರೆ. ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ತಿಕ್‌ಗೌಡ (ಪ್ರಜ್ವಲ್‌ರೇವಣ್ಣ ಮಾಜಿ ಕಾರು ಚಾಲಕ) ಹಾಗೂ ಪುಟ್ಟರಾಜು ಕೂಡಾ ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

1:00 PM

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ಸಾಧಿಸಿದ್ದು ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದಾರೆ. ಅಧಿಕೃತ ಘೋಷಣೆಗಾಗಿ ಕಾರ್ಯಕರ್ತರು ಕಾಯುತ್ತಿದ್ದಾರೆ.

12:40 PM

ಮಂಡ್ಯದಲ್ಲಿ ಹೆಚ್‌ಡಿ ಕುಮಾರಸ್ವಾಮಿ ಗೆಲುವು

ಸಕ್ಕರೆ ನಾಡು ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ, ಜೆಡಿಎಸ್‌ ಅಭ್ಯರ್ಥಿ ಮಾಜಿ ಸಿಎಂ ಹೆಚ್‌ಡಿಕೆ ಕಾಂಗ್ರೆಸ್‌ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ವಿರುದ್ಧ ಹೆಚ್‌ಡಿಕೆ ಸುಮಾರು 2.40 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಗೆದ್ದಿದ್ದಾರೆ.

12:35 PM

ಮಂಡ್ಯ ಲೋಕಸಭಾ ಕ್ಷೇತ್ರ; 2 ಲಕ್ಷ ಮತಗಳ ಅಂತರದಲ್ಲಿ ಹೆಚ್‌ಡಿಕೆ ಮುನ್ನಡೆ

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ 6,47,736 ಮತಗಳನ್ನು ಪಡೆದಿದ್ದು ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು 4,07,578 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಹೆಚ್‌ಡಿಕೆ 2,40,158 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

12:20 PM

ಹಾಸನ: ಮತಗಳ ಅಂತರ ಹೆಚ್ಚಿಸಿಕೊಳ್ಳುತ್ತಲೇ ಇರುವ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್

ಹಾಸನ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಮುನ್ನಡೆ ಸಾಧಿಸಿದ್ದಾರೆ. ಕ್ಷೇತ್ರದಲ್ಲಿ ಪ್ರಜ್ವಲ್‌ ರೇವಣ್ಣ ಗೆಲುವಿನ ಸಾಧ್ಯತೆ ಇದೆ ಎಂದು ಎಕ್ಸಿಟ್‌ ಪೋಲ್‌ ಭವಿಷ್ಯ ನುಡಿದಿದ್ದವು. ಆದರೆ ಇದೀಗ 41782 ಮತಗಳ ಅಂತರದಲ್ಲಿ ಪ್ರಜ್ವಲ್‌ ರೇವಣ್ಣ ಹಿಂದೆ ಉಳಿದಿದ್ದು, ಶ್ರೇಯಸ್‌ ಪಟೇಲ್‌ ಮುಂದಿದ್ದಾರೆ. ಹಾಸನದಲ್ಲಿ 7880 ನೋಟಾ ಮತಗಳು ಚಲಾವಣೆಯಾಗಿವೆ.

11:50 AM

ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಮೈಸೂರು ಸಂಸದರ ಬೋರ್ಡ್‌ ರೆಡಿ

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ 412685 ಮತಗಳನ್ನು ಪಡೆದಿದ್ದು ಕಾಂಗ್ರೆಸ್‌ನ ಲಕ್ಷ್ಮಣ್‌ಗಿಂತ 88828 ಮತಗಳ ಮುನ್ನಡೆ ಸಾಧಿಸಿದ್ದಾರೆ. ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ಯದುವೀರ್ ಯುವ ಬ್ರಿಗೇಡ್ ವತಿಯಿಂದ ಸಂಸದರ ಬೋರ್ಡ್‌ ರೆಡಿ ಮಾಡಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿ ಮುಂದೆ ನೇಮ್‌ ಪ್ಲೇಟ್‌ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಗಿದೆ. ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

11:35 AM

ಶಿವಮೊಗ್ಗ ಲೋಕಸಭಾ ಕ್ಷೇತ್ರ; 9 ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿಯ ಬಿ.ವೈ ರಾಘವೇಂದ್ರ 302114, ಕಾಂಗ್ರೆಸ್‌ನ ಗೀತಾ ಶಿವರಾಜ್‌ಕುಮಾರ್‌ 212805 ಮತಗಳನ್ನು ಪಡೆದಿದ್ದಾರೆ. ಬಿಜೆಪಿ 89309 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, 1596 ನೋಟಾ ಮತಗಳು ಚಲಾವಣೆ ಆಗಿವೆ.

