ಗುರು ರಾಘವೇಂದ್ರ ಬ್ಯಾಂಕ್ ಅವ್ಯವಹಾರ: ಸಿಬಿಐ ತನಿಖೆಗೆ ಪ್ರಕರಣ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ
Dec 02, 2023 06:56 PM IST
ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್
- ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಅವ್ಯವಹಾರ ಹಗರಣವನ್ನು ಸಿಎಂ ಸಿದ್ದರಾಮಯ್ಯ ಸಿಬಿಐ ತನಿಖೆಗೆ ಒಪ್ಪಿಸಿದ್ದಾರೆ.
ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಅವ್ಯವಹಾರ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.
ಈ ಬ್ಯಾಂಕ್ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಮೂರೂ ಬ್ಯಾಂಕ್‌ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, "ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.
ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.
ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.
ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಹಿನ್ನೆಲೆ
ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಗುರು ರಾಘವೇಂದ್ರ ಬ್ಯಾಂಕ್ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಇಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್ ಸುಳ್ಳು ಸಾಲಗಾರರ ಖಾತೆ ತೆರದು ಈ ಹಣವನ್ನು ಲಾಂಡರಿಂಗ್ ಮಾಡಿದೆ.
ಫೆಬ್ರವರಿ 2022 ರಲ್ಲಿ, ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿಗುರು ರಾಘವೇಂದ್ರ ಸಹಕಾರ ಬ್ಯಾಂಕ್ನಲ್ಲಿ ಠೇವಣಿ ಇಟ್ಟಿದ್ದರು.
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಈ ಹಿಂದೆ ಭರವಸೆ ನೀಡಿದ್ದರು.