Hubballi: 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಂದ ಆರೋಪ; ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಆಕ್ರೋಶ
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ, ವ್ಯಕ್ತಿಯೊಬ್ಬ ಕೊಂದಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿ: 5 ವರ್ಷದ ಬಾಲಕಿಯನ್ನು ವ್ಯಕ್ತಿಯೊಬ್ಬ ಅಪಹರಿಸಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತದೇಹವು ಪಾಳುಬಿದ್ದ ಕಟ್ಟಡದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದೌರ್ಜನ್ಯದ ವರದಿಗಳಿದ್ದರೂ, ಪೊಲೀಸರು ಅದನ್ನು ದೃಢಪಡಿಸಿಲ್ಲ. ವೈದ್ಯಕೀಯ ಪರೀಕ್ಷೆ ಮತ್ತು ತನಿಖೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ನ್ಯಾಯಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಈ ದೂರನ್ನು ಹುಡುಗಿಯ ಪೋಷಕರಿಂದ ತೆಗೆದುಕೊಳ್ಳಲಾಗಿದೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಸಂತ್ರಸ್ತೆಯ ಕುಟುಂಬ ಕೊಪ್ಪಳ ಜಿಲ್ಲೆಯವರಾಗಿದ್ದು, ಆಕೆಯ ತಾಯಿ ಮನೆ ಕೆಲಸದಾಕೆಯಾಗಿ ಮತ್ತು ಬ್ಯೂಟಿ ಪಾರ್ಲರ್‌ನಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ತಂದೆ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ತಾಯಿ ತನ್ನ ಮಗಳನ್ನು ಅಲ್ಲೆ ಅಕ್ಕ ಪಕ್ಕದ ಮನೆಗಳಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಕೆಲಸಕ್ಕೆ ಕರೆದುಕೊಂಡು ಹೋಗಿದ್ದಳು. ಇಂತಹ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಬಾಲಕಿಯನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದರು. ಹುಡುಗಿ ಕಾಣೆಯಾಗಿದ್ದಾಳೆ ಎಂದು ನಂತರ ಹುಡುಕಿದಾಗ, ಮನೆಯ ಮುಂಭಾಗದಲ್ಲಿರುವ ಸಣ್ಣ ಛಾವಣಿಯ ಕಟ್ಟಡದ ಸ್ನಾನಗೃಹದಲ್ಲಿ ಬಾಲಕಿ ಪತ್ತೆಯಾಗಿದ್ದಳು. ಆಕೆಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಅಗತ್ಯ ಕ್ರಮ ಕೈಗೊಳ್ಳಲಾಗುವುದು
ಅಪರಾಧಿಯನ್ನು ಆದಷ್ಟು ಬೇಗ ಬಂಧಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಹೇಳಿದರು. ಆರೋಪಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆರೋಪಿಯ ಗುರುತು ದೃಢಪಟ್ಟ ನಂತರ ಅವನು ಇರುವ ಸ್ಥಳ ಮತ್ತು ಇತರ ವಿವರಗಳನ್ನು ಖಚಿತಪಡಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಯಾವುದೇ ಅತ್ಯಾಚಾರ ಪ್ರಯತ್ನ ಅಥವಾ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂದು ಕೇಳಿದಾಗ, "ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಸಾವಿಗೆ ಕಾರಣ, ಹೆಣ್ಣು ಮಗುವಿನ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು" ಎಂದು ಅವರು ಹೇಳಿದರು. ಪೊಲೀಸರು ಪ್ರತಿಭಟನಾಕಾರರು ಶಾಂತಿ ಕಾಪಾಡುವಂತೆ ಮತ್ತು ಪೊಲೀಸರು ತಮ್ಮ ಕೆಲಸ ಮಾಡಲು ಅವಕಾಶ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದಾರೆ.