11:20 AM

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಮುನ್ನಡೆ; ಕಾಂಗ್ರೆಸ್ ಹಿನ್ನಡೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಇದುವರೆಗೂ ನಡೆದ ಮತ ಎಣಿಕೆಯಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 2,72,493 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ನ ಪದ್ಮರಾಜ್ ಆರ್ ಪೂಜಾರಿ 2,09,472 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ 63021 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 8,498 ನೋಟಾ ಮತ ಚಲಾವಣೆಯಾಗಿದೆ.

11:05 AM

ಹಾಸನದಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ಪೈನ್‌ ಡ್ರೈವ್‌ಕೇಸ್‌ ಮೂಲಕ ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಮುನ್ನಡೆ ಸಾಧಿಸಿದ್ದಾರೆ.

10:45 AM

ದಾವಣಗೆರೆ:ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ದಾವಣಗೆರೆ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ನಗರದ ದುರ್ಗಾಂಬಿಕೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿದ್ದು ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ.

10:35 AM

ಉತ್ತರ ಕನ್ನಡ ಕ್ಷೇತ್ರ: 1 ಲಕ್ಷ ಮತಗಳ ಅಂತರದಲ್ಲಿ ಕಾಗೇರಿ ಮುನ್ನಡೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ 106341 ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಗೇರಿ ಅವರಿಗೆ 2,15,686 ಮತಗಳು ದೊರೆತಿದೆ. ಕಾಂಗ್ರೆಸ್ ಪಕ್ಷದ ಡಾ. ಅಂಜಲಿ ನಿಂಬಾಳ್ಕರ್ 1,09,345 ಮತ ಪಡೆದಿದ್ದಾರೆ. ಗಣಪತಿ ಹೆಗಡೆ 1317, ರಾಜಶೇಖರ ಶಂಕರ ಹಿಂಡಲಗಿ 1550, ನಿರಂಜನ ಉದಯ ಶಿರದೇಸಾಯಿ 1260, ನಾಗರಾಜ ಶಿರಾಲಿ 826, ಚಿದಾನಂದ 469, ಕೆ.ಪಿ.ಪಾಟಿಲ 273, ಕೃಷ್ಣ ಬಳೆಗಾರ 269, ಅರವಿಂದ ಗೌಡ 224, ವಿನಾಯಕ ನಾಯಕ 395,.ಅವಿನಾಶ್ ನಾರಾಯಣ 215 ಮತಗಳನ್ನು ಪಡೆದಿದ್ದು 2971 ನೋಟಾ ಮತಗಳು ಚಲಾವಣೆ ಆಗಿವೆ.

10:30 AM

ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ: ಯದುವೀರ್‌ ಒಡೆಯರ್‌

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ 3ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದೆ. ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಒಟ್ಟು 236037 ಮತಗಳನ್ನು ಪಡೆದು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇಂದು ನಾಲ್ವಡಿ ಕೃಷ್ಣರಾಜ್‌ ಒಡೆಯರ್‌ ಅವರ 140ನೇ ಜನ್ಮದಿನವಾದ ಇಂದು ಅರಮನೆ ಎದುರು ಇರುವ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಅವರು, ಚುನಾವಣೆಯಲ್ಲಿ ಖಂಡಿತ ಗೆಲುವು ದೊರೆಯಲಿದೆ. ಸಂಪೂರ್ಣ ವಿಶ್ವಾಸವಿದೆ ಎಂದರು.

10:25 AM

ಮೈಸೂರು-ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ 218031 ಮತಗಳನ್ನು ಪಡೆದಿದ್ದು 170355 ಮತಗಳನ್ನು ಪಡೆದಿರುವ ಕಾಂಗ್ರೆಸ್‌ನ ಲಕ್ಷ್ಮಣ್‌ ಅವರನ್ನು ಹಿಂದಿಕ್ಕಿದ್ದಾರೆ. 47676 ಮತಗಳ ಅಂತರದಲ್ಲಿ ಯದುವೀರ್‌ ಮುಂದಿದ್ದಾರೆ.

