ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅವ್ಯವಹಾರ; ಮಾಜಿ ಸಚಿವ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು
Oct 14, 2024 06:59 PM IST
ಮಾಜಿ ಸಚಿವ ನಾಗೇಂದ್ರ
- Valmiki scam: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರಗೆ 82 ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. (ವರದಿ-ಎಚ್. ಮಾರುತಿ)
ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾಜಿ ಸಚಿವ ಬಿ ನಾಗೇಂದ್ರಗೆ 82 ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಈ ಆದೇಶ ಹೊರಡಿಸಿದ್ದಾರೆ.
ಜುಲೈ 12ರಂದು ಬಿ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ.ಅಭಿವೃದ್ದಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬ ಸುದ್ದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು. ಆರಂಭದಲ್ಲಿ ಸರ್ಕಾರ ಹಗರಣ ನಡೆದೇ ಇಲ್ಲ ಎಂದು ವಾದಿಸಿತ್ತು. ಒಂದೊಂದಾಗಿ ಈ ನಿಗಮದ ಅವ್ಯವಹಾರದ ದಾಖಲೆಗಳು ಹೊರ ಬರುತ್ತಿದ್ದಂತೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಮೇ 26ರಂದು ನಿಗಮದ ಅಧಿಕಾರಿ ಪಿ.ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಈ ಹಗರಣ ಬೆಳಕಿಗೆ ಬಂದಿತ್ತು.
ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳವನ್ನು ರಚಿಸಿತ್ತು. ಎಸ್ಐಟಿ ಇದುವರೆಗೂ 11 ಅಧಿಕಾರಿಗಳನ್ನು ಬಂದಿಸಿದೆ. ಮತ್ತೊಂದು ಕಡೆ ಇಡಿ ತನಿಖೆಯೂ ನಡೆದಿದೆ. ತನಿಖೆ ಮುಂದುವರೆದಂತೆಲ್ಲಾ ಆಡಳಿತ ಪಕ್ಷದ ಶಾಸಕರ ಕೈವಾಡ ಇರುವುದು ಸ್ಪಷ್ಟವಾಗುತ್ತಾ ಬಂದಿತ್ತು. ದಲಿತ ಸಮುದಾಯಗಳಿಗೆ ಮೀಸಲಾದ 187 ಕೋಟಿ ರೂ. ಹಣ ಗುಳುಂ ಆಗಿದ್ದು ಸಚಿವರು ರಾಜೀನಾಮೆ ನೀಡಲೇಬೇಕೆಂದು ಆರಂಭದಿಂದಲೂ ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿಯೇ ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಬೆಳವಣಿಗೆಯೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.