ಕರ್ನಾಟಕದಲ್ಲಿ ಇಂಗ್ಲೀಷ್ ಮಾಧ್ಯಮ ಹೇರಲೇಬೇಡಿ, ಇಂತಹ ಶಾಲೆಗಳನ್ನೂ ತೆರೆಯಬೇಡಿ: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ ಆಗ್ರಹ, ಹಕ್ಕೊತ್ತಾಯಗಳೇನು
Dec 20, 2024 05:46 PM IST
ಮಂಡ್ಯದಲ್ಲಿ ಆರಂಭಗೊಂಡ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುತ್ರ ಮುಕ್ತ ಕಾಗಿಲೆಯೊಂದಿಗೆ ಸಮ್ಮೇಳನಾಧ್ಯಕ್ಷ ಗೊ,ರು.ಚನ್ನಬಸಪ್ಪ
- Mandya Sahitya Sammelana: ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಮುಖ ಹಕ್ಕೊತ್ತಾಯಗಳನ್ನು ಸಮ್ಮೇಳನಾಧ್ಯಕ್ಷ ಗೊರುಚ ಮಂಡಿಸಿದರು.
ಮಂಡ್ಯ: ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಶಿಕ್ಷಣವೇ ಇರಬೇಕು. ಇಂಗ್ಲೀಷ್ ಸಹಿತ ಬೇರಾವ ಭಾಷೆಯ ಶಿಕ್ಷಣ ಮಾಧ್ಯಮವಾಗಿ ಕರ್ನಾಟಕದಲ್ಲಿ ಹೇರಕೂಡದು. ಹಾಗೆಂದು ಇಂಗ್ಲೀಷ್ ಭಾಷೆಯ ಪ್ರತ್ಯೇಕ ಕಲಿಕೆಗೆ ಪ್ರಬಲವಾದ ವ್ಯವಸ್ಥೆ ಜಾರಿಯಾಗಬೇಕು. ಇಂಗ್ಲೀಷ್ ಶಿಕ್ಷಕರನ್ನು ಪ್ರತೀ ಶಾಲೆಗಳಿಗೂ ನೇಮಿಸಬೇಕು. ಪ್ರಾಥಮಿಕ ಒಂದನೆಯ ತರಗತಿಯಿಂದ ಹತ್ತನೇ ತರಗತಿವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಕೂಡದು. ಇಂಗ್ಲೀಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎನ್ನುವ ಹಕ್ಕೊತ್ತಾಯ ಮಂಡ್ಯದಲ್ಲಿ ಶುಕ್ರವಾರ ಆರಂಭಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೇಳಿ ಬಂದಿತು. ಸಮ್ಮೇಳನಾಧ್ಯಕ್ಷರಾಗಿರುವ ವಿದ್ವಾಂಸ ಗೊರು ಚನ್ನಬಸಪ್ಪ ಅವರು ಕನ್ನಡ ಭಾಷಾ ಮಾಧ್ಯಮ, ಕನ್ನಡಿಗರಿಗೆ ಉದ್ಯೋಗ ಸೇರಿದಂತೆ 21 ಹಕ್ಕೊತ್ತಾಯಗಳನ್ನು ಮಂಡಿಸಿದರು.
ಗೊರುಚ ಹಕ್ಕೊತ್ತಾಯಗಳೇನು
- ಪ್ರಾಥಮಿಕ ಒಂದನೆಯ ತರಗತಿಯಿಂದ ಹತ್ತನೇ ತರಗತಿವರೆಗೆ ಬೋಧನೆಯಲ್ಲಿ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣದಿಂದಲೂ ಬೇರಾವ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಕೂಡದು. ಇಂಗ್ಲೀಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನು ತಕ್ಷಣವೇ ನಿಲ್ಲಿಸಬೇಕು.
