Karnataka Rains: ಉತ್ತರಕನ್ನಡದಲ್ಲಿ ಭಾರೀ ಮಳೆ ಅಲರ್ಟ್, ಬೆಂಗಳೂರು,ತುಮಕೂರು, ಬಳ್ಳಾರಿ ಗುಡುಗು ಸಹಿತ ಮಳೆ ಮುನ್ಸೂಚನೆ
Aug 06, 2024 07:28 AM IST
ಬೆಂಗಳೂರಿನಲ್ಲಿ ಮಂಗಳವಾರವೂ ಮಳೆಯಾಗಬಹುದು. ಗುಡುಗು ಕೂಡ ಇರಲಿದೆ ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.
- Karnataka Weather Update ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಬೆಂಗಳೂರಿನ ಕೆಲವು ಭಾಗಗಳಲ್ಲಿ( Bangalore Rains) ಸೋಮವಾರ ರಾತ್ರಿ ಸುರಿದ ಭಾರೀ ಮಳೆ ಮಂಗಳವಾರವೂ ಮುಂದುವರಿಯಲಿದೆ. ಮಧ್ಯಾಹ್ನದ ನಂತರ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಬಹುದು. ಅದೇ ರೀತಿ ಕರ್ನಾಟಕದ (Karnataka Rains ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯಿದೆ. ಬಳ್ಳಾರಿ, ಚಿತ್ರದುರ್ಗ, ರಾಯಚೂರು, ತುಮಕೂರು, ಕೊಪ್ಪಳ ಸಹಿತ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಗುಡುಗು ಸಹಿತ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆಯನ್ನು ನೀಡಿದೆ. ಇದಲ್ಲದೇ ಕರಾವಳಿ ಭಾಗದಲ್ಲಿ ಮಳೆ ತಗ್ಗಿದ್ದರೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀಯಿಂದ ಅತೀಯಾದ ಮಳೆಯಾಗುವ ಸೂಚನೆಯಿದೆ. ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಮಳೆಯಾಗಲಿದೆ
ಕರ್ನಾಟಕದ ಕರಾವಳಿ ಭಾಗದಲ್ಲಿ ನಿರಂತರವಾಗಿ ಸುರಿದ ಮಳೆ ಪ್ರಮಾಣ ಕೊಂಚ ಕಡಿಮೆಯಾಗಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತಗ್ಗಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತಿದೆ. ಮಂಗಳವಾರವೂ ಈ ಎರಡೂ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಭಾರೀ ಮಾಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಕಾರಣದಿಂದ ಮಂಗಳವಾರದಿಂದ ಬುಧವಾರ ಬೆಳಗಿನವರೆಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ, ಮಲೆನಾಡು ಪ್ರದೇಶದ ಎಲ್ಲೆಡೆ ಮಳೆಯಾಗಬಹುದು ಎನ್ನುವ ಮುನ್ಸೂಚನೆಯಿದೆ.
ಗುಡುಗು ಸಹಿತ ಮಳೆ
ಉತ್ತರ ಕರ್ನಾಟಕ ಭಾಗದಲ್ಲಿ ತಗ್ಗಿದ್ದ ಮಳೆ ಮಂಗಳವಾರ ಮತ್ತೆ ಗುಡುಗು ಸಹಿತ ಸುರಿಯುವ ಸಾಧ್ಯತೆಯಿದೆ. ರಾಯಚೂರು, ಬಳ್ಳಾರಿ, ಕೊಪ್ಪಳ ಮಾತ್ರವಲ್ಲದೇ ತುಮಕೂರು, ಕೋಲಾರ, ಚಿತ್ರದುರ್ಗ ಜಿಲ್ಲೆಗಳ ಕೆಲವೆಡೆ ಹಗುರದಿಮದ ಸಾಧಾರಣ ಮಳೆಯಾಗಬಹುದು. ಆದರೆ ಗುಡುಗು ಕೂಡ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಹೇಳಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೂ ಆಗಬಹುದು ಎಂದು ತಿಳಿಸಲಾಗಿದೆ.
