ಮುಡಾ ಪ್ರಕರಣ; ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಲು ಹೈಕೋರ್ಟ್ ಆದೇಶ
Dec 10, 2024 11:16 PM IST
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ.
ಮುಡಾ ಪ್ರಕರಣದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಬಾಮೈದ ಮಲ್ಲಿಕಾರ್ಜುನ ಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಇದರ ವಿವರ ವರದಿ ಇಲ್ಲಿದೆ. (ವರದಿ ಎಚ್.ಮಾರುತಿ, ಬೆಂಗಳೂರು)
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ ಮತ್ತು ಬಾವ ಮೈದುನ ಮಲ್ಲಿಕಾರ್ಜುನ ಸ್ವಾಮಿಗೆ ಹ್ಯಾಂಡ್ ಸಮನ್ಸ್ ನೀಡಲು ಅರ್ಜಿದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮುಡಾ ಕೇಸ್; ಕರ್ನಾಟಕ ಹೈಕೋರ್ಟ್‌ನಲ್ಲಿ ಏನು ನಡೆಯಿತು
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸಿದ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಈ ಕುರಿತಂತೆ ಆದೇಶ ನೀಡಿದರು. ನ್ಯಾಯಪೀಠದ ಈ ಹಿಂದಿನ ಸೂಚನೆಯಂತೆ ಪ್ರಕರಣ ಕುರಿತು ಡಿಸೆಂಬರ್ 9 ರವರೆಗೆ ನಡೆಸಿರುವ ತನೀಖೆಯ ವಸ್ತುಸ್ಥಿತಿ ವರದಿಯನ್ನು ಪೊಲೀಸರು ನ್ಯಾಯಪೀಠಕ್ಕೆ ಸಲ್ಲಿಸಿದರು. ಜತೆಗೆ ಪ್ರಕರಣದ ಕೇಸ್ ಡೈರಿ ಮತ್ತು ಸಾಕ್ಷಿಗಳ ಹೇಳಿಕೆ ಒಳಗೊಂಡ ಮತ್ತೊಂದು ವರದಿಯನ್ನೂ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.
ಅರ್ಜಿಯಲ್ಲಿ ಜಾರಿ ನಿರ್ದೇಶನಾಲಯವನ್ನೂ (ಇ.ಡಿ) ಪ್ರತಿವಾದಿಯಾಗಿಸಬೇಕು ಎಂದು ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಒಂದು ವಾರದ ಕಾಲಾವಕಾಶ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ ತಿಂಗಳ 19ಕ್ಕೆ ಮುಂದೂಡಿತು.
ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಪ್ರತಿವಾದ
ಇದಕ್ಕೂ ಮುನ್ನ ಮುಡಾ ಪ್ರಕರಣ ಕುರಿತು ಪೊಲೀಸ್ ತನಿಖೆಗೆ ಅನುಮತಿಸಿದ ಆದೇಶ ಮತ್ತು ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ನಮಗೆ ನೋಟಿಸ್ ಜಾರಿ ಮಾಡಿರುವ ಏಕಸದಸ್ಯ ನಾಗಪ್ರಸನ್ನ ಅವರಿದ್ದ ನ್ಯಾಯಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದೆ. ಈ ಮೇಲ್ಮನವಿ ಕುರಿತು ಪ್ರತಿವಾದಿಗಳಿಗೆ ವಿಭಾಗೀಯ ಪೀಠ ನೋಟಿಸ್ ಜಾರಿ ಮಾಡಲು ಆದೇಶ ನೀಡಿದೆ. ಮೇಲ್ಮನವಿ ವಿಚಾರಣೆಗೆ ದಿನಾಂಕವನ್ನೂ ನಿಗದಿಪಡಿಸಲಾಗಿದೆ. ಹಾಗಾಗಿ, ಈ ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿ ಪ್ರಕರಣದ ವಿವಾದಿತ 3.14 ಎಕರೆ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ಪರ ಸುಪ್ರೀಂಕೋರ್ಟ್ ಹಿರಿಯ ವಕೀಲ ದುಷ್ಯಂತ್ ದವೆ ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಮತ್ತು ಹಿರಿಯ ವಕೀಲ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ಜಾರಿಗೊಳಿಸಿರುವ ನೋಟಿಸ್ ಪ್ರತಿವಾದಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಬಾವಮೈದುನ ಮಲ್ಲಿಕಾರ್ಜುನ ಅವರಿಗೆ ಇದುವರೆಗೂ ತಲುಪಿಲ್ಲ. ನೋಟಿಸ್ ಜಾರಿಯಾಗಿ, ಅವರ ಪರ ವಕೀಲರು ವಿಚಾರಣೆಗೆ ಹಾಜರಾಗದೇ ಇರುವಾಗ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಲು ಕೋರಿರುವ ಈ ಅರ್ಜಿಯ ವಿಚಾರಣೆಯನ್ನು ಮುಂದುವರಿಸಬಾರದು ಎಂದು ಕೋರಿದರು.
ಮಧ್ಯಂತರ ಮನವಿ ಸಲ್ಲಿಕೆ
ಜಾರಿ ನಿರ್ದೇಶನಾಲಯವನ್ನೂ (ಇ.ಡಿ) ಪ್ರತಿವಾದಿಯಾಗಿಸಲು ಕೋರಿ ಅರ್ಜಿದಾರರು ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಆಕ್ಷೇಪಣೆ ಸಲ್ಲಿಸಬೇಕಿದೆ. ವಿಭಾಗೀಯ ನ್ಯಾಯಪೀಠದಲ್ಲಿ ಮೇಲ್ಮನವಿ ವಿಚಾರಣೆಗೆ ಬಾಕಿ ಇರುವುದರಿಂದ ಈ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿ ಕೊಂಡರು.
ಈ ಅರ್ಜಿ ಇತ್ಯರ್ಥವಾಗುವತನಕ ಲೋಕಾಯುಕ್ತ ಪೊಲೀಸರು ತನಿಖೆಯ ಅಂತಿಮ ವರದಿ ಸಲ್ಲಿಸುವುದಕ್ಕೆ ನಿರ್ಬಂಧ ವಿಧಿಸಿ ಆದೇಶಿಸಬೇಕು ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ಮನವಿ ಮಾಡಿದರು. ಈ ಮನವಿಗೆ ಕಪಿಲ್ ಸಿಬಲ್ ಮತ್ತು ದುಷ್ಯಂತ್ ದವೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ವಿರುದ್ಧ ಅರ್ಜಿದಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳನ್ನು ಕುರಿತ ವರದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗಿವೆ. ಇದು ನ್ಯಾಯಾಲಯದಲ್ಲಿರುವ ವಿಚಾರಣೆಯ ಮೇಲೆ ಗಂಭೀರ ಪರಿಣಾಮವನ್ನುಂಟು ಮಾಡುತ್ತದೆ.
ಅರ್ಜಿದಾರರ ಈ ನಡವಳಿಕೆಯನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಬೇಕು ಎಂದು ಕಪಿಲ್ ಸಿಬಲ್ ಇದೇ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ನ್ಯಾಯಪೀಠವು ಇದೆಲ್ಲಾ ಏನು? ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿರುವ ಹಂತದಲ್ಲಿ ಹೀಗೆ ಮಾಡುವುದು ಎಷ್ಟು ಸರಿ ಎಂದು ರಾಘವನ್ ಅವರನ್ನು ನ್ಯಾಯಮೂರ್ತಿಗಳು ಪ್ರಶ್ನಿಸಿದರು. ಜತೆಗೆ ಅರ್ಜಿದಾರರು ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದೂ ತಾಕೀತು ಮಾಡಿದರು. ಇದಕ್ಕೆ ರಾಘವನ್ ಅರ್ಜಿದಾರರ ನಡೆಗೆ ನಾನು ಕ್ಷಮೆ ಕೋರುವುದಾಗಿ ತಿಳಿಸಿದರು.
(ವರದಿ ಎಚ್.ಮಾರುತಿ, ಬೆಂಗಳೂರು)