Bangalore News: ಮಳೆಗಾಲಕ್ಕೂ ಮುನ್ನ ಸಿಎಂ ಬೆಂಗಳೂರು ಸುತ್ತಾಟ, ಬಿಬಿಎಂಪಿ ಮುಖ್ಯ ಎಂಜಿನಿಯರ್‌ಗೆ ಸಸ್ಪೆಂಡ್‌ ಎಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  Bangalore News: ಮಳೆಗಾಲಕ್ಕೂ ಮುನ್ನ ಸಿಎಂ ಬೆಂಗಳೂರು ಸುತ್ತಾಟ, ಬಿಬಿಎಂಪಿ ಮುಖ್ಯ ಎಂಜಿನಿಯರ್‌ಗೆ ಸಸ್ಪೆಂಡ್‌ ಎಚ್ಚರಿಕೆ

Bangalore News: ಮಳೆಗಾಲಕ್ಕೂ ಮುನ್ನ ಸಿಎಂ ಬೆಂಗಳೂರು ಸುತ್ತಾಟ, ಬಿಬಿಎಂಪಿ ಮುಖ್ಯ ಎಂಜಿನಿಯರ್‌ಗೆ ಸಸ್ಪೆಂಡ್‌ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ( CM Siddaramaiah), ಡಿಸಿಎಂ ಡಿಕೆ ಶಿವಕುಮಾರ್‌( DCM DK Shivakumar) ಹಾಗೂ ಅಧಿಕಾರಿಗಳು, ಜನಪ್ರತಿನಿಧಿಗಳ ತಂಡದೊಂದಿಗೆ ಬುಧವಾರ ಬೆಂಗಳೂರಿನಲ್ಲಿ ಸುತ್ತಾಟ( Bangalore Rounds) ನಡೆಸಿದರು. ಅಧಿಕಾರಿಗಳು, ಗುತ್ತಿಗೆದಾರರ ವಿರುದ್ದ ಚಾಟಿಯನ್ನೂ ಬೀಸಿದರು.

ಬೆಂಗಳೂರು ಸುತ್ತಾಟ ನಡೆಸಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು ಸುತ್ತಾಟ ನಡೆಸಿದ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬೆಂಗಳೂರು: ಇನ್ನೇನು ಮಳೆಗಾಲ ಶುರುವಾಗಲಿದೆ. ಬೆಂಗಳೂರಿಗರು ಮಳೆಯಿಂದ ಅನುಭವಿಸಬಹುದಾದ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನಗರ ಪ್ರದಕ್ಷಿಣೆ ಹಾಕಿದರು. ಸಚಿವರು ಹಾಗೂ ಅಧಿಕಾರಗಳ ತಂಡದೊಂದಿಗೆ ಬಿಎಂಟಿಸಿ ಬಸ್‌ನಲ್ಲಿ ವಿಜಯನಗರ, ನಾಯಂಡಹಳ್ಳಿ, ಶಾಂತಿನಗರ, ಬಿಟಿಎಂ ಲೇಔಟ್‌, ಬೊಮ್ಮನಹಳ್ಳಿ , ಈಜಿಪುರ ಸಹಿತ ಹಲವು ಕಡೆ ಮೂರು ಗಂಟೆಗೂ ಹೆಚ್ಚು ಕಾಲ ಸುತ್ತು ಹಾಕಿ ಸಮಸ್ಯೆಗಳನ್ನು ಖುದ್ದು ಕಂಡರು. ಸ್ಥಳದಲ್ಲೇ ಪರಿಹಾರವನ್ನೂ ಸೂಚಿಸಿದರು. ಕೆಲವು ಯೋಜನೆಗಳಿಗೆ ಗಡುವು ನೀಡಿದರು. ಸಮಸ್ಯೆಯಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು. ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಗೆ ಅಮಾನತುಗೊಳಿಸುವ ಚಾಟಿಯನ್ನೂ ಬೀಸಿದರು.

ರಾಜಕಾಲುವೆ ಸರಿಪಡಿಸಿ

ವಿಜಯನಗರ ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದೆ.ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸಬೇಕು. ಸಮಸ್ಯೆ ಬಗೆಹರಿಸಲು ಕೊಟ್ಟ ಕಾಲ ಮಿತಿ ಮಳೆಗಾಲದೊಳಗೆ ಪೂರ್ಣಗೊಳಿಸಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಆಗಬೇಕು. ಇಲ್ಲದೊದ್ದರೆ ಸಸ್ಪೆಂಡ್ ಆಗ್ತೀರ ಎಂದು ಚೀಫ್ ಎಂಜಿನಿಯರ್ ಗೆ ಎಚ್ಚರಿಸಿದರು ಸಿಎಂ.

ನಾಯಂಡಹಳ್ಳಿ ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ. ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡಿ ಈ ವರ್ಷದೊಳಗೆ ಮುಗಿಸುವಂತೆ ಎರಡೂ ಇಲಾಖೆಗಳಿಗೆ ಸೂಚನೆ ನೀಡಿದರು.

