Breaking News: ಕೈ ಪಟ್ಟಿ ಬಿಡುಗಡೆ, ಮೂವರ ಹೆಸರು ಪ್ರಕಟ, ಅಂತಿಮವಾಗದ ಕೋಲಾರ ಅಭ್ಯರ್ಥಿ
ಲೋಕಸಭೆ ಚುನಾವಣೆಗೆ ಕರ್ನಾಟಕದ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ. ಕೋಲಾರ ಬಾಕಿ ಉಳಿಸಿಕೊಂಡಿದೆ.

ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದಲ್ಲಿ ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳಲ್ಲಿ ಮೂರು ಕ್ಷೇತ್ರದ ಅಭ್ಯರ್ಥಿ ಹೆಸರು ಅಂತಿಮಗೊಳಿಸಲಾಗಿದೆ.
ಬಳ್ಳಾರಿ ಎಸ್ಟಿ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಸಂಡೂರು ಶಾಸಕ ಈ.ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿ ಅವರ ಪುತ್ರಿಗೆ ಟಿಕೆಟ್ ಅನ್ನು ತುಕಾರಾಂ ಕೇಳಿದ್ದರು. ಕೊನೆಗೆ ತುಕಾರಾಂ ಹೆಸರನ್ನೇ ಅಂತಿಮಗೊಳಿಸಲಾಗಿತ್ತು. ಈಗ ಅಧಿಕೃತವಾಗಿ ಪ್ರಕಟಿಸಲಾಗಿದೆ. ಇಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸಹಿತ ಹಲವರ ಹೆಸರು ಪರಿಗಣನೆಯಲ್ಲಿತ್ತು.
ಚಾಮರಾಜನಗರದಿಂದ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಪುತ್ರಗೆ ಟಿಕೆಟ್ ನೀಡಲಾಗಿದೆ. ಇಲ್ಲಿಯೂ ತುರುಸಿನ ಸ್ಪರ್ಧೆ ಏರ್ಪಟ್ಟಿತ್ತು. ಕೊನೆಗೂ ಮಹಾದೇವಪ್ಪ ತಮ್ಮ ಪುತ್ರನಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಯುವ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಸೀತಾರಾಂ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಇಲ್ಲಿ ಟಿಕೆಟ್ ತಪ್ಪಿದೆ. ವೀರಪ್ಪಮೊಯ್ಲಿ ಕಡೆ ಬಾರಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿಕೊಂಡಿದ್ದರು. ಇವರೊಟ್ಟಿಗೆ ಮಾಜಿ ಸಚಿವ ಶಿವಶಂಕರ ರೆಡ್ಡಿ ಕೂಡ ಟಿಕೆಟ್‌ಗೆ ಪ್ರಯತ್ನಿಸಿದ್ದರು.
ಆದರೆ ಮುಖ್ಯವಾಗಿ ಬಣ ರಾಜಕಾರಣದಿಂದ ಗಮನ ಸೆಳೆದಿರುವ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಇದನ್ನು ಬಾಕಿ ಉಳಿಸಲಾಗಿದೆ. ಇಲ್ಲಿ ಸಚಿವ ಕೆ.ಎಚ್.ಮುನಿಯಪ್ಪ ಬಣ ಹಾಗೂ ಮಾಜಿ ಸಚಿವ ರಮೇಶ್ ಕುಮಾರ್ ಬಣದ ನಡುವೆ ಸ್ಪರ್ಧೆ ಜೋರಾಗಿದೆ. ಇದನ್ನು ವರಿಷ್ಠರು ತಡೆ ಹಿಡಿದಿದ್ದು. ನಾಳೆ ಪ್ರಕಟವಾಗಬಹುದು ಎನ್ನಲಾಗುತ್ತಿದೆ.
