logo
ಕನ್ನಡ ಸುದ್ದಿ  /  ಕರ್ನಾಟಕ  /  Karnataka Elections: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಡಿಕೆಶಿ ಏನಂದ್ರು?

Karnataka Elections: ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು, ಡಿಕೆಶಿ ಏನಂದ್ರು?

HT Kannada Desk HT Kannada

Mar 22, 2023 05:34 PM IST

google News

Karnataka Elections: ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

  • ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಇವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.

Karnataka Elections: ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
Karnataka Elections: ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು: ನಿರೀಕ್ಷೆಯಂತೆ ಮಾಜಿ ಸಚಿವ, ಮಾಜಿ ವಿಧಾನ ಪರಿಷತ್ ಸದಸ್ಯ ಬಾಬುರಾವ್ ಚಿಂಚನಸೂರು ಅವರು ಇಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದಾರೆ. ಇವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಚಿಂಚನಸೂರು ಅವರಿಗೆ ಪಕ್ಷದ ಶಾಲು ಹಾಕುವ ಮೂಲಕ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಳ್ಳಲಾಯಿತು.

‘ಈಗಾಗಲೇ ಹಳ್ಳಿಗಳಿಂದ ರಾಜ್ಯ ಮಟ್ಟದವರೆಗೆ ನೂರಾರು ಅನ್ಯ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕೆಲ ದಿನಗಳ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ನಾಲ್ಕೂವರೆ ವರ್ಷಗಳ ಕಾಲ ಅಧಿಕಾರ ಇದ್ದರೂ ಪುಟ್ಟಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರು ಅವರು ಪರಿಷತ್ ಸದಸ್ಯರಾಗಿ ಒಂದೂವರೆ ವರ್ಷಗಳ ಕಾಲ ಅಧಿಕಾರ ಬಾಕಿ ಇದ್ದರೂ, ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ನಾನು ಅವರು ಜತೆಯಲ್ಲಿ ಅನೇಕ ಬಾರಿ ಮಂತ್ರಿಯಾಗಿ ಕೆಲಸ ಮಾಡಿದ್ದೇವೆ" ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

"ಈ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರ ಕಲ್ಯಾಣವಾಗಿ, ಅವರ ಜೀವನ ಭದ್ರಾವಾಗಲಿದೆ. ಈ ಸಮಾಜಕ್ಕೆ ನ್ಯಾಯ ಸಿಗಲಿದೆ ಎಂದು ನಂಬಿಕೆ ಇಟ್ಟು, ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ವಿಶ್ವಾಸ ಇಟ್ಟು, ಅವರ ಅನುಯಾಯಿಯಾಗಿ ಪಕ್ಷ ಸೇರುತ್ತಿದ್ದಾರೆ. ಅವರ ರಾಜೀನಾಮೆ ನಿನ್ನೆ ಅಂಗೀಕಾರವಾಗಿದ್ದು, ಇಂದು ಹೊಸ ವರ್ಷದ ಹೊಸ ದಿನ ಆರಂಭವಾಗಲಿ ಎಂದು ಪಕ್ಷಕ್ಕೆ ಸೇರುತ್ತಿದ್ದಾರೆ" ಎಂದರು.

"ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮ ಇಟ್ಟುಕೊಳ್ಳಬೇಕು ಎಂದು ಭಾವಿಸಿದ್ದೆವು. ಪ್ರಿಯಾಂಕ್ ಖರ್ಗೆ ಅವರು ಊರಿನಲ್ಲಿ ಇಲ್ಲ. ಈ ಸಂದರ್ಭದಲ್ಲಿ ಒಂದು ದಿನವೂ ವ್ಯರ್ಥ ಮಾಡುವುದು ಬೇಡ ಎಂದು ಈ ಶುಭದಿನ ಪಕ್ಷಕ್ಕೆ ಸೇರುತ್ತಿದ್ದಾರೆ. ಪಕ್ಷದ ಎಲ್ಲ ನಾಯಕರ ಜತೆ ಚರ್ಚೆ ಮಾಡಿ ಅವರನ್ನು ಬಹಳ ಸಂತೋಷದಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ’ ಎಂದು ಡಿಕೆಶಿ ಹೇಳಿದ್ದಾರೆ.

"ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ದೇಶವೇ ಗುರುತಿಸುವ ಮಟ್ಟಿಗೆ ಬೆಳೆದಿದ್ದಾರೆ. ಅವರ ಅಧ್ಯಕ್ಷತೆ ಹಾಗೂ ಡಿ.ಕೆ. ಶಿವಕುಮಾರ್ ಅವರ ರಾಜ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದೇನೆ. ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಿಸಿದ್ದು ಶಿವಕುಮಾರ್ ಅವರು. ಅವರ ಸಹಾಯವನ್ನು ನಾನು ಏಳೇಳು ಜನ್ಮಕ್ಕೂ ಮರೆಯಲು ಸಾಧ್ಯವಿಲ್ಲ" ಎಂದು ಈ ಸಂದರ್ಭದಲ್ಲಿ ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.

"ಹೈದರಾಬಾದ್ ಕರ್ನಾಟಕ ಖರ್ಗೆ ಅವರ ಭದ್ರಕೋಟೆ, ಅದನ್ನು ಛಿದ್ರ ಮಾಡಬೇಕು ಎಂದು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಆದರೆ ಖರ್ಗೆ ಅವರು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಸೇರುತ್ತಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ 25 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಂಡ ಗೆಲವು ಸಾಧಿಸಲಿದೆ. 2023ರಲ್ಲಿ ಬಾಬುರಾವ್ ಚಿಂಚನಸೂರು ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ" ಎಂದು ಅವರು ಹೇಳಿದರು.

‘ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ಭಾವನೆ ಎಲ್ಲರಿಗೂ ಬಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಹಾಗೂ ದಳದವರಿಗೂ ಗೊತ್ತಿದೆ. ಹೀಗಾಗಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇನ್ನು ಅರ್ಜಿ ಹಾಕುವವರು ಇದ್ದಾರೆ. ಚಿಂಚನಸೂರು ಅವರು ಕೂಡ ಅರ್ಜಿ ಹಾಕಬೇಕಿದೆ. ಯಾರು ಕ್ಷೇತ್ರದಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಾರೆ ಅವರಿಗೆ ಅನೇಕ ಅವಕಾಶಗಳಿವೆ. 75 ಪರಿಷತ್, 12 ರಾಜ್ಯಸಭಾ, ಲೋಕಸಭಾ ಹಾಗೂ ನಿಗಮ ಮಂಡಳಿಗಳಿವೆ. ಎಲ್ಲರಿಗೂ ಅಧಿಕಾರವನ್ನು ಹಂಚುತ್ತೇವೆ’ ಎಂದು ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