10:10 AM

ದ.ಕನ್ನಡದಲ್ಲಿ 3ನೇ ಸುತ್ತಿನ ಮತ ಎಣೆಕೆ ಆರಂಭ; ಬಿಜೆಪಿ ಅಭ್ಯರ್ಥಿ ಮುನ್ನಡೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ 3ನೇ ಹಂತದ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಮೊದಲ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 89,739 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್‌ನ ಪದ್ಮರಾಜ್ ಆರ್ ಪೂಜಾರಿ 73,318 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. 2 ಸುತ್ತುಗಳಲ್ಲಿ ಬಿಜೆಪಿಗೆ ಒಟ್ಟು 1,03,703 ಕಾಂಗ್ರೆಸ್‌ಗೆ 90,199 ಮತಗಳು ದೊರೆತಿದ್ದು ಈ ಮೂಲಕ ಬಿಜೆಪಿ 13,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 3,639 ನೋಟಾ ಮತ ಚಲಾವಣೆಯಾಗಿದೆ.

10:05 AM

ಚಾಮರಾಜನಗರ ಲೋಕಸಭಾ ಕ್ಷೇತ್ರ; ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ

ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು 3ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಸುನಿಲ್‌ ಮುನ್ನಡೆ ಸಾಧಿಸಿದ್ದಾರೆ. ಮೂರನೇ ಸುತ್ತಿನಲ್ಲಿ ಸುನಿಲ್‌ 39,923, ಬಿಜೆಪಿ ಅಭ್ಯರ್ಥಿ ಬಾಲರಾಜ್ 36,369 ಪಡೆದಿದ್ದಾರೆ. ಇದುವರೆಗೂ ಸುನಿಲ್‌ ಬೋಸ್‌ 179471 , ಬಿಜೆಪಿ ಅಭ್ಯರ್ಥಿ ಬಾಲರಾಜ್ 145168 ಮತಗಳನ್ನು ಪಡೆದಿದ್ದು ಸುನಿಲ್‌ 34,303 ಮತಗಳ ಅಂತರದಲ್ಲಿ ಮುಂದಿದ್ದಾರೆ.

10:00 AM

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಹೆಚ್‌ಡಿಕೆ ಮುನ್ನಡೆ

ಕಾಂಗ್ರೆಸ್‌ನ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) 1,08,282, ಜೆಡಿಎಸ್​​ (ಮೈತ್ರಿ ಅಭ್ಯರ್ಥಿ) ಹೆಚ್.ಡಿ.ಕುಮಾರಸ್ವಾಮಿ ಮತಗಳನ್ನು ಪಡೆದಿದ್ದು ಹೆಚ್‌ಡಿಕೆ 72,801 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

9:35 AM

ಮೈಸೂರು-ಕೊಡಗು: ಯದುವೀರ್ ಮುನ್ನಡೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ 91627 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಯದುವೀರ್ 111823 ಮತಗಳನ್ನು ಪಡೆದಿದ್ದಾರೆ. ಯದುವೀರ್ 20196 ಮತಗಳ ಮುನ್ನಡೆ ಸಾಧಿಸಿದ್ದಾರೆ.

9:32 AM

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮುನ್ನಡೆ

ಚಾಮರಾಜನಗರದಲ್ಲಿ ಬಿಜೆಪಿಯ ಬಾಲರಾಜು 95856 ಮತ ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ 120389 ಮತಗಳನ್ನು ಪಡೆದಿದ್ದಾರೆ. 25 ಸಾವಿರಕ್ಕೂ ಹೆಚ್ಚಿನ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಮುನ್ನಡೆಯಲ್ಲಿದ್ದಾರೆ.

9:30 AM

ದಕ್ಷಿಣ ಕನ್ನಡದಲ್ಲಿ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು ಬಿಜೆಪಿ ಮುನ್ನಡೆ ಕಾಯ್ದಿದೆ. ಮೊದಲ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 18,181 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 10,599 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ 7,582 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.

9:27 AM

ಮೈಸೂರು-ಕೊಡಗು: ಯದುವೀರ್ ಮುನ್ನಡೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ 76660 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಯದುವೀರ್ 83613 ಮತಗಳನ್ನು ಪಡೆದಿದ್ದಾರೆ. ಯದುವೀರ್ 6953 ಮತಗಳ ಮುನ್ನಡೆ ಸಾಧಿಸಿದ್ದಾರೆ.

9.25 AM

ಉಡುಪಿ ಚಿಕ್ಕಮಗಳೂರು: ಕೋಟ ಮುನ್ನಡೆ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 72972 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್‌ನ ಜಯಪ್ರಕಾಶ್ ಹೆಗ್ಡೆ 43516 ಮತಗಳನ್ನು ಪಡೆದಿದ್ದಾರೆ. ಬಿಜೆಪಿ 29456 ಮತಗಳಿಂದ ಭಾರಿ ಮುನ್ನಡೆ ಕಾಯ್ದುಕೊಂಡಿದೆ.

