ಕನ್ನಡ ಸುದ್ದಿ  /  Karnataka  /  Adherence To Ticket Allocation Norms Is Mandatory Clarifies Dk Shivakumar

DK Shivakumar: ಟಿಕೆಟ್‌ ಹಂಚಿಕೆ ಮಾನದಂಡಗಳ ಪಾಲನೆ ಕಡ್ಡಾಯ: ಡಿಕೆ ಶಿವಕುಮಾರ್‌ ಸ್ಪಷ್ಟನೆ

ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಹಂಚಿಕೆ ಮಾಡಲು ಇರುವ ಮಾನದಂಡಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್‌, ಟಿಕೆಟ್‌ ಹಂಚಿಕೆ ವಿಚಾರವಾಗಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ ಎಂದು ತಿಳಿಸಿದರು. ಈ ಕುರಿತು ಇಲ್ಲಿದೆ ಮಾಹಿತಿ..

ಡಿಕೆ ಶಿವಕುಮಾರ್‌ (ಸಂಗ್ರಹ ಚಿತ್ರ)
ಡಿಕೆ ಶಿವಕುಮಾರ್‌ (ಸಂಗ್ರಹ ಚಿತ್ರ) (PTI)

ಬೆಂಗಳೂರು: ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಹಂಚಿಕೆ ಮಾಡಲು ಇರುವ ಮಾನದಂಡಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್‌, ಟಿಕೆಟ್‌ ಹಂಚಿಕೆ ವಿಚಾರವಾಗಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ ಎಂದು ತಿಳಿಸಿದರು. ಕ್ಷೇತ್ರವಾರು ಸಮೀಕ್ಷೆ ಹಾಗೂ ಜಿಲ್ಲಾ ಮಟ್ಟದ ವರದಿಯ ಆಧಾರದಲ್ಲಿ ಟಿಕೆಟ್‌ ಹಂಚಿಕೆ ಮಾಡಲಾಗುವುದು ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಟಿಕೆಟ್‌ ಹಂಚಿಕೆ ವಿಚಾರವಾಗಿ ಪ್ರದೇಶ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಪ್ರತಿ ಜಿಲ್ಲೆಯಿಂದ ಎಐಸಿಸಿ ಸೆಕ್ರೆಟರಿಗಳು, ಕಾರ್ಯಾಧ್ಯಕ್ಷರು ಸಭೆ ಮಾಡಿ ವರದಿ ಕೊಟ್ಟಿದ್ದಾರೆ. ಎಐಸಿಸಿ ಹಾಗೂ ಕೆಪಿಸಿಸಿ ಪ್ರತ್ಯೇಕ ಸರ್ವೆ ಮಾಡಿಸಿವೆ. ಅದೆಲ್ಲವನ್ನು ಗಮನದಲ್ಲಿ ಇಟ್ಟುಕೊಂಡು ನಾವು ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದರು.

ಬಹುತೇಕ ಎಲ್ಲಾ ಕಾಂಗ್ರೆಸ್ ಶಾಸಕರೂ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ಯಾವುದೇ ಸವಾಲು‌ ಅಥವಾ ಗೊಂದಲ ಇಲ್ಲ. ಅರ್ಜಿ ಹಾಕಿದ ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಶ್ರಮವಹಿಸಬೇಕು. ಅಧಿಕಾರ ಬಂದ ಮೇಲೆ ಸ್ಥಾನ ಮಾನಗಳನ್ನು ನೀಡುವುದು ಇದ್ದೇ ಇದೆ ಎಂದು ಡಿಕೆಶಿ ಸೂಚ್ಯವಾಗಿ ಹೇಳಿದರು.