ಬೆಂಗಳೂರಲ್ಲೂ ಮಳೆ
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಮಳೆ ಪ್ರಮಾಣ ತಗ್ಗಿತ್ತು. ಸೋಮವಾರ ಮಧ್ಯಾಹ್ನ ನಿಧಾನವಾಗಿ ಆರಂಭಗೊಂಡ ಮಳೆ ರಾತ್ರಿ ಹೊತ್ತಿಗೆ ಜೋರಾಗಿತ್ತು. ಇದರಿಂದಾಗಿ ಬೆಂಗಳೂರಿನ ಹಲವು ಕಡೆ ಮಳೆ ನೀರು ರಸ್ತೆಗಳಲ್ಲಿ ಹರಿದು ಸಂಚಾರಕ್ಕೆ ಅಡಚಣೆಯಾಗಿತ್ತು. ಮಂಗಳವಾರವೂ ಬೆಂಗಳೂರು ಮಾತ್ರವಲ್ಲದೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಇರುವುದರಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಲಾಗಿದೆ. ಬೆಂಗಳೂರಿನಲ್ಲಿ ತಾಪಮಾನವೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು.
ಉತ್ತಮ ಮಳೆ
ಸೋಮವಾರವೂ ಕರಾವಳಿಯ ಹಲವು ಭಾಗಗಳಲ್ಲಿ ಭಾರೀ ಮಳೆಯೇ ಆಗಿದೆ. ಉತ್ತರ ಕನ್ನಡದ ಮಂಕಿಯಲ್ಲಿ ಅತ್ಯಧಿಕ 13 ಸೆ.ಮೀ, ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 8 ಸೆ.ಮೀ, ಉತ್ತರ ಕನ್ನಡದ ಹೊನ್ನಾವರ, ಗೇರುಸೊಪ್ಪ, ಶಿರಾಲಿ, ಕದ್ರಾದಲ್ಲೂ ಉತ್ತಮ ಮಳೆಯಾಗಿದೆ. ಶಿವಮೊಗ್ಗದ ಆಗುಂಬೆ, ಲಿಂಗನಮಕ್ಕಿ,ಬೆಳಗಾವಿಯ ಲೋಂಡಾ, ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕಾರ್ಕಳ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಜಯಪುರ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಾವೇರಿ ನಗರ, ಬೆಳಗಾವಿ, ವಿಜಯಪುರ ಜಿಲ್ಲೆಯ ನಾಲತವಾಡ ಭಾಗದಲ್ಲೂ ಮಳೆಯಾದ ವರದಿಯಾಗಿದೆ.
ಕೊಡಗಲ್ಲಿ ಹೇಗಿದೆ?
ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 4.23 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.93 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2298.82 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1197.17 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.95 ಮಿ.ಮೀ. ಕಳೆದ ವರ್ಷ ಇದೇ ದಿನ 10.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3194.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2023.41 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2114.70 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 922.36 ಮಿ.ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2186.05 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 956.07 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2611.36 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1308.89 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 2.70 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 3.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1388 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 775.15 ಮಿ.ಮೀ. ಮಳೆಯಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಷ್ಣಾಂಶದಲ್ಲಿ ಏರಿಕೆ
ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ಬಹುತೇಕ ಕಡೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆ ಕಂಡಿದೆ.ರಾಯಚೂರು, ಕೊಪ್ಪಳಮ ಕಲಬುರಗಿ, ಬಾಗಲಕೋಟೆ, ಚಾಮರಾಜನಗರ, ಹಾಸನ, ಚಿಂತಾಮಣಿ, ಮಂಡ್ಯ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು 30 ಡಿಗ್ರಿ ಸೆಲ್ಸಿಯಸ್ ದಾಟಿದೆ. ಬೆಳಗಾವಿ ಹಾಗೂ ಹಾವೇರಿಯಲ್ಲಿ ಕನಿಷ್ಠ ಉಷ್ಣಾಂಶ ಕಂಡು ಬಂದಿದೆ.