ಕನ್ನಡ ಸುದ್ದಿ  /  ಕರ್ನಾಟಕ  /  ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

ವಿ ಶ್ರೀನಿವಾಸ್ ಪ್ರಸಾದ್ ನಿಧನ; ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ಸಂದೇಶ

Umesh Kumar S HT Kannada

Apr 29, 2024 10:46 AM IST

ಮಾಜಿ ಸಚಿವ, ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ.

  • ಕರ್ನಾಟಕ ಚಾಮರಾಜನಗರದ ಸಂಸದ, ಬಿಜೆಪಿ ನಾಯಕ, ಮಾಜಿ ಸಚಿವ ವಿ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದು, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿ ಶ್ರೀನಿವಾಸ್ ಪ್ರಸಾದ್ ಅವರು ಅಲ್ಪಕಾಲದ ಅನಾರೋಗ್ಯದ ಬಳಿಕ ಇಂದು (ಏಪ್ರಿಲ್ 29) ನಸುಕಿನ 1.20ಕ್ಕೆ ನಿಧನರಾದರು.

ಮಾಜಿ ಸಚಿವ, ಚಾಮರಾಜನಗರ ಸಂಸದ  ವಿ ಶ್ರೀನಿವಾಸ್ ಪ್ರಸಾದ್ ನಿಧನ.
ಮಾಜಿ ಸಚಿವ, ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ.

ಮೈಸೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 29) ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮೈಸೂರಿಗೆ ತರಲಾಗಿದೆ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರು ಅಭಿಮಾನಿಗಳು ಶ್ರೀನಿವಾಸ್ ಪ್ರಸಾದ್ ಮನೆ ಸಮೀಪ ಸೇರಿದ್ದಾರೆ. ಈ ನಡುವೆ, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಟ್ರೆಂಡಿಂಗ್​ ಸುದ್ದಿ

Hassan Scandal: ಪ್ರಜ್ವಲ್‌ ಬೆಂಗಳೂರಿಗೆ ವಾಪಾಸ್‌ ಆಗುತ್ತಿಲ್ಲ ಯಾಕೆ, ವಿಳಂಬದ ಹಿಂದಿನ ತಂತ್ರವೇನು?

Hassan Scandal: ಬೆಂಗಳೂರಿಗೆ ಬಾರದ ಪ್ರಜ್ವಲ್‌ ರೇವಣ್ಣ, ಕಾದು ಕಾದು ಸುಸ್ತಾದ ಪೊಲೀಸರು

Bangalore News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ: ಬೆಂಗಳೂರಿನ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ ಅಧಿವೇಶನದಲ್ಲಿ ಸಲಹೆ

Bangalore News: ಪೂರ್ವ ಮುಂಗಾರು ಚುರುಕು; ಬೆಂಗಳೂರಿನಲ್ಲಿ ನೀರಿನ ಸ್ಥಿತಿ ಈಗ ಹೇಗಿದೆ?

“ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ. ಓಂ ಶಾಂತಿ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

“ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಸಂತಾಪ ಸೂಚಿಸಿದ್ದಾರೆ. 

ದಲಿತ ದಮನಿತರ ಪರ ದಿಟ್ಟ ದನಿ- ಸಿದ್ದರಾಮಯ್ಯ ಸಂತಾಪ

"ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಅಸ್ತಂಗತ- ವಿಜಯೇಂದ್ರ ಸಂತಾಪ

"ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು.

ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಓಂಶಾಂತಿ " ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ.

ಅಪಾರ ನೋವಾಗಿದೆ- ಡಿಕೆ ಶಿವಕುಮಾರ್ ಸಂತಾಪ

“ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ‌ ಶಾಂತಿ” ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