ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತಿತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ
ಕನ್ನಡ ಸುದ್ದಿ  /  ಮನರಂಜನೆ  /  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತಿತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಮತ್ತಿತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಇದೀಗ ಮತ್ತೆ ಇಕ್ಕಟ್ಟಿಗೆ ಸಿಲುಕಿದ್ದಾರೆ. ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಜಾಮೀನು ನೀಡಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ, ಬೆಂಗಳೂರು ಪೋಲಿಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ದರ್ಶನ್ ಮತ್ತಿತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ
ದರ್ಶನ್ ಮತ್ತಿತರ ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ (HT_PRINT)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್, ಅವರ ಆಪ್ತ ಪವಿತ್ರ ಗೌಡ ಮತ್ತು ಇತರ ಆರೋಪಿಗಳಿಗೆ ರೆಗ್ಯುಲರ್ ಜಾಮೀನು ಮಂಜೂರು ಮಾಡಿರುವ ಹೈ ಕೋರ್ಟ್ ಆದೇಶಗಳನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ದರ್ಶನ್, ಪವಿತ್ರಗೌಡ, ಪ್ರದೂಶ್, ಲಕ್ಷ್ಮಣ್, ಅನುಕುಮಾರ್, ನಾಗರಾಜು ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್‌ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಮಂದಿ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ಪ್ರಾಸಿಕ್ಯೂಶನ್ ಪರ ಹಿರಿಯ ವಕೀಲ ಅನಿಲ್ ನಿಶಾನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಆದರೆ ವಿಚಾರಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ಬೆಂಗಳೂರು ಪೊಲೀಸರು ಹಿರಿಯ ವಕೀಲ ಸಿದ್ದಾರ್ಥ್ ಲೂಥಾ ಅವರನ್ನು ನೇಮಿಸಿದ್ದಾರೆ. ಅನಿಲ್ ಸಿ. ನಿಶಾನಿ ಹಾಗೂ ಹೈಕೋರ್ಟ್‌ನ ಪಬ್ಲಿಕ್ ಪ್ರಾಸಿಕ್ಯೂಟರ್ ಅವರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿತ್ತು. ಹೈಕೋರ್ಟ್ ಏಕಸದಸ್ಯ ಪೀಠ ಡಿಸೆಂಬರ್ 13ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಅನುಮತಿ ಕೋರಿ ನಗರ ಪೊಲೀಸರು, ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಕಳೆದ ವಾರ ಗೃಹ ಇಲಾಖೆ ಮೇಲ್ಮನವಿ ಸಲ್ಲಿಸಲು ಅನುಮತಿ ನೀಡಿತ್ತು.

ಚಾರ್ಜ್‌ ಶೀಟ್‌ ಅನುವಾದ ಕಾರ್ಯ ವಿಳಂಬ

ಕೊಲೆಯ ವಿಚಾರಣೆಯ ದಾಖಲೆಗಳು ಹಾಗೂ ಆರೋಪ ಪಟ್ಟಿಯಲ್ಲಿರುವ ಅಂಶಗಳನ್ನು ಇಂಗ್ಲೀಷ್ ಭಾಷೆಗೆ ಅನುವಾದ ಮಾಡುವ ಕಾರ್ಯ ವಿಳಂಬವಾಗಿದ್ದರಿಂದ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸುವ ಕಾರ್ಯ ತಡವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬಳಿಕ ನಟ ದರ್ಶನ್ ಅವರು ಬೆಂಗಳೂರಿನಿಂದ ಮೈಸೂರಿಗೆ ತೆರಳಿ ತಮ್ಮ ಫಾರ್ಮ್ ಹೌಸ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಬೆಂಗಳೂರು ಬಿಟ್ಟು ಹೊರ ಹೋಗುವಂತಿಲ್ಲ ಎಂದು ಹೈ ಕೋರ್ಟ್ ಷರತ್ತು ವಿಧಿಸಿತ್ತು. ನಂತರ ದರ್ಶನ್ ಮನವಿ ಮಾಡಿಕೊಂಡ ನಂತರ ಮೈಸೂರಿಗೆ ತೆರಳಲು ಅನುಮತಿ ನೀಡಿತ್ತು.

ಜೂನ್‌ 8ರಂದು ನಡೆದಿತ್ತು ಕೊಲೆ

ಹೈಕೋರ್ಟ್‌ ನೀಡಿದ್ದ ಗಡುವು ಜನವರಿ 5ಕ್ಕೆ ಅಂತ್ಯಗೊಂಡಿದೆ. ಜೂನ್ 8 ರಂದು 33 ವರ್ಷದ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು. ಮಾಗಡಿ ರಸ್ತೆಯ ಸುಮನಹಳ್ಳಿ ಬಳಿಯ ಚರಂಡಿಯಲ್ಲಿ ರೇಣುಕಸ್ವಾಮಿ ಶವ ಪತ್ತೆಯಾಗಿತ್ತು. ಪ್ರಕರಣದ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಇದು ಕೊಲೆ ಎನ್ನುವುದು ಖಚಿತವಾಗಿತ್ತು. ಬೆಂಗಳೂರು ಪಶ್ಚಿಮ ವಿಭಾಗದ ಪೊಲೀಸರು ಮೈಸೂರಿನಲ್ಲಿ ದರ್ಶನ್ ಅವರನ್ನು ಜೂನ್ 11ರಂದು ಬಂಧಿಸಿದ್ದರು.

17 ಮಂದಿಯ ಬಂಧನ

ತನ್ನ ಆಪ್ತೆಯಾಗಿರುವ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂಬ ಕಾರಣಕ್ಕೆ ದರ್ಶನ್ ಸಿಟ್ಟಿಗೆದ್ದಿದ್ದರು. ದರ್ಶನ್ ಸಹಚರರು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಪುಸಲಾಯಿಸಿ ಬೆಂಗಳೂರಿಗೆ ಕರೆ ತಂದಿದ್ದರು. ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿತ್ತು. ಇದರಿಂದ ಆತ ಮೃತಪಟ್ಟಿದ್ದ. ಕೊಲೆ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ 17 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

Whats_app_banner