Praveen Nettaru Murder: ಆರೋಪಿಗಳು ಕೇರಳಕ್ಕೆ ಪರಾರಿ?; 10 ಶಂಕಿತರ ವಿಚಾರಣೆ ತೀವ್ರ
Jul 27, 2022 06:30 PM IST
ಬೆಳ್ಳಾರೆಯ ಮಾಸ್ತಿಕಟ್ಟೆಯಲ್ಲಿ ಅಕ್ಷಯ ಚಿಕನ್ ಸೆಂಟರ್ ಮಾಲಕರಾಗಿರುವ ಪ್ರವೀಣ್ ನೆಟ್ಟಾರು ಅವರು ಬೆಳ್ಳಾರೆ-ಕುಂಬ್ರ ರಸ್ತೆಯ ನೆಟ್ಟಾರಿನವರು. ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ನಿನ್ನೆ ಇವರನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಅವರ ಅಂತ್ಯ ಸಂಸ್ಕಾರ ಇಂದು ಅಪರಾಹ್ನ ಸ್ವಗ್ರಾಮದಲ್ಲೆ ನೆರವೇರಿದೆ.
- ಬಿಜೆಪಿಯ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಆಡಳಿತಾರೂಢ ಬಿಜೆಪಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಹತ್ಯೆ ಮಾಡಿದ ಆರೋಪಿಗಳ ಸುಳಿವು ಇಲ್ಲ, ಕಾರಣವೂ ಬಹಿರಂಗವಾಗಿಲ್ಲದೇ ಇರುವುದೇ ಇದಕ್ಕೆ ಕಾರಣ.
ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ನಿಗೂಢವಾಗಿದ್ದು, ಹತ್ಯೆ ಮಾಡಿದವರ ಸುಳಿವಾಗಲೀ, ಯಾಕೆ ಹತ್ಯೆ ಮಾಡಿದರು ಎಂಬುದಾಗಲೀ ಇದುವರೆಗೂ ಬಹಿರಂಗವಾಗಿಲ್ಲ. ಈ ನಡುವೆ, ಹತ್ಯೆ ಮಾಡಿದ ಮೂವರು ಆರೋಪಿಗಳು ಕೂಡ ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಇದಕ್ಕೆ ಪೂರಕವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಆರೋಪಿಗಳ ಬಂಧನಕ್ಕಾಗಿ ಕರ್ನಾಟಕ ಮತ್ತು ಕೇರಳದಲ್ಲಿ ಪೊಲೀಸರು ಶೋಧ ಶುರುಮಾಡಿದ್ದಾರೆ. ಈ ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಮಗ್ರ ಮಾಹಿತಿ ನೀಡಿರುವುದು ಬಹಿರಂಗವಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾಗೆ ತೆರಳಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಮಾತುಕತೆ ನಡೆಸಿದರು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಬಾರದು. ಇದಕ್ಕೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಎಂದು ಡಿಜಿಪಿ ಪ್ರವೀಣ್ ಸೂದ್ಗೆ ಸಿಎಂ ಸೂಚನೆ ನೀಡಿದರು.
ಮಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೊಟ್ಟ ಮಾಹಿತಿ, ಕಾಸರಗೋಡು ಪೊಲೀಸರ ಸಹಕಾರ ಸೇರಿ ಕರ್ನಾಟಕ, ಕೇರಳ ಎರಡು ರಾಜ್ಯದ ಗಡಿ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಕಾರ್ಯಾಚರಣೆ ಕುರಿತು ಸಿಎಂಗೆ ವಿವರಿಸಿದರು.
10 ಶಂಕಿತರ ವಿಚಾರಣೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧಿಸಿ ಇದುವರೆಗೂ 10 ಮಂದಿ ಶಂಕಿತರನ್ನ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಸಿಎಂ ಅವರ ಜತೆಗಿನ ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವೀಣ್ ಹತ್ಯೆ ಪ್ರಕರಣದ ಕುರಿತು ಸಿಎಂ ಜತೆ ಮಾತನಾಡಿದ್ದೇವೆ. ಪ್ರವೀಣ್ ಸೂದ್ ಬೆಳವಣಿಗೆ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಸೂಚಿಸಿದ್ದೇವೆ. ಪೊಲೀಸರು ಕೇರಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದಾರೆ. ಅಗತ್ಯವಿದ್ದರೆ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಲು ಸಿದ್ದರಿದ್ದೇವೆ ಎಂದು ಹೇಳಿದರು.
ಉದ್ವಿಗ್ನತೆ ಕಾರಣ ಸೆಕ್ಷನ್ 144 ಜಾರಿ
ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಕಡಬದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರಿ ಶಾಲಾ -ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಪುತ್ತೂರಿನ ವಿವೇಕಾನಂದ, ಅಂಬಿಕಾ ಶಿಕ್ಷಣ ಸಂಸ್ಥೆಗಳು ಸೇರಿ ಇತರ ಖಾಸಗಿ ಶಾಲೆಗಳು ಸ್ವಯಂರಜೆ ಘೋಷಿಸಿದ್ದವು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳ, ಕಡಬ ಹಾಗೂ ಪುತ್ತೂರು ತಾಲುಕುಗಳಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು, ಉಡುಪಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೋಟಿ ರೂಪಾಯಿ ಪರಿಹಾರಕ್ಕೆ ಆಗ್ರಹ
ಮೃತರ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ನೀಡಬೇಕು ಎಂಬ ಮನವಿಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದಕ್ಕಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೇಳಿದ್ದು, ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದರು.
ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿತ್ತು. ಬಳಿಕ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಬೆಳ್ಳಾರೆ ಸಮೀಪದ ಸ್ವಗ್ರಾಮಕ್ಕೆ ಕೊಂಡೊಯ್ದು ಮನೆಯ ಬಳಿಯಲ್ಲಿಯೇ ಅಂತ್ಯಕ್ರಿಯೆ ನಡೆಸಲಾಯಿತು.