Excise Policy case: ದೆಹಲಿ ಸಿಎಂ ಕೇಜ್ರಿವಾಲ್ ಬಂಧನದ ಭೀತಿ.. ಎಎಪಿ ನಾಯಕರ ತುರ್ತು ಸಭೆ
Apr 16, 2023 06:08 PM IST
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
- ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸುವ ಭೀತಿಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಇಂದು ಸಂಜೆ 5 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.
ನವದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸುವ ಭೀತಿಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ) ನಾಯಕರು ಇಂದು ಸಂಜೆ 5 ಗಂಟೆಗೆ ಪಕ್ಷದ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು.
ಗೋಪಾಲ್ ರೈ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಎಪಿ ರಾಷ್ಟ್ರೀಯ ಕಾರ್ಯದರ್ಶಿ ಪಂಕಜ್ ಗುಪ್ತಾ, ದೆಹಲಿ ಮೇಯರ್ ಶೆಲ್ಲಿ ಒಬೆರಾಯ್, ಉಪ ಮೇಯರ್ ಆಲೆ ಇಕ್ಬಾಲ್ ಮತ್ತು ಇತರ ಪದಾಧಿಕಾರಿಗಳು ಮತ್ತು ಪಕ್ಷದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಏಪ್ರಿಲ್ 14 ರಂದು ಸಮನ್ಸ್ ನೀಡಿದ್ದ ಸಿಬಿಐ ಇಂದು ಬೆಳಗ್ಗೆ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆಸಿತ್ತು. ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ವಿಚಾರಣೆಗೆಂದು ಸಿಬಿಐ ಕಚೇರಿಗೆ ಪ್ರವೇಶಿಸಿದಾಗಿನಿಂದ, ಎಎಪಿ ನಾಯಕರು ಮತ್ತು ಪಕ್ಷದ ಕಾರ್ಯಕರ್ತರು ಸಿಬಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಸಿಬಿಐ ಕಚೇರಿಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರಾಘವ್ ಚಡ್ಡಾ ಮತ್ತು ಸಂಜಯ್ ಸಿಂಗ್ ಸೇರಿದಂತೆ ಪಕ್ಷದ ಹಲವು ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಷ್ಟ್ರ ರಾಜಧಾನಿಯಾದ್ಯಂತ ಪ್ರತಿಭಟನೆ ನಡೆಸಿದ ಪಕ್ಷದ ಹಲವಾರು ಕಾರ್ಯಕರ್ತರನ್ನು ಸಹ ವಶಕ್ಕೆ ಪಡೆಯಲಾಗಿದೆ.
"ಬಿಜೆಪಿ ಕೇಜ್ರಿವಾಲ್ ಫೋಬಿಯಾದಿಂದ ಬಳಲುತ್ತಿದೆ. ಕೇಜ್ರಿವಾಲ್ ಭಯದಿಂದಲೇ ಬಿಜೆಪಿ ಇಂತಹ ಕೃತ್ಯಕ್ಕೆ ಇಳಿದಿದೆ. ಇದು ಹೇಡಿತನದ ಕೆಲಸ. ನಮಗೆ ಜೈಲಿನ ಬಗ್ಗೆ ಭಯವಿಲ್ಲ" ಎಂದು ರಾಘವ್ ಚಡ್ಡಾ ಹೇಳಿದ್ದಾರೆ. ನಾಳೆ (ಏ.17) ದೆಹಲಿ ಸರ್ಕಾರ ಒಂದು ದಿನದ ವಿಧಾನಸಭೆ ವಿಶೇಷ ಅಧಿವೇಶನವನ್ನು ಕರೆದಿದ್ದು,ಅಗತ್ಯತೆಗಳಿಗೆ ಅನುಗುಣವಾಗಿ ಅಧಿವೇಶನ ವಿಸ್ತರಿಸಬಹುದು ಎಂದು ಹೇಳಲಾಗಿದೆ.
ಸಿಬಿಐಯು ರಾಜ್ಯದ ಮುಖ್ಯಮಂತ್ರಿಯೊಬ್ಬರಿಗೆ ಸಮನ್ಸ್ ಜಾರಿ ಮಾಡಿದ್ದು ಇದೇ ಮೊದಲು. ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣದ ಮಾಸ್ಟರ್ ಮೈಂಡ್ ಎಂದು ಬಿಜೆಪಿ ಆರೋಪಿಸುತ್ತಾ ಬಂದಿದೆ.
ಈಗಾಗಲೇ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಸಿಬಿಐ ಬಂಧಿಸಿದೆ. ಪ್ರಸ್ತುತ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣ ಸಂಬಂಧ (ಇಡಿ) ತನಿಖೆ ನಡೆಸುತ್ತಿದೆ.
ಎಎಪಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಕೂಡ 2022ರ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಬಂಧಿಸಿತ್ತು. ಇನ್ನು, ಅರವಿಂದ್ ಕೇಜ್ರಿವಾಲ್ ವಿರುದ್ಧ ಗೋವಾ ಪೊಲೀಸರು ಕೂಡ ಸಮನ್ಸ್ ಜಾರಿ ಮಾಡಿದ್ದಾರೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇವರ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ಇದಕ್ಕಾಗಿ ಇವರು ಏಪ್ರಿಲ್ 27ರಂದು ವಿಚಾರಣೆಗೆ ಹಾಜರಾಗಬೇಕಿದೆ.
ಅರವಿಂದ್ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಕರೆ ಮಾಡಿ, 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳು ಒಂದಾಗುವ ಅಗತ್ಯವನ್ನು ಮಲ್ಲಿಕಾರ್ಜುನ ಖರ್ಗೆ ಒತ್ತಿ ಕೇಜ್ರಿವಾಲ್‌ಗೆ ಹೇಳಿದ್ದಾರೆ ಹಾಗೂ ಅವರೊಂದಿಗೆ ತಾವಿರುವ ಭರವಸೆ ನೀಡಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.