ಗುರುವಾರ ನಡೆಯುವ ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ, ರಾಜ್ಯದ ಪಟ್ಟಿ ಫೈನಲ್ ಮಾಡಿ ಕೇಂದ್ರ ಚುನಾವಣೆ ಸಮಿತಿಗೆ ಕಳುಹಿಸುತ್ತೇವೆ. ಹೈಕಮಾಂಡ್‌ ಈ ಪಟ್ಟಿಯನ್ನು ಪರಿಶೀಲಿಸಿ ಅಂತಿಮವಾಗಿ ಪಟ್ಟಿ ಬಿಡುಗಡೆ ಮಾಡುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಡಿಕೆಶಿ ಸ್ಪಷ್ಟಪಡಿಸಿದರು.

ಇನ್ನು ಪ್ರಧಾನಿ ಮೋದಿ ಅವರ ಪುನರಾವರ್ತಿತ ರಾಜ್ಯ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್‌, ಪ್ರಧಾನಿ ಅವರನ್ನು ರಾಜ್ಯಕ್ಕೆ ಬರಬೇಡಿ ಎಂದು ಹೇಳಲಾಗುವುದಿಲ್ಲ. ಆದರೆ ಅವರು ರಾಜ್ಯಕ್ಕೆ ಬಂದಾಗ ಈ ಭ್ರಷ್ಟ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದರು.

ಕೇಂದ್ರ ಹಣಕಾಸು ಸಚಿವೆ ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಅವರು ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹಲವು ಕೊಡುಗೆ ನೀಡುತ್ತಾರೆ ಎಂದು ನಿರೀಕ್ಷಿಸಿದ್ದೇವು. ಆದರೆ ನಿರ್ಮಲಾ ಸೀತಾರಾಮನ್‌ ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸಿಲ್ಲ ಎಂದು ಡಿಕೆ ಶಿವಕುಮಾರ್‌ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೂ ಮೊದಲು ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ನಡುವೆ ಗೌಪ್ಯ ಸಭೆ ನಡೆದಿದ್ದು, ಟಿಕೆಟ್‌ ಹಂಚಿಕೆ ವಿಚಾರವಾಗಿ ಮೂವರೂ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ಒಟ್ಟಿನಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಪ್ರತಿಪಕ್ಷ ಕಾಂಗ್ರೆಸ್‌ ಸಜ್ಜಾಗುತ್ತಿದ್ದು, ಟಿಕೆಟ್‌ ಹಂಚಿಕೆಯಂತಹ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಘಟಕ್ಕೆ ಬಂದು ನಿಂತಿದೆ ಎಂದು ಹೇಳಬಹುದು.

ಇಂದಿನ ಪ್ರಮುಖ ಸುದ್ದಿ

Budget Session: ಕಲಾಪ ನುಂಗಿದ ಅದಾನಿ ವಿವಾದ: ಸಿಜೆಐ ಮೇಲ್ವಿಚಾರಣೆಗೆ ವಿಪಕ್ಷಗಳ ಬಿಗಿ ಪಟ್ಟು

ಷೇರು ಕುಸಿತಕ್ಕೆ ಕಾರಣವಾಗಿರುವ ಅದಾನಿ ಗ್ರೂಪ್ ವಿರುದ್ಧದ ವಂಚನೆಯ ಆರೋಪಗಳ ಕುರಿತು, ಸಂಸದೀಯ ಸಮಿತಿ ಅಥವಾ ಸುಪ್ರೀಂಕೋರ್ಟ್ ನೇಮಿಸಿದ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿರೋಧ ಪಕ್ಷಗಳು ಗುರುವಾರ ಒತ್ತಾಯಿಸಿವೆ. ಲೋಕಸಭೆಯಲ್ಲಿ ಈ ಕುರಿತು ಚರ್ಚೆಗೆ ಪಟ್ಟು ಹಿಡಿದಿರುವ ವಿಪಕ್ಷಗಳು, ಸರ್ಕಾರ ಈ ವಿಷಯದಲ್ಲಿ ಏನನ್ನೋ ಮುಚ್ಚಿಡುತ್ತಿದೆ ಎಂದು ಗಂಭೀರ ಆರೋಪ ಮಾಡಿವೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ಕಿಸಿ.

IPL_Entry_Point

ವಿಭಾಗ