ಏಕದಿನ ವಿಶ್ವಕಪ್‌ಗೆ ಬಲಿಷ್ಠ ಭಾರತ ತಂಡ ಪ್ರಕಟ; ರಾಹುಲ್, ಇಶಾನ್‌ಗೆ ಸ್ಥಾನ; ಅಶ್ವಿನ್, ಚಹಾಲ್ ಹೊರಕ್ಕೆ
Team India Squad for ICC ODI World Cup 2023: ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ಟೀಮ್ ಇಂಡಿಯಾದಲ್ಲಿ ಯಾರಿಗೆಲ್ಲಾ ಅವಕಾಶ ಸಿಕ್ಕಿದೆ ಎಂಬುದನ್ನು ಇಲ್ಲಿ ನೋಡಿ.
ಅಕ್ಟೋಬರ್ 5ರಿಂದ ಭಾರತದಲ್ಲಿ ಶುರುವಾಗುವ ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ (ICC Cricket World Cup 2023) ಟೂರ್ನಿಗೆ ಬಲಿಷ್ಠ ಭಾರತ (Team India) ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅಜಿತ್ ಅಗರ್ಕರ್ (Ajit Agarkar) ನೇತೃತ್ವದ ಆಯ್ಕೆ ಸಮಿತಿಯು 15 ಸದಸ್ಯರ ಬಲಿಷ್ಠ ತಂಡವನ್ನು ಘೋಷಿಸಿದೆ. ನಾಯಕ ರೋಹಿತ್ ಶರ್ಮಾ, ಹೆಡ್ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಈ ಟೂರ್ನಿಗೆ ಅಳೆದು ತೂಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಬಹುತೇಕ ಏಷ್ಯಾಕಪ್ಗೆ ಪ್ರಕಟವಾದ ತಂಡವನ್ನೇ ವಿಶ್ವಕಪ್‌ಗೂ ಅಂತಿಮಗೊಳಿಸಲಾಗಿದೆ.
ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದು, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕತ್ವ ವಹಿಸಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಮೇಲಿಂದ ಮೇಲೆ ವಿಫಲವಾಗಿರುವ ಸೂರ್ಯಕುಮಾರ್ ಯಾದವ್, ಏಷ್ಯಾಕಪ್ ಬಳಿಕ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆದಿದ್ದಾರೆ. ಅತ್ತ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ತಂಡದಿಂದ ಹೊರಬಿದ್ದಿದ್ದು, ಅನುಭವಿ ಸ್ಪಿನ್ನರ್‌ಗಳಾದ ಆರ್ ಅಶ್ವಿನ್ ಹಾಗೂ ಯುಜ್ವೇಂದ್ರ ಚಹಾಲ್ ಕೂಡಾ ನಿರಾಸೆ ಅನುಭವಿಸಿದ್ದಾರೆ.
ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವಿಕೆಟ್ ಕೀಪರ್ ಇಶಾನ್ ಕಿಶನ್ ಅದ್ಭುತ ಇನ್ನಿಂಗ್ಸ್ ಮೂಲಕ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಮತ್ತೊಂದೆಡೆ ಮಧ್ಯಮ ಕ್ರಮಾಂಕದ ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್ (KL Rahul) ಸಂಪೂರ್ಣ ಫಿಟ್ ಆಗಿದ್ದಾರೆ. ನಿರೀಕ್ಷೆಯಂತೆಯೇ ಇಬ್ಬರಿಗೂ ವಿಶ್ವಕಪ್ ತಂಡದಲ್ಲಿ ಸ್ಥಾನ ನೀಡಲಾಗಿದ್ದು, ರಾಹುಲ್ಗೆ ಇಶಾನ್ ಬ್ಯಾಕಪ್ ವಿಕೆಟ್ ಕೀಪರ್ ಆಗಿರಲಿದ್ದಾರೆ.
ಕೇವಲ 15 ಆಟಗಾರರನ್ನು ಆಯ್ಕೆ ಮಾಡುವುದು ದೊಡ್ಡ ಸವಾಲು
ಬಲಿಷ್ಠ ತಂಡವನ್ನು ರಚಿಸಲು ನಾವು ಸಾಧ್ಯವಿರುವ ಎಲ್ಲಾ ಸಂಭಾವ್ಯ ಮಾರ್ಗಗಳು ಮತ್ತು ಸಾಧ್ಯತೆಗಳನ್ನು ಪರಶೀಲಿಸಿದ್ದೇವೆ. ಕೆಲವು ಆಟಗಾರರು ವಿಶ್ವಕಪ್ ತಂಡದಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ. ಭಾರತದಲ್ಲಿ ಲಭ್ಯವಿರುವ ಎಲ್ಲಾ ಪ್ರತಿಭೆಗಳಲ್ಲಿ ಕೇವಲ 15 ಆಟಗಾರರನ್ನು ಮಾತ್ರವೇ ಆಯ್ಕೆ ಮಾಡುವುದು ಸವಾಲಿನ ಕೆಲಸ. ನಾವು 15 ಆಟಗಾರರ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡಿದ್ದೇವೆ ಎಂಬ ನಂಬಿಕೆ ಇದೆ ಎಂದು ತಂಡ ಪ್ರಕಟಿಸಿದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಭಾರತ ಏಕದಿನ ವಿಶ್ವಕಪ್ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಅಕ್ಟೋಬರ್ 5 ರಿಂದ ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 58 ಪಂದ್ಯಗಳು ನಡೆಯಲಿವೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ಪಂದ್ಯದ ಮೂಲಕ ಟೀಮ್ ಇಂಡಿಯಾ ಅಭಿಯಾನವನ್ನು ಆರಂಭಿಸಲಿದೆ. ಅಕ್ಟೋಬರ್ 14 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಮಹತ್ವದ ಪೈಪೋಟಿಗೆ ಆತಿಥ್ಯ ವಹಿಸಲಿದೆ.