- ಅಗತ್ಯವೆನಿಸಿರುವ ಇಂಗ್ಲೀಷ್ ಕಲಿಕೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿ ಬೋಧನೆಗೆ ತರಬೇತಿ ಪಡೆದ ಶಿಕ್ಷಕರನ್ನು ನೇಮಿಸಬೇಕು. ಗ್ರಾಮೀಣ ಭಾಗದ ಕನ್ನಡ ಶಾಲೆಗಳನ್ನು ಎಲ್ಲಾ ಸೌಲಭ್ಯಗಳಿಂದ ಪೂರ್ಣವಾಗಿ ಸಜ್ಜುಗೊಳಿಸಬೇಕು. ರಾಜ್ಯದ ಆಯವ್ಯಯದಲ್ಲಿ ಕನಿಷ್ಟ ಶೇ. 15ರಷ್ಟನ್ನಾದರೂ ಶಿಕ್ಷಣಕ್ಕೆ ಮೀಸಲಿರಬೇಕು.
- ಕಳೆದ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಶಾಸನಬದ್ದಗೊಳಿಸಿ ಅನುಷ್ಠಾನಗೊಳಿಸಬೇಕು. ಅನುಷ್ಠಾನದ ಮೇಲ್ವಿಚಾರಣೆಯ ಹೊಣೆಗಾರಿಕೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರಕ್ಕೆ ವಹಿಸಬೇಕು. ಸಾರ್ವಜನಿಕವಿರಲಿ, ಖಾಸಗಿಯಿರಲಿ ಉದ್ಯೋಗಾವಕಾಶಗಳಲ್ಲಿ ವಿಶೇಷ ಅರ್ಹತೆಯ ಉನ್ನತ ಹುದ್ದೆಗಳ ಹೊರತಾಗಿ ಸಿ ಮತ್ತು ಡಿ ವರ್ಗದ ಹುದ್ದೆಗಳನ್ನು ಪೂರ್ಣವಾಗಿ ಕನ್ನಡಿಗರಿಗೇ ಮೀಸಲಿಡಬೇಕು. ಕಾಲಕಾಲಕ್ಕೆ ಉದ್ಯೋಗ ಮಾಹಿತಿ ದೊರೆಯುವಂತಾಗಬೇಕು.
ಇದನ್ನೂ ಓದಿರಿ: ಕನ್ನಡ ಸಾಹಿತ್ಯ ಸಮ್ಮೇಳನ; ಸಕ್ಕರೆ ನಾಡಲ್ಲಿ ಅಕ್ಷರ ಜಾತ್ರೆಯ ಅಕ್ಕರೆ, ಸಮ್ಮೇಳನ ಸರ್ವಾಧ್ಯಕ್ಷರ ಮೆರವಣಿಗೆಯ ನೇರ ಪ್ರಸಾರದ ವಿಡಿಯೋ ಲಿಂಕ್ - ನಾಡಿನ ವಿಶೇಷ ವ್ಯವಸ್ಥೆಗಳಾದ ಕನ್ನಡ ವಿಶ್ವವಿದ್ಯಾನಿಲಯ ಮತ್ತು ಜಾನಪದ ವಿಶ್ವವಿದ್ಯಾಲಯಗಳು ಅನುಭವಿಸುತ್ತಿರುವ ಹಣಕಾಸು ಮತ್ತು ಬೋಧನಾ ಸಿಬ್ಬಂದಿ ಕೊರತೆಯನ್ನು ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು
- ಕನ್ನಡ ಶಾಸ್ತ್ರೀಯ ಭಾಷಾ ಕೇಂದ್ರವನ್ನು ಸ್ವತಂತ್ರ ಸ್ವಾಯತ್ತ ಕೇಂದ್ರವನ್ನಾಗಿ ಬೆಳೆಸಲು ಮತ್ತು ಕೇಂದ್ರದ ನೆರವನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಬೇಕು
- ಅಪಾರ ಸಂಭಾವ್ಯ ಸಾಮರ್ಥ್ಯವಿರುವ ಪ್ರವಾಸೊದ್ಯಮವನ್ನು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ದೃಷ್ಟಿಯಿಂದಲೇ ಅಲ್ಲದೇ ಆದಾಯ ಮತ್ತು ಉದ್ಯೊಗಾವಕಾಶ ದೃಷ್ಟಿಯಿಂದಲೂ ಅದನ್ನು ವಿಸ್ತರಣೆಯ ವಲಯವನ್ನಾಗಿ ಅಭಿವೃದ್ದಿಪಡಿಸಬೇಕು
ಇದನ್ನೂ ಓದಿರಿ: Mandya Sahitya Sammelana: ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭಕ್ಕೂ ಮುನ್ನವೇ ಎದುರಾದ 5 ವಿವಾದಗಳು - ಕೈಗಾರಿಕೋದ್ಯಮಿಗಳ ಸ್ಥಾಪನೆ ಎಲ್ಲಾ ಜಿಲ್ಲೆಗಳಿಗೂ ಹಂಚಿಕೆಯಾಗಬೇಕು. ಯಾವುದೇ ಉದ್ಯಮವಿರಲಿ, ಅಲ್ಲಿ ಕನ್ನಡಗಿರಿಗೆ ಉದ್ಯೊಗಾವಕಾಶದ ಕಟ್ಟುನಿಟ್ಟಿನ ಷರತ್ತು ವಿಧಿಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು
- ಸರ್ಕಾರದ ಸಚಿವಾಲಯ ಕಛೇರಿಗಳ ಹೊರತಾಗಿ ಉಳಿದ ನಿರ್ದೇಶನಾಲಯ ಕಛೇರಿಗಳನ್ನು ಬೇರೆ ಬೇರೆ ಜಿಲ್ಲಾ ಕೇಂದ್ರಗಳಿಗೆ ವರ್ಗಾಯಿಸಿ ಬೆಂಗಳೂರಿನ ಒತ್ತಡ ತಗ್ಗಿಸಬೇಕು.
