Karnataka Police Recruitment: ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ, ಗರಿಷ್ಠ ವಯೋಮಿತಿ ಹೆಚ್ಚಿಸಿ ಸರ್ಕಾರದ ಶುಭಸುದ್ದಿ
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಜ್ಞಾನೇಂದ್ರ, “ಉದ್ಯೋಗಾಕಾಂಕ್ಷಿಗಳ ಬಹುದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ,” ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಹಿಂದೆ ನಿಗದಿಪಡಿಸಲಾಗಿದ್ದಂತ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆ ನಿಯಮಿತವಾಗಿ ನಡೆದಿಲ್ಲ. ಈ ವೇಳೆ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ವಂಚಿತರಾಗಿದ್ದಾರೆ. ಇದೇ ಕಾರಣಕ್ಕೆ ವಯೋಮಿತಿಯಲ್ಲಿ 2 ವರ್ಷಗಳ ವಿನಾಯಿತಿ ನೀಡಲಾಗಿದೆ. ಅಂದರೆ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ವಯೋಮಿತಿ ಹೆಚ್ಚಳದೊಂದಿಗೆ, ಅರ್ಜಿ ಸಲ್ಲಿಕೆಗೆ ದಿನಾಂಕವನ್ನು ಕೂಡಾ ವಿಸ್ತರಣೆ ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಜ್ಞಾನೇಂದ್ರ, “ಉದ್ಯೋಗಾಕಾಂಕ್ಷಿಗಳ ಬಹುದಿನಗಳ ಬೇಡಿಕೆಯಾಗಿದ್ದ, ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ,” ಎಂದು ತಿಳಿಸಿದ್ದಾರೆ.
ಸದ್ಯ ಖಾಲಿ ಇರುವಂತಹ 5,075 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3,484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) 1137+454 ಸೇರಿದಂತೆ 1,591 ಹುದ್ದೆಗಳಿಗೆ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನವೆಂಬರ್ 28ರವರೆಗೆ ಅವಕಾಶ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಇತರೆ ಹಿಂದುಳಿದ ವರ್ಗಗಳ ನೇರ ಅಭ್ಯರ್ಥಿಗಳ ವಯೋಮಿತಿಯನ್ನು 29 ವರ್ಷಗಳಿಗೆ ಹೆಚ್ಚಿಸಲಾಗಿದೆ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳ ವಯೋಮಿತಿಯನ್ನು 32 ವರ್ಷಗಳಿಗೆ ಹೆಚ್ಚಿಸಲಾಗಿದ್ದು, ಇತರೆ ಅಭ್ಯರ್ಥಿಗಳ ವಯೋಮಿತಿಯನ್ನು 27 ವರ್ಷಗಳಿಗೆ ಹೆಚ್ಚಿಸಲಾಗಿದೆ.
ಇನ್ನೊಂದೆಡೆ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 7ರವರೆಗೆ ಅವಕಾಶವಿದೆ. ಇಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಇತರೆ ಹಿಂದುಳಿದ ವರ್ಗಗಳ 29 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬುಡಕಟ್ಟು ಜನಾಂಗದ 32 ವರ್ಷಗಳವರೆಗಿನ ಅಭ್ಯರ್ಥಿಗಳು ಮತ್ತು, 27 ವರ್ಷದೊಳಗಿನ ಇತರೆ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು.