Mysuru Muda Scam: ಮುಡಾ ಹಗರಣ ಆರೋಪದ ನಿವೇಶನ ಹಂಚಿಕೆ ಸ್ಥಗಿತ, ನನ್ನ ಪಾತ್ರವಿಲ್ಲ ಎಂದ ಸಿಎಂ ಸಿದ್ದರಾಮಯ್ಯ
CM Siddaramaiah ತವರು ಜಿಲ್ಲೆ ಮೈಸೂರಿನ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಗರಣದಲ್ಲಿ ತಮ್ಮ ಹಾಗೂ ಪತ್ನಿ ಹೆಸರು ತಳುಕು ಹಾಕಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ನಿವೇಶನ ಹಂಚಿಕೆಗೆ ತಡೆ ನೀಡಿ ತನಿಖೆ ಚುರುಕುಗೊಳಿಸುವಂತೆ ಆದೇಶಿಸಿದ್ದಾರೆ.
ಬೆಂಗಳೂರು: ಭಾರೀ ವಿವಾದ ಸೃಷ್ಟಿಸಿರುವ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ( Muda) ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಸಹಿತ ಹಲವರಿಗೆ ಹಂಚಿಕೆ ಮಾಡಿದ್ದ ಎಲ್ಲಾ ಬದಲಿ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ ಆರೋಪಗಳನ್ನು ಎದುರಿಸಿದ್ದ ಎಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು, ಆದರೆ ನಿವೇಶನ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇದರಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ . ಈಗ ನಮ್ಮ ವಿರುದ್ದ ಅನಗತ್ಯ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದು ಪ್ರಶ್ನಿಸಿದರು. ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜಿನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜಿನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.
ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ
ಬಿಜೆಪಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್ಐಟಿ ಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜಿನಾಮೆ ಪಡೆಯಲಾಗಿದೆ. ಡೆತ್ ನೋಟಿನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜಿನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.
ಶರಣ ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಅದಕ್ಕಾಗಿಯೇ ಎಸ್ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.
ವಿಭಾಗ