- ಶಿಕ್ಷಣ ಮಾಧ್ಯಮ ಅಂತಾರಾಜ್ಯ ಗಡಿ, ಜಲ, ಮತ್ತು ವಲಸೆ ಸಮಸ್ಯೆಗಳನ್ನು ಪರಿಹರಿಸಲು ಒಂದು ರಾಷ್ಟ್ರೀಯ ನೀತಿಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು
- ಪ್ರಾದೇಶಿಕ ಅಸಮಾನತೆಯನ್ನು ಸರಿಪಡಿಸುವ ದಿಸೆಯಲ್ಲಿ ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಿಂದುಳಿದ ಪ್ರದೇಶಗಳ ಅಭಿವೃದ್ದಿಗೆ ಕಾಲಬದ್ದ ಕ್ರಮ ವಹಿಸಬೇಕು
- ಬಸವಣ್ಣನವರನ್ನು ರಾಜ್ಯದ ಸಾಂಸ್ಕತಿಕ ನಾಯಕ ಎಂದು ಘೋಷಿಸಿರುವ ಮತ್ತು ಬಸವ ಕಲ್ಯಾಣದಲ್ಲಿ ನೂತನ ಅನುಭವ ಮಂಟಪವನ್ನು ನಿರ್ಮಿಸುತ್ತಿರುವ ರಾಜ್ಯ ಸರ್ಕಾರ ಹನ್ನೆರಡನೆಯ ಶತಮಾನದ ಶರಣರ ಕೇತ್ರಗಳ ಸಂರಕ್ಷಣೆ ಮತ್ತು ಅಭಿವೃದ್ದಿ ಕಾರ್ಯಕ್ಕಾಗಿ ಒಂದು ಸ್ವಾಯತ್ತ ಪ್ರಾಧಿಕಾರ ರಚಿಸಬೇಕು. ಈಗಾಗಲೇ ಆಶ್ವಾಸನೆ ನೀಡಿರುವಂತೆ ಮುಂದಿನ ಶೈಕ್ಷಣಿಕ ವರ್ಷದಿಂದ ವಚನ ವಿಶ್ವವಿದ್ಯಾನಿಲಯ ಆರಂಭಿಸಬೇಕು
- ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕೈಗಾರಿಕೆಗಳು, ಕಛೇರಿಗಳು, ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಕನ್ನಡದಲ್ಲಿರುವುದು ಕಡ್ಡಾಯವಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು
- ಪರಿಸರದ ವಿಷಯವಾಗಿ ಪಶ್ಚಿಮ ಘಟ್ಟಗಳ ರಕ್ಷಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಲ್ಲಿ ಗಣಿಗಾರಿಕೆ ನಿಷೇಧಿಸಬೇಕು
ಇದನ್ನೂ ಓದಿರಿ: ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 3 ದಿನದ ನಿಮ್ಮ ಚಟುವಟಿಕೆ ಹೀಗಿರಲಿ; ಗೋಷ್ಠಿ, ಸಂವಾದ, ಪುಸ್ತಕ ಖರೀದಿ, ಪ್ರವಾಸ - ಜ್ಞಾನ ಪ್ರಸಾರದ ಕೇಂದ್ರದಂತಿರುವ ಗ್ರಂಥಾಲಯ ಪೋಷಣೆತ ಬಗೆಗೆ ಪೂರ್ಣ ಗಮನ ಕೊಡಬೇಕು. ಗ್ರಂಥಗಳ ಸಗಟು ಕೊಳ್ಳಿಕೆ ಪ್ರತಿ ವರ್ಷ ತಪ್ಪದೇ ನಡೆಯಬೇಕು. ಗ್ರಂಥಾಲಯ ತೆರಿಗೆಯಿಂದ ಸಂಗ್ರಹವಾದ ಹಣವನ್ನು ಗ್ರಂಥಾಲಯ ಅಭಿವೃದ್ದಿಗೆ ಬಳಸಬೇಕು.
