Karnataka Weather: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ; ಬೆಂಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿಂದು ಭಾರಿ ಮಳೆಯ ಮುನ್ಸೂಚನೆ
Jun 28, 2023 06:21 AM IST
ಬೆಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಇಂದು (ಜೂನ್ 28, ಬುಧವಾರ) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಅಬ್ಬರಿಸಿದ್ದ ಮುಂಗಾರು (Monsoon) ಮತ್ತೆ ದುರ್ಬಲವಾಗಿದೆ. ಮಳೆಯ ಬಗ್ಗೆ ಯಾವುದೇ ಸುಧಾರಣೆಯಾಗದಿದ್ದರೆ ಜುಲೈ ಮೊದಲ ವಾರದಲ್ಲಿ ಬರ ಘೋಷಣೆಯ ಬಗ್ಗೆ ಚರ್ಚಿಸುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.
ಜೂನ್ ತಿಂಗಳ ಮೊದಲ ವಾರದಲ್ಲಿ ಬರಬೇಕಾಗಿದ್ದ ಮುಂಗಾರು ಮಳೆ ಎರಡು ವಾರ ತಡವಾಗಿ ಬಂದ ಹಿನ್ನೆಲೆಯಲ್ಲಿ ಹಲವು ಜಿಲ್ಲೆಯಲ್ಲಿ ಬಿತ್ತನೆ ತಡವಾಗಿದೆ. ಕಲಬುರಗಿ ಸೇರಿದಂತೆ ಕಲವೆಡೆ ಮುಂಗಾರು ತಡವಾಗಿ ಪ್ರವೇಶಿಸಿದೆ. ಮಳೆಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಬಿತ್ತನೆಗೆ ಅಣಿಯಾಗುತ್ತಿದ್ದಾರೆ. ಇದರ ನಡುವೆ ಮತ್ತೆ ಮುಂಗಾರು ದುರ್ಬಲವಾಗುತ್ತಿರುವುದು ಆತಂಕ ಮೂಡಿಸಿದೆ.
ನಿನ್ನೆ ಬೆಳಗ್ಗೆ 8.30ರ ವರೆಗೆ ವರದಿಯಾದ ಪ್ರಕಾರ ಕರಾವಳಿಯ ಬಹುತೇಕ ಕಡೆಗಳಲ್ಲಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ 5 ಸೆಂಟಿ ಮೀಟರ್ ಮಳೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಡುಪಿ ಜಿಲ್ಲೆಯ ಕೋಟ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕ್ಯಾಸಲ್ ರಾಕ್, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ 3, ಉಡುಪಿ ಜಿಲ್ಲೆಯ ಕಾರ್ಕಳ, ಬೆಳಗಾವಿ ಜಿಲ್ಲೆಯ ಕಾರವಾರ, ಗುಂಜಿ ತಲಾ 2, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಬ್ರಹ್ಮಣ್ಯ, ಉಡುಪಿ ಜಿಲ್ಲೆಯ ಸಿದ್ದಾಪುರ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಗೋಕರ್ಣ, ಬೇಲಿಕೇರಿ, ಬೆಳಗಾವಿ ಜಿಲ್ಲೆಯ ಲೋಂಡಾ, ಧಾರವಾಡ ಜಿಲ್ಲೆಯ ಕಲಘಟಗಿ, ಬೀದರ್ ಜಿಲ್ಲೆಯ ಭಾಲ್ಕಿ, ರಾಜೇಶ್ವರ, ಹಲಬರ್ಗಾ, ನಿಟ್ಟೂರು, ಚಿಕ್ಕಮಗಳೂರು ಜಿಲ್ಲೆಯ ಕಳಸ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಇಂದು (ಜೂನ್ 28, ಬುಧವಾರ) ಗುಡುಗು ಸಹಿತ ಭಾರಿ ಮಳೆಯಾಗುವ (Karnataka Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ನಾಳೆ (ಜೂನ್ 29, ಗುರುವಾರ) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಭಾರಿ ಮಳೆಯ ಸಂಭವ ಇದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗುಡುಗುು ಸಹಿತ ಮಳೆಯಾಗುವ (Bengaluru Rain) ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.