Karnataka Rains update: ಭಾರೀ ಮಳೆ: ಇಂದು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಶಾಲೆಗೆ ರಜೆ, ದಕ ಜಿಲ್ಲೆಯಲ್ಲಿ ರಜೆ ಮುಂದುವರಿಕೆ
Jul 05, 2023 06:13 AM IST
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಬುಧವಾರ ಮುಂಗಾರು ಚುರುಕುಗೊಂಡಿದೆ
- ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಚುರುಕುಗೊಂಡಿದೆ. ಬುಧವಾರ ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಿದ್ದರಿಂದ ಎರಡೂ ಜಿಲ್ಲೆಗಳ ಕರಾವಳಿ ಭಾಗದಲ್ಲಿ ಶಾಲಾ ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ/ಉಡುಪಿ: ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಂತರ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗಿದೆ. ಎರಡು ದಿನಗಳಿಂದ ಮಳೆಯ ಪ್ರಮಾಣದಲ್ಲಿ ಏರಿಕೆ ಕಂಡ ಹಿನ್ನೆಲೆಯಲ್ಲಿ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆ ಮುಂದುವರಿದುವುದರಿಂದ ಬುಧವಾರವೂ ಜಿಲ್ಲೆಯಲ್ಲಿ ಶಾಲಾ, ಕಾಲೇಜು ರಜೆ ಮುಂದುವರಿಯಲಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 05ರಂದು ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿದೆ. ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಈ ಪ್ರದೇಶಗಳ ಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ.
ಉಡುಪಿ ಜಿಲ್ಲಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳು ಹೆಚ್ಚಿನ ಮಳೆ ಹಿನ್ನೆಲೆ ಉಡುಪಿ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ.
ರೆಡ್ ಅಲರ್ಟ್ ಹಾಗೂ ಹೆಚ್ಚಿನ ಮಳೆ ಆಗುವ ಸಾಧ್ಯತೆ ಹಿನ್ನೆಲೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕುರ್ಮಾರಾವ್ ತಿಳಿಸಿದ್ದಾರೆ
ದ.ಕ. ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರವೂ ರಜೆ ಘೋಷಿಸಲಾಗಿದೆ.
ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವಂತೆಯೂ ಸೂಚಿಸಲಾಗಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಹಾಗೂ ದೂರವಾಣಿ: 0824 - 2442590 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಲಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಭಾಗ