CM Bommai: ಸ್ಮಾರ್ಟ್ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡದ ಗುತ್ತಿಗೆದಾರರ ವಿರುದ್ಧ ಕ್ರಮ - ಸಿಎಂ
Aug 08, 2022 07:49 PM IST
ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ
- ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ವೇಳೆ ಹು-ಧಾ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯನ್ನು ಒಂದು ವರ್ಷದೊಳಗೆ ಮುಗಿಸಬೇಕೆಂದು ಹೇಳಿದ್ದಾರೆ.
ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು. ಯೋಜನಾಬದ್ಧವಾಗಿ ಕೆಲಸ ಮಾಡಬೇಕು. ಸಮಯ ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಗುಣಮಟ್ಟ ಕಾಪಾಡಿಕೊಳ್ಳದ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹು-ಧಾ ಸ್ಮಾರ್ಟ್ ಸಿಟಿ ಯೋಜನೆ ಅನುದಾನದಡಿ ನಗರಪ್ರದೇಶದ ಬಡವರ್ಗಗಳ ಪ್ರದೇಶದಲ್ಲಿ ಸುಮಾರು 34 ಕೋಟಿ ರೂ.ವೆಚ್ಚದ ವಿವಿಧ ಮೂಲಸೌಕರ್ಯಗಳ ಲೋಕಾರ್ಪಣೆ ನೆರವೇರಿಸಿ ಸಿಎಂ ಮಾತನಾಡಿದರು. ಮುಂದಿನ 1 ವರ್ಷದೊಳಗೆ ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಹೇಳಿದ್ದಾರೆ.
ಈ ಯೋಜನೆ 2014-15ರಲ್ಲಿ ಪ್ರಾರಂಭವಾಗಿ 2020ಕ್ಕೆ ಪೂರ್ಣಗೊಳ್ಳಬೇಕಿತ್ತು. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ 555 ಕೋಟಿ ರೂ.ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ. ರಸ್ತೆ, ಒಳಚರಂಡಿ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳ ಕಾಮಗಾರಿಗಳನ್ನು ಇದೇ ಆರ್ಥಿಕ ವರ್ಷದ ಮಾರ್ಚ್ 31 ರೊಳಗೆ ಮುಗಿಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಸ್ಮಾರ್ಟ್ ಸಿಟಿ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು. ಯೋಜನಾಬದ್ಧವಾಗಿ ಕೆಲಸ ಮಾಡಬೇಕು. ಸಮಯ ಹಾಗೂ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ಗುಣಮಟ್ಟ ಕಾಪಾಡಿಕೊಳ್ಳದ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದಾಗ ನಮ್ಮ ದೇಶದ ಜನಸಂಖ್ಯೆ 30 ಕೋಟಿ ಇತ್ತು, ಸ್ವಾತಂತ್ರ್ಯಾನಂತರ ಈಗ ಈ ಪ್ರಮಾಣ 130 ಕೋಟಿಗೆ ಏರಿದೆ. ನಗರೀಕರಣದಿಂದಾಗಿ ಶೇ.14 ರಷ್ಟಿದ್ದ ನಗರ ಪ್ರದೇಶದ ಜನಸಂಖ್ಯೆಯ ಪ್ರಮಾಣ ಶೇ.37 ಕ್ಕೆ ಏರಿಕೆಯಾಗಿದೆ. ಪ್ರಧಾನಮಂತ್ರಿಗಳ ಸ್ಮಾರ್ಟ್ ಸಿಟಿ ಯೋಜನೆ ಪ್ರಾರಂಭಿಸಿದ್ದು, ರಾಜ್ಯದ 7 ನಗರಗಳನ್ನು ಸ್ಮಾರ್ಟ್ ಸಿಟಿ ಯೋಜನೆ ಗೆ ಆಯ್ಕೆ ಮಾಡಲಾಗಿದೆ ಎಂದರು.
ಹು-ಧಾ ಅಭಿವೃದ್ಧಿಯಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ: ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದಿರುವ ತಮಗೆ ಇಲ್ಲಿನ ಎಲ್ಲ ಪ್ರದೇಶಗಳ ಬಹುತೇಕ ಸಮಸ್ಯೆಗಳು ತಿಳಿದಿವೆ. ಮುಖ್ಯ ಕಾಲುವೆಯ ಸಮಸ್ಯೆಗೆ ಪರಿಹಾರ ಒದಗಿಸಲಾಗುವುದು. ಜಿಲ್ಲೆಯ ಅಭಿವೃದ್ಧಿಯಲ್ಲಿ ಯಾವುದೇ ತಾರತಮ್ಯಕ್ಕೆ ಆಸ್ಪದವಿಲ್ಲ. 300 ಕೋಟಿ ರೂ.ವೆಚ್ಚದಲ್ಲಿ ಜಯದೇವ ಹೃದ್ರೋಗ ಕೇಂದ್ರ ಸ್ಥಾಪನೆಗೆ ಆಗಸ್ಟ್ ತಿಂಗಳಲ್ಲಿ ಅಡಿಗಲ್ಲು ಸಮಾರಂಭ ಹಮ್ಮಿಕೊಳ್ಳಲಾಗುವುದು. ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಬಜೆಟ್ ಘೋಷಣೆಯ ಅನುಷ್ಠಾನಕ್ಕೆ ಆದೇಶ ಹೊರಡಿಸಲಾಗಿದೆ.
ತುಮಕೂರು ಮತ್ತು ಧಾರವಾಡದಲ್ಲಿ ವಿಶೇಷ ಬಂಡವಾಳ ಕಾರ್ಯಕ್ರಮಗಳ ಮೂಲಕ ಉದ್ದಿಮೆಗಳ ಸ್ಥಾಪನೆಗೆ ಪ್ರೋತ್ಸಾಹ ನೀಡಲಾಗುವುದು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ನಿರ್ಮಾಣ ಮತ್ತು ಆ ಮೂಲಕ ಕಾರವಾರ ಬಂದರಿಗೆ ಸಂಪರ್ಕ ಕಲ್ಪಿಸುವ ಯೋಜನೆಯು ಅರಣ್ಯ ಹಾಗೂ ಪರಿಸರ ಮಂತ್ರಾಲಯದ ಕ್ಲಿಯರೆನ್ಸ್ ಪಡೆಯುವ ಹಂತದಲ್ಲಿದೆ ಶೀಘ್ರ ಯೋಜನೆ ಕೈಗೆತ್ತಿಕೊಳ್ಳುವ ಭರವಸೆ ಇದೆ. ತುಮಕೂರು-ದಾವಣಗೆರೆ ಹಾಗೂ ಧಾರವಾಡ-ಬೆಳಗಾವಿ ನೇರ ರೈಲು ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆಗೆ ಅನುಮೋದನೆ ದೊರೆತಿದ್ದು, ಯೋಜನೆಯನ್ನು ಇದೇ ವರ್ಷ ಪ್ರಾರಂಭಿಸುವ ಗುರಿ ಇದೆ.
ಹುಬ್ಬಳ್ಳಿ ಧಾರವಾಡದ ಸಮಗ್ರ ಅಭಿವೃದ್ಧಿಗೊಳಿಸುವ ಮೂಲಕ ಉತ್ತರ ಕರ್ನಾಟಕದ ವಾಣಿಜ್ಯ ಅಭಿವೃದ್ಧಿಗೆ ಇಂಬು ನೀಡಲಾಗುವುದು. ಹಳೆ ಹುಬ್ಬಳ್ಳಿ ಭಾಗದ ರೈತರ ಬೇಡಿಕೆಯಂತೆ ಇಲ್ಲಿ ಪಶು ವೈದ್ಯಕೀಯ ಪಾಲಿಕ್ಲಿನಿಕ್ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆ ಅನುದಾನದಡಿ ನಗರಪ್ರದೇಶದ ಬಡವರ್ಗಗಳ ಪ್ರದೇಶದಲ್ಲಿ ಸುಮಾರು 34 ಕೋಟಿ ರೂ.ವೆಚ್ಚದ ವಿವಿಧ ಮೂಲಸೌಕರ್ಯಗಳನ್ನು ಸಿಎಂ ಇಂದು ಲೋಕಾರ್ಪಣೆ ಮಾಡಿದರು.
2015ರ ಜೂನ್ 25 ರಂದು ಕೇಂದ್ರ ಸರ್ಕಾರ ಈ ಯೋಜನೆಯನ್ನು ಆರಂಭಿಸಿತ್ತು. ಮೊದಲ ಹಂತವಾಗಿ ದೇಶದ 100 ನಗರಗಳನ್ನು ಸ್ಮಾರ್ಟ್ ಸಿಟಿಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಳ್ಳಲಾಗಿತ್ತು. ನಗರಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಇದರ ಉದೇಶವಾಗಿದ್ದು, ಇದರಿಂದ ಇಲ್ಲಿನ ಜನರಿಗೆ ಸ್ವಚ್ಛ ಮತ್ತು ಸುಸ್ಥಿರ ವಾತಾವರಣವನ್ನು ಕಲ್ಪಿಸಬಹುದಾಗಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ಎಷ್ಟು ಕೋಟಿ ಖರ್ಚು?: 5,929 ಯೋಜನೆಗಳಿಗೆ 1,78,492 ಕೋಟಿ ರೂಪಾಯಿಗಳ ಟೆಂಡರ್ ನೀಡಲಾಗಿದೆ. 1,46,466 ಕೋಟಿ ಮೌಲ್ಯದ 5,245 ಯೋಜನೆಗಳಿಗೆ ವರ್ಟ್ ಆರ್ಡರ್ ನೀಡಲಾಗಿದೆ. ಈಗಾಗಲೇ 45,264 ಕೋಟಿ ರೂಪಾಯಿಗಳ 2,673 ಯೋಜನೆಗಳು ಪೂರ್ಣಗೊಂಡಿವೆ ಎಂದು ಸ್ಮಾರ್ಟ್ ಸಿಟಿ ಮಿಷನ್ ನ ವೆಬ್ ಸೈಟ್ ನಲ್ಲಿ ಮಾಹಿತಿ ಇದೆ.