logo
ಕನ್ನಡ ಸುದ್ದಿ  /  ಕರ್ನಾಟಕ  /  ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 6 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ವಶ, ನೈಜಿರಿಯಾ ಪ್ರಜೆ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 6 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ವಶ, ನೈಜಿರಿಯಾ ಪ್ರಜೆ ಅರೆಸ್ಟ್

Priyanka Gowda HT Kannada

Oct 08, 2024 10:31 AM IST

google News

ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.

    • ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ನೈಜೀರಿಯಾ ದೇಶದ ಪ್ರಜೆ ಪೂರೈಕೆ ಮಾಡುತ್ತಿದ್ದ. ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಬಂಧಿತನಿಂದ 6 ಕೋಟಿ ರೂಪಾಯಿ ಮೌಲ್ಯದ 6.300 ಕೆಜಿ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. (ವರದಿ: ಹರೀಶ ಮಾಂಬಾಡಿ, ಮಂಗಳೂರು)
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಲಾಗಿದೆ.

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಭಾರಿ ಕಾರ್ಯಾಚರಣೆಯಲ್ಲಿ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ನೈಜೀರಿಯಾ ದೇಶದ ಪ್ರಜೆ ಪೂರೈಕೆ ಮಾಡುತ್ತಿದ್ದ. ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದ ಬಂಧಿತನಿಂದ 6 ಕೋಟಿ ರೂಪಾಯಿ ಮೌಲ್ಯದ 6.300 ಕೆಜಿ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. ನೈಜಿರಿಯಾ ಪ್ರಜೆ ಪೀಟರ್ ಇಕೆಡಿ ಬೆಲೆನ್ವೊ ಬಂಧಿತ ಆರೋಪಿ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ಪ್ರಕರಣದ ವಿವರ ಹೀಗಿದೆ

ಇತ್ತೀಚೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್‌ವೊಂದರಲ್ಲಿ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಹೈದರ್ ಯಾನೆ ಹೈದರ್ ಆಲಿ(51) ಎಂಬಾತನನ್ನು ಬಂಧಿಸಲಾಗಿತ್ತು. ಆತನಿಂದ 75,000 ರೂ. ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.

ಈ ಪ್ರಕರಣದಲ್ಲಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್‌ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದರು. ತನಿಖೆಯನ್ನು ಕೈಗೊಂಡ ಸಮಯದಲ್ಲಿ ಆರೋಪಿ ಹೈದರ್ ಯಾನೆ ಹೈದರ್ ಆಲಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್‌ಗಳ ಮಾಹಿತಿ ಸಂಗ್ರಹಿಸಲಾಯಿತು. ತಾಂತ್ರಿಕ ಸಹಾಯದಿಂದ ಹಾಗೂ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡ ಪೊಲೀಸರು, ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿರುವ ಆರೋಪಿಯು ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ಪ್ರಜೆ ಎಂದು ತಿಳಿದುಬಂದಿದೆ. ಈತ ಬೆಂಗಳೂರು ನಗರದ ದೊಮ್ಮಸಂದ್ರ ಗ್ರಾಮ ಸ್ವಾಮಿ ವಿವೇಕಾನಂದ ನಗರದ ಸಾಯಿಮಿಡೋ ಪೇಸ್ -2 ಗೋವಿಂದ ರೆಡ್ಡಿ ಲೇ ಔಟ್‍ನ ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೂಡಿದ್ದ. ಖಚಿತ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು, ದಾಳಿ ನಡೆಸಿ ಮಾದಕ ವಸ್ತುಗಳನ್ನು ಹೊಂದಿದ್ದ ನೈಜಿರಿಯಾ ದೇಶದ ಪ್ರಜೆಯನ್ನು ಬಂಧಿಸಿದ್ದಾರೆ.

ಆರೋಪಿ ಪೀಟರ್ ಇಕೆಡಿ ಬೆಲೆನ್ವೊ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್‌ಗಳು, 17 ಇನ್ ಆಕ್ಟಿವ್ ಸಿಮ್ ಕಾರ್ಡ್‌ಗಳು, 10 ವಿವಿಧ ಬ್ಯಾಂಕ್‌ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 6,00,63,500 ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿದೇಶಿ ಪ್ರಜೆ, ಆರೋಪಿ ಪೀಟರ್ ಅಕೆಡಿ ವಿರುದ್ಧ ಈ ಹಿಂದೆ ಅಂದರೆ 2023ರಲ್ಲಿ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿತ್ತು. ಆರೋಪಿಯು ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಕಡೆಗಳಿಗೆ ಹಾಗೂ ಕೇರಳ ರಾಜ್ಯಕ್ಕೆ ಕೂಡಾ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು ಎಂದು ನಗರ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