BS Yediyurappa: ಬಿಎಸ್‌ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ, ಬಂಧನ ಸಾಧ್ಯತೆ
Court News ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಕೋ ಪ್ರಕರಣದಡಿ ಬಂಧನದ ಆತಂಕ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಬೆಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪೊಲೀಸರು ಯಡಿಯೂರಪ್ಪ ಅವರನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ದಟ್ಟವಾಗಿದೆ. ನ್ಯಾಯಾಲಯ ನೀಡಿರುವ ಆದೇಶ ಆಧರಿಸಿ ಬಂಧನದ ವಾರೆಂಟ್‌ನೊಂದಿಗೆ ಪೊಲೀಸರು ಆಗಮಿಸಿ ಯಡಿಯೂರಪ್ಪ ಅವರನ್ನು ಬಂಧಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯವು ಮಾಜಿ ಸಿಎಂ ಯಡಿಯೂರಪ್ಪ ಅವರು ವಿಚಾರಣೆಗೆ ಹಾಜರಾಗದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತು. ಗುರುವಾರ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಅವರು ಬಂದಿರಲಿಲ್ಲ.ಪೋಕ್ಸೋ ಪ್ರಕರಣದ ಕುರಿತು ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿತ್ತು. ಆದರೆ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆ ಎದುರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಐಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು.
ಕಳೆದ ವರ್ಷ ಮಾರ್ಚ್ ನಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈಗೆ ಬಂಧನ ಭೀತಿ ಎದುರಾಗಿದೆ. ಬಿಎಸ್ ವೈ ಅವರ ಬಂಧನವನ್ನು ಯಾವುದೇ ಕ್ಷಣದಲ್ಲಿಯಾದರೂ ಮಾಡಬಹುದು ಎನ್ನಲಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಮಾರ್ಚ್ 14ರಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ನಮ್ಮ 17 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಲಾಗಿತ್ತು. ಫೆಬ್ರವರಿ 2ರಂದು ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿ ಜತೆ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರು ನೀಡಲಾಗಿತ್ತು. ಇದರ ಪ್ರಕಾರ, ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ಮಾಡಲು ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಈ ರೀತಿ ಮಹಿಳೆ ಸುಮಾರು 53 ಗಣ್ಯರ ವಿರುದ್ಧ ದೂರು ನೀಡಿದ್ದರು. ಹೀಗಾಗಿ, ಇದು ಸುಳ್ಳು ದೂರು ಆಗಿರಬಹುದು ಎಂಬ ವಾದಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಈ ಪ್ರಕರಣವನ್ನು ಬಿಎಸ್ ಯಡಿಯೂರಪ್ಪ ಕಡೆಗಣಿಸಿದ್ದರು.
ಈ ನಡುವೆ ಜಾಮೀನು ಕೋರಿ ಬಿ.ಎಸ್.ಯಡಿಯೂರಪ್ಪ ಅವರು ಹೈಕೋರ್ಟ್ ಗೂ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಇನ್ನೂ ಬಾಕಿಯಿದೆ.
