Amit Shah: ಇಂದು ಬಳ್ಳಾರಿಗೆ ಬಿಜೆಪಿ ಚಾಣಕ್ಯನ ಆಗಮನ; ನಾಳೆ ಬೆಂಗಳೂರಿನಲ್ಲಿ ಹಿರಿಯ ನಾಯಕರೊಂದಿಗೆ 'ಶಾ' ಚುನಾವಣಾ ಸರಣಿ ಸಭೆ
ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಸಚಿವ ಅಮಿತ್ ಶಾ, ಚುನಾವಣಾ ಸಿದ್ಧತೆಗಳ ಕುರಿತು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಹಿರಿಯ ಪದಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಸಖತ್ ಅಲರ್ಟ್ ಆಗಿರುವ ಬಿಜೆಪಿ ಹೈಕಮಾಂಡ್ ಚುನಾವಣೆಗೆ ಬೇಕಿರುವ ಎಲ್ಲಾ ರಣತಂತ್ರಗಳನ್ನು ರೂಪಿಸುತ್ತಿದೆ. ಇದರ ಭಾಗವಾಗಿ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವೇಶ ಕೈಗೊಂಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಫೆ.23, ಗುರುವಾರ) ಬಳ್ಳಾರಿಗೆ ಆಗಮಿಸುತ್ತಿದ್ದು, ಸಂಡೂರಿನಲ್ಲಿ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಮೇ ತಿಂಗಳೊಳಗೆ ನಡೆಯಲಿರುವ ಚುನಾವಣೆಗೆ ಪಕ್ಷದ ಸಿದ್ಧತೆಗಳಿಗೆ ಹೊಸ ಟಚ್ ನೀಡಲು ಪ್ರಯತ್ನಿಸುವ ಮೂಲಕ ಹಿರಿಯ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸುವ ಮೂಲಕ ಕಾರ್ಯತಂತ್ರಗಳನ್ನು ರೂಪಿಸಲಿದ್ದಾರೆ.
ಶಾ ಅವರು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲಿ ಅವರು ಸಂವಾದಾತ್ಮಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಅವರು ಚುನಾವಣಾ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಹಿರಿಯ ಪದಾಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಕೂಡ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯಿಂದ ಮಧ್ಯಾಹ್ನ 12:50ಕ್ಕೆ ಹುಬ್ಬಳ್ಳಿ ಏರ್ಪೋರ್ಟ್ ಗೆ ಆಮಿತ್ ಶಾ ಆಗಮಿಸಲಿದ್ದಾರೆ. ಬಳಿಕ 12:55ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 1:25ಕ್ಕೆ ಸಂಡೂರು ಹೆಲಿಪ್ಯಾಡ್ ತಲುಪಲಿದ್ದಾರೆ. 1:30 ಕ್ಕೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಸಾರ್ವಜನಿಕ ಸಮಾವೇಶದ ಸ್ಥಳಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 1:30 ರಿಂದ 2:30 ರವರೆಗೆ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಿಜೆಪಿ ನಾಯಕರು ಮಾಹಿತಿ ನೀಡಿದ್ದಾರೆ.
ಕಳೆದ 12 ದಿನಗಳ ಅವಧಿಯಲ್ಲಿ ಅಮಿತ್ ಶಾ ಎರಡನೇ ಬಾರಿ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಹಿಂದೆ ಫೆಬ್ರವರಿ 11 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಅಮಿತ್ ಶಾ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು.
ಅದೇ ರೀತಿ ಪ್ರಧಾನಿ ಮೋದಿ ಕೂಡ ಕರ್ನಾಟಕಕ್ಕೆ ಸರಣಿ ಭೇಟಿಗಳನ್ನು ನೀಡುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿದ್ದಂತೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಇತರ ಹೈಕಮಾಂಡ್ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಇಂದು ಅಮಿತ್ ಶಾ ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ.
ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದರು.
ಎಎನ್ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ, ನಾನು ಕರ್ನಾಟಕಕ್ಕೆ ನಾಲ್ಕು ಬಾರಿ ಹೋಗಿದ್ದೇನೆ. ಅಲ್ಲ ಎರಡು ತಿಂಗಳಲ್ಲಿ ಐದು ಬಾರಿ ಹೋಗಿದ್ದೇನೆ. ಅಲ್ಲಿನ ಜನರ ನಾಡಿಮಿಡಿತ ಅರಿತಿದ್ದೇನೆ. ನರೇಂದ್ರ ಮೋದಿ ಅವರು ಜನಪ್ರಿಯತೆಯನ್ನು ಕರ್ನಾಟಕ ಕಣ್ಣಾರೆ ಕಂಡಿದೆ. ಅಲ್ಲಿ ತುಂಬಾ ದೊಡ್ಡ ಮಟ್ಟದ ಬಹುಮತ ಬಿಜೆಪಿಗೆ ಸಿಗಲಿದೆ ಎಂದು ಹೇಳಿದ್ದರು. ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ.