SM Krishna: ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ
ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಸಿಎಂ ಎಸ್.ಎಂ.ಕೃಷ್ಣ( SM Krishna) ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು: ಅನಾರೋಗ್ಯದಿಂದ ಎರಡು ವಾರಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ.ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿಸಿದರೂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ತಂಡ ಚಿಕಿತ್ಸೆಯನ್ನು ನಿರಂತರವಾಗಿ ಮುಂದುವರೆಸಿದೆ. ಎಸ್.ಎಂ.ಕೃಷ್ಣ ಅವರ ಆರೋಗ್ಯದ ಕುರಿತು ವದಂತಿಗಳು ಹಬ್ಬಿದ್ದರಿಂದ ಆಸ್ಪತ್ರೆಯ ವೈದ್ಯಾಧಿಕಾರಿಗಳೇ ಶನಿವಾರ ಸಂಜೆ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಎಸ್‌ಎಂ ಕೃಷ್ಣ ಅವರಿಗೆ ಐಸಿಯುನಲ್ಲಿಯೇ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ. ಅವರನ್ನು ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ನೋಡಿಕೊಳ್ಳುತ್ತಿದೆ. ಈಗಲೂ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸ್‌ಎಂ ಕೃಷ್ಣ ಅವರಿಗೆ ಈಗ 92 ವರ್ಷ ವಯಸ್ಸಾಗಿದೆ. ಕಳೆದ ತಿಂಗಳೂ ಮೈಸೂರು ಸೇರಿದಂತೆ ಹಲವು ಕಡೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಏಪ್ರಿಲ್ ಕೊನೆ ವಾರದಲ್ಲಿ ಅಸ್ವಸ್ಥರಾದ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂದಿನಿಂದಲೂ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಅವರ ಪತ್ನಿ, ಮಕ್ಕಳು, ಮೊಮ್ಮಕ್ಕಳು ಎಸ್.ಎಂ.ಕೃಷ್ಣ ಅವರ ಆರೈಕೆಯಲ್ಲಿ ತೊಡಗಿದ್ದಾರೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅವರ ಆರೋಗ್ಯ ವಿಚಾರಿಸಿ ಬಂದಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕು ಸೋಮನಹಳ್ಳಿ ಗ್ರಾಮದವರಾದ ಕೃಷ್ಣ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು. ಕರ್ನಾಟಕದ ರಾಜಕಾರಣದಲ್ಲಿ ಆರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದವರು. ಕರ್ನಾಟಕದಲ್ಲಿ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ಉಪಮುಖ್ಯಮಂತ್ರಿ. ಮುಖ್ಯಮಂತ್ರಿಯಾಗಿ, ಸಂಸದರಾಗಿ. ಕೇಂದ್ರದಲ್ಲಿ ವಿದೇಶಾಂಗ ಖಾತೆಯ ಉನ್ನತ ಹುದ್ದೆಯಲ್ಲಿದ್ದವರು. ಆನಂತರ ಮಹಾರಾಷ್ಟ್ರದ ರಾಜ್ಯಪಾಲರೂ ಆಗಿದ್ದರು. ಕೆಲ ವರ್ಷದ ಹಿಂದೆ ಕಾಂಗ್ರೆಸ್ ಸೇರಿ ಬಿಜೆಪಿ ಸೇರಿದ್ದರು. ಈಗ ಸಕ್ರಿಯ ರಾಜಕೀಯದಿಂದ ದೂರ ಉಳಿದಿದ್ದಾರೆ.
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy appeared in Hindustan Times Kannada website. To read more like this please logon to kannada.hindustantimes.com)