9:15 AM

ಮೈಸೂರು-ಕೊಡಗು ಅಪ್‌ಡೇಟ್‌

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -55146 ಹಾಗೂ ಬಿಜೆಪಿ ಅಭ್ಯರ್ಥಿ ಯದುವೀರ್-64095 ಮತಗಳನ್ನು ಪಡೆದಿದ್ದು ಯದುವೀರ್ 8949 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

8:55 AM

ಮಂಗಳೂರು, ಉಡುಪಿ, ಚಿಕ್ಕಮಗಳೂರು ಅಪ್‌ಡೇಟ್‌

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಇವಿಎಂ ಮತ ಎಣಿಕೆಯಲ್ಲಿ 9000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟಾ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕೋಟಾ ಶ್ರೀನಿವಾಸ್‌ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಜಯಪ್ರಕಾಶ್‌ ಹೆಗ್ಡೆ ಹಿನ್ನಡೆಯಲ್ಲಿದ್ದಾರೆ. ಉತ್ತರ ಕನ್ನಡದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

8:50 AM

ಹಾಸನ, ಬೆಂಗಳೂರು ಗ್ರಾಮಾಂತರ ಅಪ್‌ಡೇಟ್‌

ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್ ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತಗಳಲ್ಲಿ ಪ್ರಜ್ವಲ್‌ ಹಿನ್ನಡೆ ಕಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ 3ನೇ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ 1800 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮುನ್ನಡೆ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹಿನ್ನಡೆ ಅನುಭವಿಸಿದ್ದಾರೆ.

8:45 AM

ಮೈಸೂರು, ಕೊಡಗು, ಕೋಲಾರ ಅಪ್‌ಡೇಟ್‌

ಮೈಸೂರಿನಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿಗೆ ಮುನ್ನಡೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಮುನ್ನಡೆ.ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ ಮುನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಗೆ ಹಿನ್ನಡೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು 1500 ಮತಗಳ ಮುನ್ನಡೆ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಹಿನ್ನಡೆಯಲ್ಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹಿನ್ನಡೆಯಲ್ಲಿದ್ದಾರೆ

 

8:35 AM

ಬೆಳಗಾವಿಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್‌ 2500 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಹಿನ್ನಡೆ ಅನುಭವಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮುನ್ನಡೆ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಹಿನ್ನಡೆ ಅನುಭವಿಸಿದ್ದಾರೆ. ಬಿವೈ ರಾಘವೇಂದ್ರ 2252 ಮತಗಳಿಂದ ಮುಂದೆ ಇದ್ದಾರೆ.

8:25 AM

ಮಂಡ್ಯದಲ್ಲಿ ಹೆಚ್‌ಡಿಕೆಗೆ ಮುನ್ನಡೆ

ಸಕ್ಕರೆ ನಾಡು ಮಂಡ್ಯದಲ್ಲಿ ಅಂಚೆ ಮತದಾನ ಆರಂಭವಾಗಿದ್ದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ 108 ಮತಗಳ ಮುನ್ನಡೆ ಸಾಧಿಸಿದ್ದಾರೆ.

8:15 AM

ಅಂಚೆ ಮತದಾನದಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ

ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ, ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ, ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟಾ, ತುಮಕೂರಿನ ವಿ. ಸೋಮಣ್ಣ, ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಮುನ್ನಡೆ. ಒಟ್ಟಾರೆ ಅಂಚೆ ಮತ ಎಣಿಕೆಯಲ್ಲಿ ಕರ್ನಾಟಕದ 7 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. 3 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುಂದಿದೆ. 2 ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ.

7:50 AM

ಅಂಚೆ ಮತ ಎಣಿಕೆ ಆರಂಭ

ದೇಶಾದ್ಯಂತ ಅಂಚೆ ಮತ ಎಣಿಕೆ ಆರಂಭವಾಗಿದೆ. ರಾಜ್ಯದಲ್ಲೂ ತುಮಕೂರು, ಕೋಲಾರ, ಬಾಗಲಕೋಟೆ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಅಂಚೆ ಮತ ಎಣಿಕೆ ನಂತರ ಇವಿಎಂಗಳ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

7:20 AM

ಮೈಸೂರಿನಲ್ಲಿ ಮತ ಎಣಿಕೆಗೆ ಸಿದ್ಧತೆ

ಲೋಕಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆ ಬಿಗಿ ಭದ್ರತೆಯೊಂದಿಗೆ ಮೈಸೂರಿನ ಸ್ಟ್ರಾಂಗ್‌ ರೂಮ್‌ ತೆರೆಯಲಾಗಿದೆ. ಪಾಸ್ ಪಡೆದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಮತ ಎಣಿಕೆ ಕೇಂದ್ರದ ಆಸುಪಾಸಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಕೆಎಸ್‌ಆರ್‌ಪಿಸಿ ತುಕಡಿಗಳನ್ನು ನಿಯೋಜಿಸಲಾಗಿದೆ.