ಬೊಮ್ಮನಹಳ್ಳಿ ರಾಜಕಾಲುವೆಯಿಂದ ನೀರು ಹೊರಗೆ ಹರಿದು, ಮನೆಗಳಿಗೆ ನೀರು ನುಗ್ಗುವ ಸಮಸ್ಯೆ ಎದುರಾಗಿದ್ದು ಮುಖ್ಯಮಂತ್ರಿಯವರು ನೀಡಿದ ಸೂಚನೆಗಳು: ಇಲ್ಲಿನ ಪ್ರವಾಹ ನಿಯಂತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು. 4.3 ಕೋಟಿ ರೂ. ವೆಚ್ಚದ ಈ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸಲು ಸೂಚಿಸಿದರು.

ಬಿಟಿಎಂ ಮೆಟ್ರೋ ಸ್ಟೇಷನ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ, ಸ್ಥಳ ಪರಿಶೀಲನೆ ವೇಳೆಗೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ - 2 ಟಯರ್‌ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲಿಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದಲ್ಲದೆ, ಸುಗಮ ಸಂಚಾರಕ್ಕಾಗಿ, ಬಿಟಿಎಂ ನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಸೂಚಿಸಿದರು.

ಮೆಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ. ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು. ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10-15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಒಣಗಿದ ಮರ ತೆಗಿಯಿರಿ

ಸಿಟಿ ರೌಂಡ್ಸ್ ವೇಳೆ ಸಿಎಂ‌ ಕಣ್ಣಿಗೆ ರಸ್ತೆ ಬದಿ ಇದ್ದ ಒಣ ಮರಗಳು ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗಬೇಕೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಬನಶಂಕರಿ ಎರಡನೇ ಹಂತದ ನೂರು ಅಡಿ ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್ ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

ಈಜಿಪುರ ಫ್ಲೈ ಓವರ್‌ ಕಾಮಗಾರಿ

ಈಜಿಪುರ ಫ್ಲೈ ಓವರ್‌ ಕಾಮಗಾರಿಯನ್ನು ಪೂರ್ಣಗೊಳಿಸಲು ಪ್ರಸಕ್ತ ಸರ್ಕಾರ ಅಧಿಕಾರಕ್ಕೆ ಬಂದನಂತರ ಏಳು ತಿಂಗಳ ಹಿಂದೆಯೇ ಬಿಎಸ್‌ಸಿಪಿಎಲ್‌ ಎಂಬ ಕಂಪೆನಿಗೆ ಕಾರ್ಯಾದೇಶ ನೀಡಲಾಗಿತ್ತು. ಟೆಂಡರ್‌ ಷರತ್ತಿನ ಪ್ರಕಾರ 15 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕಾಗಿತ್ತು. ಆದರೆ ಕಳೆದ ಆರು ತಿಂಗಳಲ್ಲಿ ಕೇವಲ ಶೇ. 4 ರಿಂದ 6 ರಷ್ಟು ಪ್ರಗತಿಯಾಗಿದೆ. ಈ ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಗುತ್ತಿಗೆದಾರರಿಗೆ ನಿಯಮಾನುಸಾರ ನೋಟಿಸ್‌ ನೀಡಿ, ಸ್ಪಂದಿಸದಿದ್ದರೆ ಕಾನೂನು ಪ್ರಕಾರ ಟೆಂಡರ್‌ ರದ್ದುಪಡಿಸಿ, ಬೇರೆಯವರಿಗೆ ಗುತ್ತಿಗೆ ನೀಡುವಂತೆ ಸೂಚಿಸಿದರು.

ಅಗತ್ಯ ಹಣ ಕೊಟ್ಟಿದ್ದರೂ ಆರು ತಿಂಗಳಲ್ಲಿ ಕೇವಲ ಶೇ. 4 ಕಾಮಗಾರಿ ಮಾಡಿದ್ದೀಯಲ್ಲಾ, ಸಾರ್ವಜನಿಕರಿಗೆ ಆಗುವ ತೊಂದರೆ ಬಗ್ಗೆ ಪ್ರಜ್ಞೆ ಬೇಡ್ವಾ, ನಿನ್ನ ಕೈಲಿ ಆಗದಿದ್ದರೆ ಜಾಗ ಖಾಲಿ ಮಾಡಿ ಎಂದು ಕಂಪನಿ ಪ್ರತಿನಿಧಿಗಳಿಗೆ ಸಿಎಂ ಸ್ಪಷ್ಟ ಎಚ್ಚರಿಕೆ ನೀಡಿದರು.

ಸಿಎಂ ಜತೆಗೆ ಡಿಸಿಎಂ ಡಿಕೆಶಿವಕುಮಾರ್‌, ಸಚಿವರಾದ ರಾಮಲಿಂಗಾರೆಡ್ಡಿ, ಬೈರತಿ ಸುರೇಶ್‌ ಮತ್ತಿತರರು ಹಾಜರಿದ್ದರು.

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner