Karnataka Excise: ಕರ್ನಾಟಕಕ್ಕೆ ಬರುವ ಹೊರ ರಾಜ್ಯದ ಕಳ್ಳಸಾಗಣೆ ಮದ್ಯ ತಡೆಯಲು ಕಟ್ಟುನಿಟ್ಟಿನ ಸೂಚನೆ
lizquor ಹೊರ ರಾಜ್ಯದಿಂದ ಅಕ್ರಮವಾಗಿ ಕರ್ನಾಟಕಕ್ಕೆ ಬರುವ ಮದ್ಯವನ್ನು ತಡೆಯುವಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರು: ಗೋವಾ, ಮಹಾರಾಷ್ಟ್ರ ಸೇರಿದಂತೆ ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು. ಇದರಿಂದ ಆಗುವ ಅಕ್ರಮವನ್ನು, ಸೋರಿಕೆಯನ್ನು ತಡೆಯಲೇಬೇಕು. ಅಬಕಾರಿ ಇಲಾಖೆಯು ಗಡಿ ಪ್ರದೇಶ ಸೇರಿದಂತೆ ಕಳ್ಳ ಸಾಗಣಿಗೆ ಹೆಚ್ಚು ಇರುವ ಪ್ರದೇಶದಲ್ಲಿ ಹೆಚ್ಚು ಗಮನ ಹರಿಸಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯವಹಿಸುವ ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಚುನಾವಣೆ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿದರು. ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದಾಗ ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು.ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ .ಜೆ. ರವಿಶಂಕರ್ ಉಪಸ್ಥಿತರಿದ್ದರು.
ತಂತ್ರಾಂಶ ಜಾರಿ
ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು.
ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.
ಸಿಎಂ ನೀಡಿದ ಸೂಚನೆ ಏನೇನು
- ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು
- ಕರ್ನಾಟಕಕ್ಕೆ ಬೇರೆ ಬೇರೆ ರಾಜ್ಯಗಳಿಂದ ಕಳ್ಳ ಮದ್ಯ ಬಾರದಂತೆ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಲೇಬೇಕು
- ವಿಶೇಷವಾಗಿ ಹೊರ ರಾಜ್ಯದಿಂದ ಬರುವ ಮದ್ಯದಿಂದ ನಮ್ಮ ಆದಾಯ ಕುಸಿಯುವ ಸಾಧ್ಯತೆಯೂ ಇರುವುದರಿಂದ ಗಮನ ಹರಿಸಬೇಕು
- ಇದಕ್ಕಾಗಿ ಗಡಿ ಭಾಗಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ತಪಾಸಣೆ ಚುರುಕುಗೊಳಿಸಬೇಕು
- ಎಲ್ಲಾ ಹಂತದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಕೆಲಸ ಮಾಡುವಂತೆ ಹಿರಿಯ ಅಧಿಕಾರಿಗಳು ಸೂಚನೆ ನೀಡಬೇಕು.
- ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು .
- ಇಲಾಖೆಯಲ್ಲಿ ಕಾನ್ಸ್‌ಟೇಬಲ್, ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು.
- ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸಲು ಸಮಯವಕಾಶ ನೀಡಲಾಗುವುದು.
- ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ಹೀಗೆ ಮಾಡುವುದರಿಂದ ಇಲಾಖೆಗೆ ಕೆಟ್ಟ ಹೆಸರು ಬರಲಿದೆ ಎನ್ನುವುದನ್ನು ಅಧಿಕಾರಿಗಳು ಮನಗಾಣಬೇಕು.