6:55 AM

ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಸ್ಟ್ರಾಂಗ್‌ ರೂಮ್‌ ಓಪನ್‌

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸ್ಟ್ರಾಂಗ್‌ ರೂಮ್‌ ತೆರೆಯಲಾಗಿದೆ. ಸಿಬ್ಬಂದಿ ಮತ ಎಣಿಕೆ ಕಾರ್ಯಕ್ಕೆ ಸಜ್ಜಾಗುತ್ತಿದ್ಧಾರೆ. ಪೊಲೀಸರು ಸಿಬ್ಬಂದಿಯನ್ನು ತಪಾಸಣೆ ಮಾಡುತ್ತಿದ್ದಾರೆ. ಮತ ಎಣಿಕೆ ಕೇಂದ್ರದ ಒಳಗೆ ಮೊಬೈಲ್‌, ಬ್ಲೂ ಟೂತ್‌ ಸೇರಿದಂತೆ ಎಲೆಕ್ಟ್ರಾನಿಕ್‌ ವಸ್ತುಗಳನ್ನು ನಿಷೇಧಿಸಲಾಗಿದೆ.

6:50 AM

ಮತ ಎಣಿಕೆ ಕಾರ್ಯದಲ್ಲಿ 13,000ಕ್ಕೂ ಹೆಚ್ಚು ಸಿಬ್ಬಂದಿ

ಲೋಕಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಮ್ ಓಪನ್ ಆಗಲಿದ್ದು 8ರಿಂದ ಮತ ಎಣಿಕೆ ಆರಂಭವಾಗಲಿದೆ. ಇಂದು ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ದೊರೆಯಲಿದೆ. 28 ಲೋಕಸಭೆ ಕ್ಷೇತ್ರಗಳಲ್ಲೂ ಮತ ಎಣಿಕೆ ಕೇಂದ್ರದ ಸುತ್ತ ಮುತ್ತ ಭಾರೀ ಬಂದೋಬಸ್ತ್‌ ಮಾಡಲಾಗಿದ್ದು 13,000ಕ್ಕೂ ಹೆಚ್ಚು ಸಿಬ್ಬಂದಿ ಮತ ಎಣಿಕೆ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

6:20 AM

ಮತ ಎಣಿಕೆ ನೇರ ಪ್ರಸಾರ, ಲೈವ್ ಅಪ್‌ಡೇಟ್ಸ್‌ ಪಡೆಯಲು ಹೀಗೆ ಮಾಡಿ

ಭಾರತದ ಅಧಿಕೃತ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್‌ ಮತ ಎಣಿಕೆಯ ಪ್ರವೃತ್ತಿಗಳು ಮತ್ತು ಫಲಿತಾಂಶಗಳನ್ನು ಪ್ರದರ್ಶಿಸುತ್ತದೆ. ಇವು ಐಒಎಸ್ ಮತ್ತು ಆಂಡ್ರಾಯ್ಡ್ ಸಾಧನಗಳಿಗೆ https://results.eci.gov.in/ ಮತ್ತು ಮತದಾರರ ಸಹಾಯವಾಣಿ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತವೆ.

6:00 AM

ವಿದ್ಯುತ್‌ ದೀಪಾಲಂಕಾರಗಳಿಂದ ಝಗಮಗಿಸಿದ ಬಿಜೆಪಿ ಕಚೇರಿ

ಇಂದು ಲೋಕಸಭೆ ಚುನಾವಣೆ ಫಲಿತಾಂಶ ಹಿನ್ನೆಲೆ ಸೋಮವಾರ ರಾತ್ರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನಕ್ಕೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.

5:40 AM

ಬೆಳಗಾವಿಯ ಕೆಲವು ಶಾಲಾ ಕಾಲೇಜುಗಳಿಗೆ ರಜೆ

ಇಂದು ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯಲಿದೆ. ಬೆಳಗಾವಿಯ ಟಿಳಕವಾಡಿಯಲ್ಲಿರುವ ರಾಣಿ ಪಾರ್ವತಿ ದೇವಿ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದೆ. ಈ ಹಿನ್ನೆಲೆ ಮತ ಎಣಿಕೆ ಕೇಂದ್ರದ ಸುತ್ತ ಮುತ್ತಲಿನ ಕೆಲವೊಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಮಾಹಿತಿ ನೀಡಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