Bhadra Upper Project: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಅನುದಾನ; ಕಾಲಮಿತಿಯಲ್ಲಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ
ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಚಿತ್ರದುರ್ಗ: ಮಧ್ಯ ಕರ್ನಾಟಕದ ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಯನ್ನು ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ ಹಾಗೂ ನಾವೇ ಆಗಮಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಟ್ರೆಂಡಿಂಗ್ ಸುದ್ದಿ
ಹೊಳಲ್ಕೆರೆ ಪಟ್ಟಣದಲ್ಲಿ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು.
ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ವೇಳೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದ ಸಂದರ್ಭದಲ್ಲಿ, ಅವರು ಕೈಗೊಂಡ ದಿಟ್ಟ ನಿಲುವಿನಿಂದಾಗಿ, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ರೂಪಿಸಿ, ಕಾಮಗಾರಿ ಆರಂಭಿಸಲಾಯಿತು. ಕೇಂದ್ರ ಸರ್ಕಾರ ಈ ಯೋಜನೆಗೆ ರೂ.5300 ಕೋಟಿಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಿದೆ.
ಮಧ್ಯ ಕರ್ನಾಟಕದ ಜನರ ಭೂಮಿಗೆ ನೀರು ಕೊಟ್ಟು, ಬರದ ಭೂಮಿಯನ್ನು ಹಸಿರಾಗಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದ್ದು, ಯೋಜನೆಯನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು. ಬರದ ನಾಡನ್ನು ಹಸಿರಾಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದು ನಾವೇ, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮಾಡುತ್ತಿರುವುದು ನಾವೇ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಯನ್ನು ಕೂಡ ಮಾಡುತ್ತೇವೆ ಎಂದಿದ್ದಾರೆ.
ಹೊಳಲ್ಕರೆ ಪಟ್ಟಣದಲ್ಲಿ ಅಭಿವೃದ್ಧಿಯ ಹೊಳೆ ಹರಿದಿದೆ. ಈ ಕ್ಷೇತ್ರದಲ್ಲಿ ಕಳೆದ ನಾಲ್ಕೂ ಮುಕ್ಕಾಲು ವರ್ಷದಲ್ಲಿ ರೂ.4,116 ಕೋಟಿ ವೆಚ್ಚದಲ್ಲಿ ವಿವಿದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದ 5 ಲಕ್ಷ ಸ್ತ್ರೀ ಸಾಮರ್ಥ್ಯ ಸಂಘಗಳಿಗೆ ಸಹಾಯಧನ ನೀಡಿ, ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಈಗಾಗಲೆ ಅನುಷ್ಠಾನಗೊಂಡಿದ್ದು, ಮಾ. 23 ರಂದು ಯುವಕರ ಸಂಘಗಳಿಗೆ ಸುತ್ತುನಿಧಿಯನ್ನು ನೀಡಿ, ಸುಮಾರು 05 ಲಕ್ಷ ಯುವಕರಿಗೆ ಉದ್ಯೋಗ ಕಲ್ಪಿಸುವ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದರು.
ಸರ್ಕಾರದಿಂದ 10 ಹೆಚ್.ಪಿ. ವರೆಗೆ ರೈತರಿಗೆ ಉಚಿತ ವಿದ್ಯುತ್, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 6 ಸಾವಿರ ಸಹಾಯಧನಕ್ಕೆ ರಾಜ್ಯ ಸರ್ಕಾರದಿಂದ 4 ಸಾವಿರ ಅನುದಾನ ನೀಡಿ ರೂ.10 ಸಾವಿರ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಸ್ತ್ರೀ ಸಾಮರ್ಥ್ಯ ಯೋಜನೆ ಅಡಿ ಸ್ವ ಸಹಾಯ ಸಂಘಗಳಿಗೆ ಸಹಾಯಧನ, ಉಚಿತವಾಗಿ ಪಿ.ಯು.ಸಿ, ಪದವಿ ಶಿಕ್ಷಣ, ರೈತ ವಿದ್ಯಾನಿಧಿ ಯೋಜನೆಯನ್ನು ಜಾರಿ ಗೊಳಿಸಲಾಗಿದೆ.
ಮುಂಬರುವ ದಿನಗಳಲ್ಲಿ ಸರ್ಕಾರದಿಂದ 5 ಲಕ್ಷ ಯುವಕರಿಗೆ ಉದ್ಯೋಗ ಅವಕಾಶ ನೀಡುವ ಯೋಜನೆ ರೂಪಿಸಲಾಗಿದೆ. ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ದವಾಗಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ದುಡಿಯುವ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್, ರೈತರಿಗೆ ಜೀವವಿಮೆ, ಲಂಬಾಣಿ(ಬಂಜಾರ), ಭೋವಿ ಸೇರಿದಂತೆ ಅನೇಕ ಪರಿಶಿಷ್ಟ ವರ್ಗದ ನಿಗಮಗಳನ್ನು ಸ್ಥಾಪಿಸಲಾಗಿದೆ. ಹಿಂದುಳಿದ ವರ್ಗಗಳ ಏಳಿಗೆಗಾಗಿ ಬಜೆಟ್‍ನಲ್ಲಿ ಅಧಿಕ ಹಣ ಮೀಸಲಿಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಧಾನಪರಿಷತ್ ಸದಸ್ಯ ರವಿಕುಮಾರ್ ಅವರು ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಪುರಸಭೆ ಅಧ್ಯಕ್ಷ ಆರ್.ಎ. ಅಶೋಕ್, ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ, ಜಿ.ಪಂ. ಸಿಇಒ ಎಂ.ಎಸ್.ದಿವಾಕರ್ ಹಾಗೂ ಇತರರು ಉಪಸ್ಥಿತರಿದ್ದರು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದು, ದಾವಣಗೆರೆಯಲ್ಲಿ ಮಾರ್ಚ್ 25ಕ್ಕೆ ಸಮಾರೋಪಗೊಳ್ಳಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.