logo
ಕನ್ನಡ ಸುದ್ದಿ  /  ಕರ್ನಾಟಕ  /  Congress List: ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಬೇಡಿಕೆ ಒಪ್ಪದ ಹೈಕಮಾಂಡ್?:‌ 'ಕೋಲಾರ ಕೋಲಾಟ' To Be Continued..

Congress List: ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಿದ್ದರಾಮಯ್ಯ ಬೇಡಿಕೆ ಒಪ್ಪದ ಹೈಕಮಾಂಡ್?:‌ 'ಕೋಲಾರ ಕೋಲಾಟ' To Be Continued..

Nikhil Kulkarni HT Kannada

Apr 06, 2023 03:27 PM IST

google News

ಸಂಗ್ರಹ ಚಿತ್ರ

    • ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಈ ಮೂಲಕ  ಸಿದ್ದರಾಮಯ್ಯ ಅವರು, ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಟಿಕೆಟ್‌ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ. ಈ ಕುರಿತು ಹೈಕಮಾಂಡ್‌ ಚಿಂತನೆ ಏನು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ..
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ (HT_PRINT)

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಪ್ರತಿಪಕ್ಷ ಕಾಂಗ್ರೆಸ್‌, ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಈ ಮೂಲಕ ಮೊದಲ ಪಟ್ಟಿಯಲ್ಲಿ ವರುಣಾ ಕ್ಷೇತ್ರದ ಟಿಕೆಟ್‌ ಪಡೆದುಕೊಂಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಎರಡನೇ ಪಟ್ಟಿಯಲ್ಲಿ ಕೋಲಾರ ಕ್ಷೇತ್ರದ ಟಿಕೆಟ್‌ ಪಡೆಯಲಿದ್ದಾರೆ ಎಂಬ ನಿರೀಕ್ಷೆ ಹುಸಿಯಾಗಿದೆ.

ವರುಣಾ ಮತ್ತು ಕೋಲಾರ ಎರಡೂ ಕ್ಷೇತ್ರಗಳಿಂದ ಸ್ಪರ್ಧೆ ಮಾಡುವ ಸಿದ್ದರಾಮಯ್ಯ ಅವರ ಬೇಡಿಕೆಯನ್ನು, ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತಿದೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಎರಡು ಕ್ಷೇತ್ರಗಳಿಂದ ಕಣಕ್ಕಿಳಿಸುವ ಇರಾದೆ ಹೈಕಮಾಂಡ್‌ಗೆ ಇಲ್ಲ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.

ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಇನ್ನೂ ಘೋಷಿಸಿಲ್ಲ. ಮಾರ್ಚ್‌ನಲ್ಲಿ ಪಕ್ಷ ಪ್ರಕಟಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರವನ್ನು ಸಿದ್ದರಾಮಯ್ಯ ಅವರಿಗೆ ಹಂಚಿಕೆ ಮಾಡಲಾಗಿತ್ತು. ಆದರೆ, ಮಾಜಿ ಮುಖ್ಯಮಂತ್ರಿ ಕೋಲಾರದಿಂದ ಸ್ಪರ್ಧಿಸಲು ಮಾನಸಿಕವಾಗಿ ಸಿದ್ಧರಾಗಿರುವುದಾಗಿ ಘೋಷಿಸಿದ್ದರು. ಆದರೆ ಹೈಕಮಾಂಡ್‌ ಕೋಲಾರ ಕ್ಷೇತ್ರಕ್ಕೆ ಬೇರೆ ಅಭ್ಯರ್ಥಿಯನ್ನು ಹುಡಕಲಿದೆ ಎಂಬುದು ಸದ್ಯದ ಅಪ್ಡೇಟ್.

ತಮ್ಮ ಆದ್ಯತೆಯ ಸ್ಥಾನದಿಂದ ಕಣಕ್ಕಿಳಿಸದಿರುವುದು ಸಿದ್ದರಾಮಯ್ಯ ಅವರಿಗೆ ಮುಜುಗರ ತಂದಿದೆ ಎಂದು ಹೇಳಲಾಗುತ್ತಿದ್ದು, ಮೂರನೇ ಪಟ್ಟಿಯಲ್ಲಾದರೂ ಕೋಲಾರ ಕ್ಷೇತ್ರದಿಂದ ತಮ್ಮನ್ನು ಅಭ್ಯರ್ಥಿಯನ್ನಾಗಿ ಮಾಡುವ ನಿರೀಕ್ಷೆಯನ್ನು ಮಾಜಿ ಮುಖ್ಯಮಂತ್ರಿ ಹೊಂದಿದ್ದಾರೆ ಎನ್ನಲಾಗಿದೆ.

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಅನೇಕ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಆದರೆ ನಾನು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬೇಕೆ ಅಥವಾ ಬೇಡವೇ ಎಂಬುದನ್ನು ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರನ್ನು ಎರಡು ಕ್ಷೇತ್ರಗಳಿಂದ ಕಣಕ್ಕಿಳಿಸದಿರಲು ಹೈಕಮಾಂಡ್ ನಿರ್ಧರಿಸಿದೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಅನುಮತಿ ನೀಡಿದರೆ, ಇತರ ನಾಯಕರೂ ಇದೇ ಬೇಡಿಕೆಯನ್ನು ಮಂಡಿಸಬಹುದು ಎಂಬ ಚಿಂತೆ ಹೈಕಮಾಂಡ್‌ನದ್ದಾಗಿದೆ ಎನ್ನಲಾಗಿದೆ.

ಕೊರಟಗೆರೆ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರನ್ನು ಕಣಕ್ಕಿಳಿಸಲಾಗಿದೆ. ಅವರು ಪುಲಿಕೇಶಿನಗರದಿಂದ ಸ್ಪರ್ಧಿಸಲು ಬಯಸಿದ್ದರು. ಹೀಗಿರುವಾಗ ಸಿದ್ದರಾಮಯ್ಯ ಎರಡು ಸ್ಥಾನಗಳಲ್ಲಿ ಏಕೆ ಸ್ಪರ್ಧಿಸಬೇಕು ಎಂದು ಕೆಲವು ಹಿರಿಯ ನಾಯಕರು ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯ ಘಟಕದ ನಾಯಕರ ಆಂತರಿಕ ಕಲಹವನ್ನು ತಣಿಸುವುದು ಕಾಂಗ್ರೆಸ್‌ ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನಡುವೆ ಸಮತೋಲನ ಸಾಧಿಸುವುದು ಹೈಕಮಾಂಡ್‌ನ ಉದ್ದೇಶವಾಗಿದೆ. ಉಭಯ ನಾಯಕರು ಕೂಡ ಪಕ್ಷದ ಗೆಲುವಿಗಾಗಿ ಒಗ್ಗಟ್ಟಾಗಿದ್ದೇವೆ ಎಂದು ಒತ್ತಿ ಹೇಳಿದ್ದಾರೆ.

ಇಂದು ಬಿಡುಗಡೆ ಮಾಡಲಾದ ಎರಡನೇ ಪಟ್ಟಿಯಲ್ಲಿ ಕಾಂಗ್ರೆಸ್ 42 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇದುವರೆಗೂ ಕಾಂಗ್ರೆಸ್ ಒಟ್ಟು 166 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಮೂರನೇ ಪಟ್ಟಿಯಲ್ಲಿ ಬಾಕಿ ಉಳಿದಿರುವ 58 ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಲಿದೆ.

ಪ್ರಸ್ತುತ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಬಾದಾಮಿ ಕ್ಷೇತ್ರದಿಂದ, ಭೀಮಸೇನ ಚಿಮ್ಮನಕಟ್ಟಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಚಿಮ್ಮನಕಟ್ಟಿ ಅವರ ತಂದೆ ಬಿ.ಬಿ.ಚಿಮ್ಮನಕಟ್ಟಿ ಅವರು 2018ರಲ್ಲಿ ಸಿದ್ದರಾಮಯ್ಯನವರಿಗೆ ಈ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ, ಜನರ ಕುಂದುಕೊರತೆಗಳನ್ನು ಆಲಿಸಲು ಕ್ಷೇತ್ರವು ತುಂಬಾ ದೂರದಲ್ಲಿದೆ ಎಂಬ ಕಾರಣಕ್ಕೆ ಈ ಬಾರಿ ಬಾದಾಮಿ ಕ್ಷೇತ್ರದಿಂದ ಸ್ಪರರ್ಧಿಸದಿರುವ ನಿರ್ಧಾರ ಮಾಡಿದ್ದರು.

ಎರಡನೇ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಪುತ್ರ ವಿಜಯ್ ಸಿಂಗ್ ಅವರಿಗೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆ ನೀಡಿರುವುದು ಗಮನಿಸಬೇಕಾದ ಸಂಗತಿ.

    ಹಂಚಿಕೊಳ್ಳಲು ಲೇಖನಗಳು

ಮುಂದಿನ ಲೇಖನ