ಏಕದಿನ ವಿಶ್ವಕಪ್ ಕ್ರಿಕೆಟ್ 2023 (ICC World Cup 2023) ಟೂರ್ನಿಯಲ್ಲಿ ಒಟ್ಟು 10 ತಂಡಗಳು ಭಾಗವಹಿಸುತ್ತಿವೆ. 8 ತಂಡಗಳು ನೇರವಾಗಿ ಟೂರ್ನಿಗೆ ಅರ್ಹತೆ ಪಡೆದಿವೆ. ಅರ್ಹತಾ ಟೂರ್ನಿಯ ಮೂಲಕ ಎರಡು ತಂಡಗಳು ಮುಖ್ಯ ಪಂದ್ಯಾವಳಿ ಪ್ರವೇಶಿಸಿವೆ. ಆತಿಥೇಯ ಭಾರತ, ಹಾಲಿ ಚಾಂಪಿಯನ್ ಇಂಗ್ಲೆಂಡ್, ಕಳೆದ ಬಾರಿಯ ರನ್ನರ್ ಅಪ್ ನ್ಯೂಜಿಲೆಂಡ್, 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ, ಮಾಜಿ ಚಾಂಪಿಯನ್ ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಆಫ್ರಿಕಾ, ನೆದರ್ಲೆಂಡ್ಸ್, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಬಾರಿ ಐಸಿಸಿ ವಿಶ್ವಕಪ್‌ನಲ್ಲಿ ಭಾಗವಹಿಸುತ್ತಿವೆ.
ಅಕ್ಟೋಬರ್ 5 ರಂದು ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗಾಗಿ ಎಲ್ಲಾ ತಂಡಗಳು ಈಗಾಗಲೇ ತಮ್ಮ 15 ಸದಸ್ಯರ ತಂಡವನ್ನು ಪ್ರಕಟಿಸಿವೆ. ಭಾರತದ ಜೊತೆಗೆ ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡಗಳ ಸ್ಟಾರ್ ಆಟಗಾರರನ್ನು ಕ್ರಿಕೆಟ್ ಪ್ರೇಮಿಗಳು ಅಚ್ಚರಿಯಿಂದ ಗಮನಿಸುತ್ತಿದ್ದಾರೆ.
ವಿಶ್ವಕಪ್ ಕ್ರಿಕೆಟ್ 2023ರ ಟೂರ್ನಿಗೆ ಭಾರತವು 15 ಮಂದಿಯ ಬಲಿಷ್ಠ ತಂಡವನ್ನೇ ಪ್ರಕಟಿಸಿದೆ. ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಮತ್ತು ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಅವರು ಸಹ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಹಲ್, ಭುವನೇಶ್ವರ್ ಕುಮಾರ್, ಶಿಖರ್ ಧವನ್ ಸೇರಿದಂತೆ ಹಲವು ಹಿರಿಯ ಆಟಗಾರರು ಅವಕಾಶ ಪಡೆಯುವಲ್ಲಿ ವಿಫಲರಾಗಿದ್ದಾರೆ.
ವಿಶ್ವಕಪ್ ತಂಡಕ್ಕೆ ಆಯ್ಕೆಯಾದವರಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರೆ, ಶ್ರೇಯಸ್ ಅಯ್ಯರ್ ಇನ್ನೂ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿಲ್ಲ. ರೋಹಿತ್ ಶರ್ಮಾ ನಾಯಕರಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶುಭ್ಮನ್ ಗಿಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಸೂರ್ಯಕುಮಾರ್ ಯಾದವ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಇಶಾನ್ ಕಿಶನ್, ಶ್ರೇಯಸ್ ಐಯ್ಯರ್, ಕೆಎಲ್ ರಾಹುಲ್ ಅವರು ಪ್ರಧಾನ ತಂಡದಲ್ಲಿ ಸ್ಥಾನ ಪಡೆದವರು.