Raichur water contamination: ರಾಯಚೂರಲ್ಲಿ ಕಲುಷಿತ ನೀರು ಸೇವನೆ, ಬಾಲಕನ ಸಾವು ಘಟನೆ; ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
May 28, 2023 07:38 PM IST
ಕಲುಷಿತ ನೀರು ಸೇವನೆ (ಸಾಂದರ್ಭಿಕ ಚಿತ್ರ)
- Rekalmardi-Gorebala Village:ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ರಾಯಚೂರು: ಮೇ 26 ರಂದು ರಾಯಚೂರು (Raichur) ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿರುವ ಹಾಗೂ 30 ಜನ ಅಸ್ವಸ್ಥರಾಗಿರುವ ಘಟನೆ ನಡೆದಿತ್ತು. ಇದೀಗ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗೊರೆಬಾಳ ಗ್ರಾಮದಲ್ಲಿಯೂ ಕಲುಷಿತ ನೀರು (contaminated water) ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಎರಡೂ ಗ್ರಾಮಗಳ ಘಟನೆ ಸಂಬಂಧ ಸೂಕ್ತ ತನಿಖೆ ನಡೆಸಿ, ತುರ್ತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ ಸಿದ್ದರಾಮಯ್ಯ ಆದೇಶಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ದೊರೆಯುತ್ತಿದ್ದಂತೆ ದೂರವಾಣಿ ಮೂಲಕ ಸಿಇಒ ಅವರೊಂದಿಗೆ ಮಾತನಾಡಿ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿಗಳು, ಶುದ್ಧ ನೀರು ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಯಚೂರು ಜಿಲ್ಲೆಯ ಗ್ರಾಮಗಳಲ್ಲಿ ಕಲುಷಿತ ನೀರು ಕುಡಿದು ಜನ ಅಸ್ವಸ್ಥರಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು, ಘಟನೆ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಗಳು
* ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು.
* ನೀರಿನ ಸ್ಯಾಂಪಲ್ ಗಳನ್ನು ಲ್ಯಾಬ್ ಗೆ ಕಳುಹಿಸಿ ತಕ್ಷಣ ವರದಿ ತರಿಸಿಕೊಳ್ಳಬೇಕು.
* ವರದಿ ಆಧಾರದಲ್ಲಿ ಗ್ರಾಮಸ್ಥರ ಕೂಲಂಕುಷ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮ ವಹಿಸಬೇಕು.
* ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿ, ವಿಷಪೂರಿತ ನೀರಿನ ಮೂಲಗಳನ್ನು ಬಂದ್ ಮಾಡಬೇಕು.
* ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.
* ಎಲ್ಲ ಕ್ರಮಗಳನ್ನೂ ಸಮರ್ಪಕವಾಗಿ ತೆಗೆದುಕೊಂಡು ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು.
ಸಾಮಾಜಿಕ ಜಾಲತಾಣಗಳು ಮಾಹಿತಿ-ಮನರಂಜನೆಗೆ ಮಾತ್ರವಲ್ಲದೇ ಕೆಲವು ಟ್ರಿಕ್ಸ್-ಟಿಪ್ಸ್ ಕೊಡುವ ವೇದಿಕೆಯೂ ಆಗಿದೆ. ತಮ್ಮ ಬಳಿ ಸಂಬಂಧಕರು ಹಣ ಕೇಳಬಾರದು ಎಂದು ಇಲ್ಲೊಬ್ಬ ವ್ಯಕ್ತಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದನ್ನು ತಿಳಿದ ನೆಟ್ಟಗರು ನಾವೂ ಇದೇ ಟ್ರಿಕ್ಸ್ ಫಾಲೋ ಮಾಡ್ತೀವಿ ಅಂಕಲ್ ಎಂದು ಹೇಳುತ್ತಿದ್ದಾರೆ. ಏನಪ್ಪಾ ಆ ಟ್ರಿಕ್ಸ್ ಅಂತೀರಾ? ಈ ಸುದ್ದಿ ಓದಿ..