- ಹಿರಿಯ ಸಾಹಿತಿಗಳ ಸಮಗ್ರ ಸಾಹಿತ್ಯ ಪ್ರಕಟಣೆ ಒಂದು ಒಳ್ಳೆತ ಯೋಜನೆಯಾಗಿದ್ದು, ಅದನ್ನು ಮುಂದುವರಿಸಿಕೊಂಡು ಹೋಗಬೇಕು
- ಆಡಳಿತದಲ್ಲಿ ಕನ್ನಡ ಬಳಕೆಯ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಖ್ಯವಾಗಿ ಕನ್ನಡ ಲಿಪಿಯನ್ನು ಆಧುನಿಕ ತಂತ್ರ ವಿಧಾನಗಳಿಗೆ ಹೊಂದಿಸುವ ಕೆಲಸ ತ್ವರಿತವಾಗಿ ನಡೆಯಬೇಕು. ಯಾಂತ್ರಿಕ ಬುದ್ದಿಮತ್ತೆ ತಂತ್ರದ ಬಳಕೆ ಹೆಚ್ಚಬೇಕು
- ಸಾಹಿತ್ಯ ಮತ್ತು ಸಂಸ್ಕೃತಿ ಸಂಬಂಧದ ಸಂಘ ಸಂಸ್ಥೆಗೂಗೆ ಉದಾರ ಧನ ಸಹಾಯ ದೊರಕಿಸಬೇಕು.
- ಯಾವುದೇ ಕಾರಣಕ್ಕೆ ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ ಹೇರಿಕೆಗೆ ಅವಕಾಶ ಕೊಡಬಾರದು
- ಕನ್ನಡ ಕೃತಿಗಳನ್ನು ಅನ್ಯಭಾಷೆಗೆ ಅನುವಾದಿಸಿ ಪ್ರಕಟಿಸುವ ಕೆಲಸ ದೊಡ್ಡ ಪ್ರಮಾಣದಲ್ಲಿ ನಡೆಯಬೇಕು. ಇದಕ್ಕಾಗಿ ಭಾಷಾ ಪ್ರಾಧಿಕಾರಕ್ಕೆ ಅಗತ್ಯ ನೆರವು ಒದಗಿಸಬೇಕು.
- ಕನ್ನಡ ಸಾಹಿತ್ಯ ಪರಿಷತ್ತು ಒಂದು ಪ್ರಾತಿನಿಧಿಕ ಸಂಸ್ಥೆಯಾಗಿದ್ದುಮ ಅದು ನಡೆಸುವ ಇಂತಹ ಸಮ್ಮೇಳನಗಳಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಸಿ ವಿಳಂಬ ಮಾಡದೇ ಅದನ್ನು ಅನುಷ್ಠಾನಗೊಳಿಸಬೇಕು
- ಕನ್ನಡ ಸಾಹಿತ್ಯ ಪರಿಷತ್ತು ಶಾಲಾ ಶಿಕ್ಷಕರಿಗೆ ಸಾಹಿತ್ಯ ಸಂಸ್ಕೃತಿಗಳ ಬಗೆಗೆ ನಿಯತಕಾಲಿಕ ಶಿಬಿರಗಳನ್ನು ನಡೆಸಿ ಅವರಲ್ಲಿ ಸಾಹಿತ್ಯದ ಅಧ್ಯಯನಾಸಕ್ತಿ ಬೆಳೆಸಬೇಕು.