Bhagya Lakshmi Scheme: ಬಿಎಸ್‌ವೈ ಆರಂಭಿಸಿದ್ದ ಭಾಗ್ಯಲಕ್ಷ್ಮೀ ಯೋಜನೆ ನಿಲ್ಲುತ್ತಾ? ಇಲ್ಲ ಎಂದರು ಸಚಿವರು-bangalore news bhagya lakshmi scheme started by bs yadiyurappa for girl child wont be closed says minister hebbalkar kub ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Bhagya Lakshmi Scheme: ಬಿಎಸ್‌ವೈ ಆರಂಭಿಸಿದ್ದ ಭಾಗ್ಯಲಕ್ಷ್ಮೀ ಯೋಜನೆ ನಿಲ್ಲುತ್ತಾ? ಇಲ್ಲ ಎಂದರು ಸಚಿವರು

Bhagya Lakshmi Scheme: ಬಿಎಸ್‌ವೈ ಆರಂಭಿಸಿದ್ದ ಭಾಗ್ಯಲಕ್ಷ್ಮೀ ಯೋಜನೆ ನಿಲ್ಲುತ್ತಾ? ಇಲ್ಲ ಎಂದರು ಸಚಿವರು

ಹದಿನೆಂಟು ವರ್ಷದ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಆರಂಭಿಸಿದ್ದ ಭಾಗ್ಯಲಕ್ಷ್ಮಿ ಯೋಜನೆ ರದ್ದು ಮಾಡುವುದಿಲ್ಲ ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಯೋಜನೆ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಭಾಗ್ಯಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ ಎಂದು ಸರ್ಕಾರ ಹೇಳಿದೆ.
ಕರ್ನಾಟಕದಲ್ಲಿ ಭಾಗ್ಯಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ ಎಂದು ಸರ್ಕಾರ ಹೇಳಿದೆ.

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಹೆಣ್ಣು ಮಕ್ಕಳ ಭಾಗ್ಯಲಕ್ಷ್ಮಿ ಯೋಜನೆ ಸ್ಥಗಿತಗೊಳ್ಳುವ ಕುರಿತು ಕೆಲ ದಿನಗಳಿಂದ ಚರ್ಚೆಗಳು ನಡದೇ ಇವೆ. ಹುಟ್ಟಿದ ಹೆಣ್ಣು ಮಗುವಿಗೆ ನೀಡುವ ಬಾಂಡ್‌ ಇದು. ಇದರಿಂದ ಒಂದು ಲಕ್ಷ ರೂ. ಹೆಣ್ಣು ಮಗು ಹದಿನೆಂಟು ವರ್ಷವಾದಾಗ ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ಈ ಯೋಜನೆ ಕುರಿತು ಸಚಿವರು ಸ್ಪಷ್ಟನೆ ಕೊಟ್ಟಿದ್ಧಾರೆ. ಮಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾದ 'ಭಾಗ್ಯಲಕ್ಷ್ಮಿ ಯೋಜನೆ'ಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಪರಿಷತ್ತಿನಲ್ಲಿ ಸ್ಪಷ್ಟ ದನಿಯಲ್ಲೇ ಹೇಳಿದ್ದಾರೆ.

2006 ರಿಂದ 2024ವರೆಗೆ ಅಂದರೆ ಈವರೆಗೆ 23 ಲಕ್ಷದ 22 ಸಾವಿರದ 267 ಅರ್ಜಿಗಳು ಸುಕನ್ಯಾ ಸಮೃದ್ಧಿ- ಭಾಗ್ಯಲಕ್ಷ್ಮೀ ಯೋಜನೆಯಡಿ ಸ್ವೀಕೃತಗೊಂಡಿವೆ. ಕಳೆದ 9 ತಿಂಗಳಲ್ಲಿ 1 ಲಕ್ಷದ 12 ಸಾವಿರ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲಾಗಿದೆ. ಈವರೆಗೆ ಸಲ್ಲಿಕೆಯಾದ ಅರ್ಜಿಗಳನ್ನು ಸ್ವೀಕೃತಗೊಂಡಿವೆ. ಎಲ್ಲ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಈ ಬಗ್ಗೆ ಪೋಷಕರಲ್ಲಿ ಯಾವುದೇ ಆತಂಕಬೇಡ; ಬಾಂಡ್‌ ಬಂದಿಲ್ಲವೆಂಬ ಚಿಂತೆಯೂ ಬೇಡ. ಆನ್‌ಲೈನ್‌ ಮೂಲಕ ಸಲ್ಲಿಕೆಯಾದ ಎಲ್ಲ ಅರ್ಜಿಗಳು ಸ್ವೀಕೃತವಾಗಿವೆ ಎಂದು ಸಚಿವರು ಸದನಕ್ಕೆ ಹೇಳಿದರು.

ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎನ್. ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ ಆರ್ಥಿಕ ನೆರವಿನ ಮೂಲಕ ಸಬಲೀಕರಣಗೊಳಿಸಿ ಸ್ವಾವಲಂಬಿಯಾಗಿ ಮಾಡುವ ಯೋಜನೆ ಇದಾಗಿದೆ. 2006ನೇ ಸಾಲಿನಿಂದ ಈ ಯೋಜನೆ ಅನುಷ್ಠಾನದಲ್ಲಿದೆ ಎಂದು ಹೇಳಿದರು.

ಭಾಗ್ಯಲಕ್ಷ್ಮೀ ಯೋಜನೆಯಡಿ ಈ ಮೊದಲು ಹೆಣ್ಣು ಮಗುವಿನ ಹೆಸರಿನಲ್ಲಿ ಬಾಂಡ್‌ ನೀಡಲಾಗುತ್ತಿತ್ತು. ಆದರೆ, ಈಗ ಮಗುವಿನ ಹೆಸರಿನಲ್ಲಿ ವಾರ್ಷಿಕ 3 ಸಾವಿರ ರೂಪಾಯಿನಂತೆ 15 ವರ್ಷಗಳವರೆಗೆ ಒಟ್ಟು 45 ಸಾವಿರ ರೂಪಾಯಿಗಳನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.

ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಅಂದಾಜು ಪರಿಪಕ್ವ ಮೊತ್ತವನ್ನು ನೀಡಲಾಗುವುದು. ಅಷ್ಟೇ ಅಲ್ಲ, 18 ವರ್ಷ ಪೂರ್ಣಗೊಂಡ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಈ ನಡುವೆ, ಬಿಜೆಪಿಯ ಭಾರತಿ ಶೆಟ್ಟಿ ಅವರು, ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರದ್ದು ಎಂದು ಪ್ರಸ್ತಾಪಿಸಿದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದು ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯಲ್ಲ. ಇದು ರಾಜ್ಯ ಸರ್ಕಾರದ ಪ್ರತ್ಯೇಕ ಯೋಜನೆ. ಇತ್ತೀಚೆಗೆ ನಮ್ಮ ಸರ್ಕಾರ ಈ ಯೋಜನೆಯಲ್ಲಿ ಸ್ವಲ್ಪ ಮಾರ್ಪಾಡು ಮಾಡಿದೆ ಅಷ್ಟೇ ಎಂದು ತಿಳಿಸಿದರು.

ಸಿದ್ದು ಸವದಿಗೆ ಹೇಳಿಕೆಗೆ ಸಚಿವೆ ತಿರುಗೇಟು

ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಸುಮಾರು 1.18 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡುತ್ತಿದ್ದೇವೆ. ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ಗುರುವಾರ ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಗೃಹಲಕ್ಷ್ಮಿ ಯೋಜನೆ ಅರ್ಹರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಗೆ 1.28 ಕೋಟಿ ಮಹಿಳೆಯರು ಅರ್ಹರಿದ್ದು, ಈ ಪೈಕಿ ಯೋಜನೆಗೆ ನೋಂದಣಿಯಾಗಿರುವ 1.18 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಬಜೆಟ್‌ನಲ್ಲಿ ವಾರ್ಷಿಕ 34 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ ಎಂದರು.

ಇದೊಂದು ದೊಡ್ಡ ಯೋಜನೆ. ಗೃಹಲಕ್ಷ್ಮಿ ಬಂದ ಬಳಿಕ ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಣೆಯಾಗಿದೆ ಎಂದು ಹೇಳಿದರು. ಎಲ್ಲಾ ಫಲಾನುಭವಿಗಳು ಸರ್ಕಾರಕ್ಕೆ ಆಶೀರ್ವಾದ ಮಾಡುತ್ತಿದ್ದಾರೆ. ನೀವಷ್ಟೇ (ವಿರೋಧ ಪಕ್ಷ) ಯೋಜನೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದೀರಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದರು.

ಗೃಹಲಕ್ಷ್ಮಿ ಯೋಜನೆ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮಂದಿಗೆ ತಲುಪಿದೆ. ಇದರಿಂದ ಆಗಿರುವ ಅನುಕೂಲವೇನು ಎನ್ನುವುದನ್ನು ಅಂಕಿ ಅಂಶ ಸಮೇತ ಬೇಕಿದ್ದರೆ ನೀಡುವೆ. ಅನಾವಶ್ಯಕವಾಗಿ ಯೋಜನೆ ಬಗ್ಗೆ ಟೀಕೆ ಮಾಡಬೇಡಿ. ಸರಾಸರಿ ನೂರು ಜನರಲ್ಲಿ 97 ಮಂದಿಗೆ ಯೋಜನೆ ತಲುಪಿದ್ದು, ಉಳಿದ ಮೂರು ಮಂದಿಗೆ ಕೆಲವೊಂದು ಕಾರಣದಿಂದ ತಲುಪಿಲ್ಲ. ಈ ಸಮಸ್ಯೆಗೆ ನಮ್ಮ ಇಲಾಖೆಯ ಅಧಿಕಾರಿಗಳು ಪರಿಹಾರ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗೃಹಲಕ್ಷ್ಮಿ ಯೋಜನೆಯ ಹಣ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಇಲ್ಲಿ ಮಧ್ಯವರ್ತಿಗಳ ಕಾಟ ಇರುವುದಿಲ್ಲ. ವಿಧವಾ ವೇತನ ಪಡೆಯಲು ಲಂಚ ನೀಡುವ ಸ್ಥಿತಿ ಇತ್ತು. ಆದರೆ ಗೃಹಲಕ್ಷ್ಮಿ ನೇರವಾಗಿ ಫಲಾನುಭವಿಗಳಿಗೆ ತಲುಪುತ್ತಿದೆ. ಹಿರಿಯ ಶಾಸಕರು ಸದನಕ್ಕೆ ತಪ್ಪು ಮಾಹಿತಿ ನೀಡಬಾರದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.

mysore-dasara_Entry_Point